Advertisement

Water Dispute:ಮೇಕೆದಾಟು, ಮಹದಾಯಿಗೆ ಕೇಂದ್ರದಿಂದ ಎಚ್‌ಡಿಕೆ ಅನುಮತಿ ಕೊಡಿಸಲ್ಲವೇಕೆ?: ಸಿಎಂ

10:30 PM Oct 16, 2024 | Team Udayavani |

ಬೆಂಗಳೂರು: ಮೇಕೆದಾಟು ಯೋಜನೆಗೆ ಅನುಮತಿ ಕೊಡಿ ಎಂದು ಕೇಳುತ್ತಲೇ ಇದ್ದೇವೆ. ಮಹದಾಯಿಗೂ ಅನುಮತಿ ಕೇಳಿದ್ದೇವೆ. ಕೇಂದ್ರ ಸರ್ಕಾರ (Union Government) ಅನುಮತಿ ಕೊಡದೆ ಅನ್ಯಾಯ ಮಾಡುತ್ತಿದೆ. ಕೇಂದ್ರ ಸರಕಾರದಲ್ಲಿ ಸಚಿವರಾಗಿರುವ ಎಚ್.ಡಿ.ಕುಮಾರಸ್ವಾಮಿ(H.D.Kumaraswamy)  ಈ ಯೋಜನೆಗಳಿಗೆ ಅನುಮತಿ ಕೊಡಿಸುತ್ತಿಲ್ಲ ಏಕೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದ್ದಾರೆ.

Advertisement

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ (ಟಿಕೆ ಹಳ್ಳಿ) ಯಲ್ಲಿ ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿಯ ಕಾವೇರಿ ಐದನೇ ಹಂತದ ಯೋಜನೆ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿ ಮೇಕೆದಾಟು, ಮಹದಾಯಿ ಯೋಜನೆಗಳಿಗೆ ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿಯ ಸಂಸದರು ಏಕೆ ರಾಜ್ಯದ ಪರ ಧ್ವನಿ ಎತ್ತುತ್ತಿಲ್ಲ. ಕರ್ನಾಟಕಕ್ಕೆ ಏಕೆ ಮಲತಾಯಿ ಧೋರಣೆ ಎಂದು ಕೇಂದ್ರ ಸರ್ಕಾರವನ್ನು ಇವರ‌್ಯಾರೂ ಪ್ರಶ್ನಿಸುತ್ತಿಲ್ಲ ಏಕೆ ಎಂದು ಕೇಳಿದರು.

ಕೇಂದ್ರದ ತೆರಿಗೆ ಹಂಚಿಕೆ ಅನ್ಯಾಯ ಬಗ್ಗೆ ಮತ್ತೆ ಪ್ರಸ್ತಾಪ:
ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದ ತೆರಿಗೆಯಲ್ಲಿ ನಮಗೆ ಅನ್ಯಾಯ ಆಗಿದೆ. ಕೇಂದ್ರ, ರಾಜ್ಯಗಳಿಗೆ ಬಿಡುಗಡೆ ಮಾಡಿರುವ ತೆರಿಗೆ ಪಾಲಿನಲ್ಲಿ ಉತ್ತರ ಪ್ರದೇಶ, ಮಧ್ಯಪ್ರದೇಶಕ್ಕೆ ಬಹುಪಾಲು ಹೋಗಿ ರಾಜ್ಯಕ್ಕೆ ಅನ್ಯಾಯ ಮಾಡಿ ಮಲತಾಯಿ ಧೋರಣೆ ತೋರಿದೆ.  ಪ್ರತಿ ವರ್ಷ 4 ಲಕ್ಷ ಕೋಟಿಗೂ ಅಧಿಕ ತೆರಿಗೆ ಕೇಂದ್ರಕ್ಕೆ ಕೊಡುತ್ತಿದ್ದೀವಿ. ಆದರೆ ವಾಪಸ್ ನಮಗೆ ಬರುತ್ತಿರುವುದು ₹60 ಸಾವಿರ ಕೋಟಿ ಮಾತ್ರ. 100 ಪೈಸೆಗೆ 15 ಪೈಸೆ ಮಾತ್ರ ವಾಪಸ್ ಬರುತ್ತಿದೆ. ಇದು ಅನ್ಯಾಯ ಅಲ್ವಾ? ಏಕೆ ಬಿಜೆಪಿ ಸಂಸದರು ಪ್ರಶ್ನಿಸುತ್ತಿಲ್ಲ? ಎಂದು ಸಭೆಯಲ್ಲಿ ಪ್ರಶ್ನಿಸಿದರು.

ಎಚ್‌ಡಿಕೆ ಸಿಎಂ ಆಗಿದ್ದಾಗ ಹಣ ಬಿಡುಗಡೆ ಮಾಡದೇ ನಿರಾಸಕ್ತಿ:
ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆ 2014ರಲ್ಲಿ ನಾನೇ ಶಂಕುಸ್ಥಾಪನೆ ಮಾಡಿದ್ದೆ, ಇಂದು ನನ್ನಿಂದಲೇ ಉದ್ಘಾಟನೆಯಾಗಿದೆ. ನಾನು ನುಡಿದಂತೆ ನಡೆದಿದ್ದಕ್ಕೆ ಮತ್ತೊಂದು ಸಾಕ್ಷಿ ನಿಮ್ಮ ಮುಂದಿದೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಮತ್ತು ಹಿಂದಿನ ಸರ್ಕಾರಗಳು ಅಗತ್ಯ ಹಣ ಬಿಡುಗಡೆ ಮಾಡದೆ ನಿರಾಸಕ್ತಿ ವಹಿದಿದ್ದರಿಂದ ಯೋಜನೆ ನಿಧಾನವಾಯಿತು. ಮತ್ತೆ ನಾವು ಅಧಿಕಾರಕ್ಕೆ ಬಂದು ಯೋಜನೆ ಲೋಕಾರ್ಪಣೆಗೊಳಿಸಿ 110 ಹಳ್ಳಿಗಳಿಗೆ ನೀರು ಒದಗಿಸಿದ್ದೇವ ಎಂದು ಹೇಳಿದರು.

ಕಾವೇರಿಯ ಆರನೇ ಹಂತದ ಯೋಜನೆಯನ್ನೂ ಕೈಗೆತ್ತಿಕೊಳ್ಳಲು ಈಗಾಗಲೇ ಸೂಚನೆ ನೀಡಿದ್ದೇನೆ. ನಾವು ನುಡಿದಂತೆ ನಡೆಯುತ್ತೇವೆ. ನಾವು ಸುಳ್ಳು ಹೇಳಿ ಅಧಿಕಾರಕ್ಕೆ ಬರುವುದಿಲ್ಲ. ಅಧಿಕಾರಕ್ಕೆ ಬಂದು ನುಡಿದಂತೆ ನಡೆದು ಜನರ ಕೆಲಸ ಮಾಡಿ ತೋರಿಸಿದ್ದೇವೆ. ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ. ಈ ವೇಗಕ್ಕೆ ತಕ್ಕಂತೆ ಮೂಲಭೂತ ಸವಲತ್ತು ಒದಗಿಸುವ ಸವಾಲು ನಮ್ಮ ಸರ್ಕಾರ ಸ್ವೀಕರಿಸಿ, ಯಶಸ್ವಿಯಾಗಿ ನಿಭಾಯಿಸುತ್ತೇವೆ. ಕಾವೇರಿ ಕುಡಿಯುವ ನೀರಿನ ಆರನೇ ಹಂತದ ಯೋಜನೆಯಿಂದ 500 ಎಂಎಲ್‌ಡಿ ಕುಡಿಯುವ ನೀರು ಬೆಂಗಳೂರಿಗರಿಗೆ ಸಿಗುತ್ತದೆ. ಇದನ್ನೂ ಘೋಷಿಸಿದ್ದೀವಿ, ಜಾರಿ ಮಾಡಿ ತೋರಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next