ವಯನಾಡ್(ತಿರುವನಂತಪುರಂ): ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ(Priyanka Gandhi Vadra) ಕೇರಳ ವಯನಾಡಿನ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಬುಧವಾರ (ಅ.23) ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಚುನಾವಣ ರಾಜಕಾರಣ ಪ್ರವೇಶಿಸಿದಂತಾಗಿದೆ.
ಕಾಂಗ್ರೆಸ್ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ, ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ವಿಪಕ್ಷ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಈ ಸಂದರ್ಭದಲ್ಲಿ ಹಾಜರಿದ್ದರು.
ನಾಮಪತ್ರ ಸಲ್ಲಿಕೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಪ್ರಿಯಾಂಕಾ ಗಾಂಧಿ, ವಯನಾಡು ಕ್ಷೇತ್ರದ ಜನತೆ ಅಪಾರ ಪ್ರೀತಿ ತೋರಿಸಿದ್ದಾರೆ. ನಾನು ಅವರಿಗೆ ಚಿರಋಣಿಯಾಗಿದ್ದೇನೆ ಎಂದು ಹೇಳಿದರು.
ಉತ್ತರಪ್ರದೇಶದ ರಾಯ್ ಬರೇಲಿ ಕ್ಷೇತ್ರವನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಉಳಿಸಿಕೊಂಡಿದ್ದು, ವಯನಾಡ್ ಲೋಕಸಭಾ ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ವಯನಾಡ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು.