ಮೈಸೂರು: ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಉಪ ಮುಖ್ಯಮಂತ್ರಿಯೂ ಆಗಿರುವ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ , ಸದ್ಯ ಯಾರಿಗೂ ನೀರು ಬಿಡುವಂತೆ ನಾವು ಇಲ್ಲಿ ಸೂಚನೆ ನೀಡಿಲ್ಲ ಎಂದಿದ್ದಾರೆ.
ಹಾಗೆಯೇ, ಶುಕ್ರವಾರ ಸುಪ್ರೀಂಕೋರ್ಟ್‌ನಲ್ಲಿ ಈ ಬಗ್ಗೆ ವಿಚಾರಣೆ ನಡೆಯಲಿದೆ. ಕೋರ್ಟ್‌ನಿಂದ ಬೈಸಿಕೊಳ್ಳಲು ನಾವು ಸಿದ್ಧರಿಲ್ಲ ಎಂದು ಹೇಳಿದ್ದಾರೆ.
ಪ್ರಾಧಿಕಾರದ ಆದೇಶದ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚನೆ ನಡೆಸಿದ್ದೇನೆ. ನಮ್ಮವರೂ ಸಮರ್ಥ ವಾದ ಮಂಡಿಸಿದ್ದಾರೆ. ತಮಿಳುನಾಡು 24 ಸಾವಿರ ಕ್ಯೂಸೆಕ್‌ಗೆ ಪಟ್ಟು ಹಿಡಿದಿತ್ತು. ಇದನ್ನು 5 ಸಾವಿರ ಕ್ಯೂಸೆಕ್‌ಗೆ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೂ, ನೀರು ಬಿಡುವ ನಿರ್ಧಾರಕ್ಕೆ ಬಂದಿಲ್ಲ. ಸಿಎಂ ಜತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.
ನಮ್ಮ ರೈತರಿಗೂ ಇದರ ಪರಿಸ್ಥಿತಿ ಗೊತ್ತಿದೆ, ನಾವು ರೈತರ ಹಿತ ಕಾಪಾಡಬೇಕಿದೆ. ಜತೆಗೆ ಕಾನೂನನ್ನೂ ಗೌರವಿಸಬೇಕಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರವೂ ಕಾವೇರಿ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ.