Advertisement

ನೀರಿನ ಸಮಸ್ಯೆ: ತ್ವರಿತ ಕ್ರಮಕ್ಕೆ ಸಿಇಒ ಸೂಚನೆ

09:52 PM Apr 07, 2019 | Team Udayavani |

ಹಾಸನ: ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಅಗತ್ಯ ಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎನ್‌. ವಿಜಯಪ್ರಕಾಶ್‌ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಜಿಪಂ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆಯ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸಲು ಹೋಬಳಿ ಮಟ್ಟದಲ್ಲಿ ಅಥವಾ 3 ರಿಂದ 4 ಗ್ರಾಮ ಪಂಚಾಯಿತಿಗೆ ಒಬ್ಬರಂತೆ ತಾಲೂಕು ಮಟ್ಟದ ಅಧಿಕಾರಿಗಳನ್ನು ನೋಡಲ್‌ ಅಧಿಕಾರಿಗಳನ್ನಾಗಿ ನೇಮಿಸಬೇಕು.

ನೋಡಲ್‌ ಅಧಿಕಾರಿಗಳು ವಾರಕ್ಕೊಮ್ಮೆ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಪ್ರತಿ ಶನಿವಾರ ಸಂಜೆ ಕುಡಿಯುವ ನೀರಿನ ಬಗ್ಗೆ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ವರದಿ ನೀಡಬೇಕು. ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್‌ಗ‌ಳನ್ನು ಗುರುತಿಸಬೇಕು ಎಂದು ಹೇಳಿದರು.

ನೀರಿನ ಗುಣಮಟ್ಟ ಪರಿಶೀಲಿಸಿ: ಶುದ್ಧ ಕುಡಿಯುವ ನೀರಿನ ಘಟಕವಿರುವ ಸ್ಥಳಗಳಲ್ಲಿ ಪ್ರತಿ 15 ದಿನಕ್ಕೊಮ್ಮೆ ನೀರಿನ ಗುಣಮಟ್ಟವನ್ನು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ನೀರು ಕುಡಿಯುವುದಕ್ಕೆ ಯೋಗ್ಯವಾಗಿದೆಯೇ ಎಂಬ ಬಗ್ಗೆ ಖಾತರಿಪಡಿಸಿಕೊಳ್ಳಬೇಕು.

ಅನಿವಾರ್ಯ ಕಾರಣಗಳಿಂದ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುತ್ತಿದ್ದಲ್ಲಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಿದ ಬಗ್ಗೆ ಪ್ರತಿ ವಾರವೂ ನಿಯಮನುಸಾರ ಬಿಲ್ಲನ್ನು ಸಂಬಂಧಪಟ್ಟ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಂದ ಪಡೆದು ಜಿಲ್ಲಾಧಿಕಾರಿಯವರಿಗೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದರು.

Advertisement

ಕುಡಿಯುವ ನೀರಿನ ಸಮಸ್ಯೆ ಬಂದಾಗ ಕಾರ್ಯನಿರ್ವಾಹಕ ಅಧಿಕಾರಿ, ತಹಶೀಲ್ದಾರ್‌, ಗ್ರಾಮೀಣ ಕುಡಿಯುವ ನೀರು ಪೂರೈಕೆ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಖುದ್ದಾಗಿ ಗ್ರಾಮಕ್ಕೆ ಭೇಟಿ ನೀಡಬೇಕು.

ಬೋರ್‌ವೆಲ್‌ನಲ್ಲಿ ನೀರಿನ ಇಳುವರಿ ಕಡಿಮೆಯಾದಲ್ಲಿ ಆಳಗೊಳಿಸುವುದು, ಸ್ವತ್ಛಗೊಳಿಸುವುದರ ಜವಾಬ್ದಾರಿ ಗ್ರಾಮ ಪಂಚಾಯತಿಯದ್ದಾಗಿದ್ದು, ವೆಚ್ಚವನ್ನು ಗ್ರಾಮ ಪಂಚಾಯತಿಯಿಂದ ಭರಿಸಬೇಕು ಎಂದರು.

ಪಿಡಿಒಗಳ ಜವಾಬ್ದಾರಿ: ಗ್ರಾಮ ಪಂಚಾಯತಿಗಳಿಗೆ 14ನೇ ಹಣಕಾಸು ಯೋಜನೆಯಡಿ ಬಿಡುಗಡೆಯಾಗುತ್ತಿರುವ ಅನುದಾನವನ್ನು ಸರ್ಕಾರದ ಆದೇಶದಂತೆ ಕುಡಿಯುವ ನೀರಿಗಾಗಿ ಕಡ್ಡಾಯವಾಗಿ ವೆಚ್ಚ ಮಾಡುವ ನಿಟ್ಟಿನಲ್ಲಿ ಮೋಟಾರು, ಪಂಪು ಖರೀದಿ, ರಿಪೇರಿ, ಪೈಪ್‌ ಲೈನ್‌ ಅಳವಡಿಸುವುದು ಮತ್ತಿತರ ಕಾಮಗಾರಿಗಳನ್ನು ಕೈಗೊಳ್ಳವುವುದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ ಎಂದರು.

ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಗಮನ ಹರಿಸದೆ ನಿರ್ಲಕ್ಷಿಸುವ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕೂಡಲೇ ನೀರಿನ ಸಮಸ್ಯೆ ಪರಿಹರಿಸಿ: ಕುಡಿಯುವ ನೀರಿನ ಯಾವುದೇ ದೂರುಗಳು ಬಂದಲ್ಲಿ ತಕ್ಷಣ ಬಗೆಹರಿಸಲು ಸಂಬಂಧಪಟ್ಟ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ಕಾರ್ಯಪಾಲಕ ಅಭಿಯಂತರರು (ಕುಡಿಯುವ ನೀರು) ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿಯವರನ್ನು ಸಂಪರ್ಕಿಸಿ ಸಮಸ್ಯೆಯನ್ನು ಬಗೆಹರಿಸಲು ಕ್ರಮ ಕೈಗೊಂಡು ಅಂತಹ ವಿಷಯಗಳನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ತರಲು ಜಿಲ್ಲಾ ಪಂಚಾಯತ್‌ನಲ್ಲಿ ಕಾರ್ಯನಿರ್ವಸುತ್ತಿರುವ ಲಕ್ಷ್ಮೀ,

-ಸಹಾಯಕ ಕಾರ್ಯದರ್ಶಿ (ಅಭಿವೃದ್ಧಿ) ಅವರನ್ನು ನೇಮಿಸಲಾಗಿದೆ ಅವರ ದೂ. 9480867002/9480867005 ಕುಡಿಯುವ ನೀರಿನ ಸಮಸ್ಯೆಗಳು ಅಥವಾ ಜಿಲ್ಲಾ ಪಂಚಾಯತ್‌ ವ್ಯಾಪ್ತಿಯ ಇತರೆ ಗಂಭೀರ ಷಯಗಳಿದ್ದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಲಕ್ಷ್ಮಿ ಅವರನ್ನು ಸಂಪರ್ಕಿಸಬೇಕೆಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next