ಮೈಸೂರು: ಕೆಆರ್‌ಎಸ್ ಮತ್ತು ಕಬಿನಿ ಅಚ್ಚುಕಟ್ಟು ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಕಾಡಾ ಮುಖ್ಯ ಎಂಜಿನಿಯರ್ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು.
ಕಾವೇರಿ ಅಚ್ಚುಕಟ್ಟು ಪ್ರದೇಶದ ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳ ಅಚ್ಚುಕಟ್ಟು ನಾಲೆಗಳಿಗೆ ನೀರು ಹರಿಸುವ ಮೂಲಕ ಬೆಳೆದು ನಿಂತಿರುವ ಬೆಳೆಗಳ ರಕ್ಷಣೆ, ಜನ-ಜಾನುವಾರುಗಳ ಕುಡಿಯುವ ನೀರಿಗಾಗಿ ಕೆರೆ-ಕಟ್ಟೆಗಳನ್ನು ತುಂಬಿಸಲು ತಕ್ಷಣವೇ ಕ್ರಮಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ಕೆಆರ್‌ಎಸ್ ಜಲಾಶಯದಲ್ಲಿ 20ಟಿಎಂಸಿಗೂ ಹೆಚ್ಚು, ಕಬಿನಿ ಜಲಾಶಯದಲ್ಲಿ 79 ಅಡಿ ನೀರಿನ ಸಂಗ್ರಹವಿದೆ. ಕಾವೇರಿ ನ್ಯಾಯಮಂಡಳಿ ತೀರ್ಪಿನ ಅನುಸಾರ ಈಗಾಗಲೇ ತಮಿಳುನಾಡಿಗೆ ನೀರು ಹರಿಸಲಾಗಿದೆ. ಆದ್ದರಿಂದ ಈ ಎರಡೂ ಜಲಾಶಯಗಳಲ್ಲಿ ಸಂಗ್ರಹವಿರುವ ನೀರನ್ನು ರೈತರ ಜಮೀನಿನಲ್ಲಿ ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗಾಗಿ ನಾಲೆಗಳಲ್ಲಿ ಹರಿಸಬೇಕು.
ಒಂದು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದು ನಿಂತಿರುವ ಬೆಳೆಗಳನ್ನು ಉಳಿಸಲು ಹಾಗೂ ಕೆರೆ ಕಟ್ಟೆಗಳಿಗೆ ನೀರು ತುಂಬಿಸಲು ಕೂಡಲೇ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ರೈತರೇ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಭರವಸೆ: ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿದ ಉಪ ಮುಖ್ಯ ಎಂಜಿನಿಯರ್ ಮಲ್ಲಿಕಾರ್ಜುನಯ್ಯ, ಕಬಿನಿ ಜಲಾಶಯದ ಅಧೀಕ್ಷಕ ಇಂಜಿನಿಯರ್ ಚಂದ್ರಶೇಖರ್, ಈ ಬಗ್ಗೆ ಕೂಡಲೇ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.
ಸಂಘದ ರಾಜ್ಯಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಗಸೂರು ಶಂಕರ್, ಜಿಲ್ಲಾ ಉಪಾಧ್ಯಕ್ಷ ಕೆರೆಹುಂಡಿ ರಾಜಣ್ಣ, ಕಾರ್ಯದರ್ಶಿ ಪರಶಿವಮೂರ್ತಿ, ತಾಲೂಕು ಅಧ್ಯಕ್ಷ ಕುರುಬೂರು ಸಿದ್ಧೇಶ್, ಕೃಷ್ಣೇಗೌಡ ವರಕೋಡು, ಹೆಗ್ಗೂರು ರಂಗರಾಜ್,
ಅಂಬಳೆ ಮಂಜುನಾಥ್, ಮಹದೇವಸ್ವಾಮಿ, ಅತ್ತಹಳ್ಳಿ ಅರುಣ್‌ಕುಮಾರ್, ಬಿ.ಎಸ್.ಕೃಷ್ಣೇಗೌಎ, ಲಕ್ಷ್ಮೀಪುರ ವೆಂಕಟೇಶ, ಕುರುಬೂರು ಕುಮಾರ್, ಕೃಷ್ಣಪ್ಪ, ಬಸವಣ್ಣ, ವೆಂಕಟರಾಮು, ಜಯರಾಮು, ಬೋರೇಗೌಡ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.