Advertisement

ನೀರಿನ ಸಮಸ್ಯೆ ಶಾಶ್ವತ ಪರಿಹಾರಕ್ಕೆ ತಾಕೀತು

12:23 PM Aug 18, 2018 | |

ವಿಜಯಪುರ: ಜಿಲ್ಲೆಯಲ್ಲಿ ಟ್ಯಾಂಕರ್‌ ಮೂಲಕ ಕುಡಿಯುವ ಪೂರೈಕೆ ಆಗುತ್ತಿರುವ ವಿವಿಧ ಗ್ರಾಮಗಳಿಗೆ ಕುಡಿಯುವ ನೀರಿನ ಶಾಶ್ವತ ಪರಿಹಾರಕ್ಕೆ ಮುಂದಾಗಬೇಕು. ಕೂಡಲೇ ವಿವಿಧ ಕಂದಾಯ ಇಲಾಖೆ ನೇತೃತ್ವದಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ತಂಡ ತಕ್ಷಣ ಜಂಟಿ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹ್ಮದ್‌ ಮೊಹಸೀನ್‌ ಸೂಚಿಸಿದ್ದಾರೆ.

Advertisement

ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಬೇಕು. 90 ದಿನಗಳು ನೀರು ಸರಬರಾಜಾದ ತಕ್ಷಣ ನೀರು ಸ್ಥಗಿತಗೊಳಿಸದೇ ಆಯಾ ಗ್ರಾಮಗಳಲ್ಲಿ ಕುಡಿಯುವ ನೀರಿನ ಅವಶ್ಯಕತೆ ಬಗ್ಗೆ ವಸ್ತುಸ್ಥಿತಿ ಪರಿಶೀಲಿಸಬೇಕು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಇರುವ ಪ್ರದೇಶಗಳಲ್ಲಿ ಎಷ್ಟು ದಿನ ನೀರು ಪೂರೈಕೆ ಸಾಧ್ಯ, ಶಾಶ್ವತ ಪರಿಹಾರಕ್ಕೆ ಕೈಗೊಳ್ಳಬೇಕಿರುವ ಕ್ರಮಗಳೇನು ಎಂದು ಅಧಿಕಾರಿಗಳು ಯೋಜನೆ ರೂಪಿಸಿ ಎಂದರು. ಜಿಲ್ಲೆಯ ಆಯಾ ಎಲ್ಲಾ ತಹಶೀಲ್ದಾರ್‌ರು, ತಾಪಂ ಇಒ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.

ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿ ರೈತರ ಅನುಕೂಲಕ್ಕಾಗಿ ಅಲ್ಪಾವಧಿ ಬೆಳೆ, ಹೆಚ್ಚು ಇಳುವರಿಯ ಬೆಳೆ, ಮಾರುಕಟ್ಟೆ ವ್ಯವಸ್ಥೆ ಕುರಿತು ಸೂಕ್ತ ತಿಳಿವಳಿಕೆ ನೀಡಬೇಕು. ಹವಾಮಾನಕ್ಕೆ ತಕ್ಕಂತೆ ಬೆಳೆಗಳನ್ನು ಬೆಳೆಯುವ ಬಗ್ಗೆಯೂ ಸೂಕ್ತ ಜಾಗೃತಿ ಮೂಡಿಸಲು ತಿಳಿಸಿದ ಅವರು, ಹೋಬಳಿವಾರು ವಿಶೇಷ ಕಾರ್ಯಾಗಾರಗಳನ್ನು ಏರ್ಪಡಿಸಿ ರೈತರಿಗೆ ಸೂಕ್ತ ಸಲಹೆ ನೀಡುವಂತೆ ಸೂಚಿಸಿದರು.

ಅತಿವೃಷ್ಟಿ-ಅನಾವೃಷ್ಟಿ ಸೇರಿದಂತೆ ಪ್ರಕೃತಿ ವಿಕೋಪದಿಂದ ತೋಟಗಾರಿಕಾ ಬೆಳೆಗಳ ಹಾನಿ ಸಮೀಕ್ಷೆ ತ್ವರಿತಗೊಳಿಸಬೇಕು. ತಹಶೀಲ್ದಾರ್‌ರು, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಸೂಕ್ತ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು.

Advertisement

ಸಾಮಾಜಿಕ ಭದ್ರತಾ ಯೋಜನೆಯಡಿ ಸಕಾಲಕ್ಕೆ ಸೌಲಭ್ಯ ಆಯಾ ಫಲಾನುಭವಿಗಳಿಗೆ ದೊರೆಯಬೇಕು. ಇದಕ್ಕಾಗಿ ತಾಲೂಕವಾರು ಕಡ್ಡಾಯವಾಗಿ ಕಂದಾಯ, ಪಿಂಚಣಿ ಅದಾಲತ್‌ ತಾಲೂಕಾವಾರು ನಡೆಸಬೇಕು. ಸಾರ್ವಜನಿಕರ ಅಹವಾಲು ಸ್ವೀಕಾರಕ್ಕೆ ಪ್ರತಿ ತಾಲೂಕಾವಾರು ಸಮಯ ನಿಗದಿ ಮಾಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ತ್ವರಿತ ಇತ್ಯರ್ಥ ಮಾಡಬೇಕು.

ಜಿಲ್ಲಾಮಟ್ಟದ ಅಧಿಕಾರಿಗಳು ತಾಲೂಕು ಮಟ್ಟದ ತಮ್ಮ ಅಧೀನ ಕಚೇರಿಗಳಿಗೂ ನಿರಂತರ ಭೇಟಿ ನೀಡಿ ಸಾರ್ವಜನಿಕರ ಕುಂದು-ಕೊರತೆ, ಅಹವಾಲುಗಳು ಸಕಾಲಕ್ಕೆ ಪರಿಹರಿಸುವ ಜೊತೆಗೆ ಈ ಕುರಿತು ಮೇಲಾಧಿಕಾರಿಗಳಿಗೂ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.

ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿಗೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಖಜಾನೆ ಮೂಲಕ 15 ಕೋಟಿ ರೂ. ಬಿಡುಗಡೆ ಮಾಡಿದೆ. ಅಂಚೆ ಕಚೇರಿ ವ್ಯಾಪ್ತಿಯಲ್ಲಿ ಪಿಂಚಣಿ ಸೌಲಭ್ಯ ಕಲ್ಪಿಸುವ ಕುರಿತಂತೆ ಫಲಾನುಭವಿಗಳಿಗೆ ಸಕಾಲಕ್ಕೆ ಸೌಲಭ್ಯ ದೊರೆಯುತ್ತಿಲ್ಲ ಎಂಬ ದೂರುಗಳಿವೆ. ಹೀಗಾಗಿ ಜಿಲ್ಲಾ ಅಂಚೆ ಇಲಾಖೆ ಅಧಿಕಾರಿಗಳು ಈ ಕುರಿತು ಸೂಕ್ತ ಗಮನ ಹರಿಸಿ, ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಿ ಎಂದು ಸೂಚಿಸಿದರು.

ಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಸಮನ್ವಯತೆ ಸಾಧಿಸಿ ಸ್ವಂತ ಕಟ್ಟಡವಿಲ್ಲದ ಅಂಗನವಾಡಿ ಕೇಂದ್ರಗಳನ್ನು ಸ್ಥಳೀಯವಾಗಿರುವ ಪ್ರಾಥಮಿಕ ಶಾಲಾ ಕಟ್ಟಡಗಳಿಗೆ ಸ್ಥಳಾಂತರ ಮಾಡಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಬೇಕು ಎಂದು ಸೂಚಿಸಿದರು. ಜಿಲ್ಲಾಧಿಕಾರಿ ಎಸ್‌.ಬಿ. ಶೆಟ್ಟೆಣ್ಣವರ, ಜಿಪಂ ಸಿಇಒ ವಿಕಾಸ ಕಿಶೋರ ಸುರಳಕರ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಅಧಿಕಾರಿಗಳು ಇದ್ದರು

Advertisement

Udayavani is now on Telegram. Click here to join our channel and stay updated with the latest news.

Next