ಕೆ.ಆರ್.ಪೇಟೆ: ಮಂಡ್ಯ ಜಿಲ್ಲೆಯ ಜನತೆ ನಮ್ಮ ಕುಟುಂಬದ ಮೇಲೆ ಹೊರಿಸಿರುವ ಋಣ ತೀರಿಸಲು ನಾನು ನಿಮ್ಮ ಮುಂದೆ ಬಂದಿರುವೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದರು.
ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲೇಬೇಕೆಂಬ ಮಹದಾಸೆಯಿಂದ ಜಿಲ್ಲೆಯ ಏಳೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಟ್ಟು ಅವರಿಗೆ ಅಪಾರ ಶಕ್ತಿ ತುಂಬಿದ್ದೀರಿ. ಅದೇ ರೀತಿ ನನಗೂ ಮಂಡ್ಯ ಜಿಲ್ಲೆಯ ಮತದಾರರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನನ್ನನ್ನು ಲೋಕಸಭೆಗೆ ಆಯ್ಕೆ ಮಾಡಿ ಕಳುಹಿಸಬೇಕೆಂದು ಮನವಿ ಮಾಡಿದರು.
ನನ್ನನ್ನು ಆರಿಸಿ ಕಳಿಸಿ: ಜಿಲ್ಲೆಯ ಎಲ್ಲಾ ಶಾಸಕರು, ಹಿರಿಯ ಮುಖಂಡರ ಒತ್ತಡಕ್ಕೆ ಮಣಿದು ನನ್ನನ್ನೇ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಕೂಟ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ. ಹಾಗಾಗಿ ಜಿಲ್ಲೆಯ ಮತದಾರರು ನನ್ನನ್ನು ತಮ್ಮ ಮನೆಯ ಮಗನೆಂದು ತಿಳಿದು ಆಯ್ಕೆ ಮಾಡಿ ಹರಸಬೇಕು.
ಮುಖ್ಯಮಂತ್ರಿಗಳು ಜಿಲ್ಲೆಯ ಅಭಿವೃದ್ಧಿಗೆ 8,761 ಕೋಟಿ ರೂ. ಅನುದಾನ ನೀಡುವ ಮೂಲಕ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಮುಂದಾಗಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಸುಮಾರು 15 ಲಕ್ಷ ರೈತ ಸಹಕಾರ ಸಂಘಗಳ, ಬ್ಯಾಂಕುಗಳ ಸಾಲ ಮನ್ನಾ ಆಗಿದೆ. ಮುಂದಿನ ಆರೇಳು ತಿಂಗಳಲ್ಲಿ ರಾಜ್ಯದ ಎಲ್ಲಾ ರೈತರ ಸಂಪೂರ್ಣ ಸಾಲ ಮನ್ನಾ ಆಗಲಿದೆ ಎಂದು ಹೇಳಿದರು.
ಅಭಿವೃದ್ಧಿಗೆ ಬೆಂಬಲಿಸಿ: ಜಿಲ್ಲೆಯ ಅಭಿವೃದ್ಧಿ ಕೆಲಸಗಳಿಗೂ ಅಂದರೆ ರಸ್ತೆ ಅಭಿವೃದ್ಧಿ, ವಿದ್ಯುತ್, ಕೃಷಿ, ತೋಟಗಾರಿಕೆ, ಶಿಕ್ಷಣ, ಕಂದಾಯ ಕ್ಷೇತ್ರಗಳ ಅಭಿವೃದ್ಧಿಗೂ ಸಾಕಷ್ಟು ಅನುದಾನ ನೀಡುವ ಮೂಲಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಮುಂದಾಗಿದ್ದಾರೆ. ಆದ್ದರಿಂದ ಜಿಲ್ಲೆಯ ಜನತೆ ನನ್ನನ್ನು ಗೆಲ್ಲಿಸುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಕೆಲಸ ಮಾಡಲು ಇನ್ನಷ್ಟು ಶಕ್ತಿ ತುಂಬಬೇಕು ಎಂದು ನಿಖಿಲ್‌ಕುಮಾರಸ್ವಾಮಿ ಮನವಿ ಮಾಡಿದರು.
ಸಭೆಯಲ್ಲಿ ಶಾಸಕ ನಾರಾಯಣಗೌಡ, ತಾಲೂಕು ಜೆಡಿಎಸ್ ಅಧ್ಯಕ್ಷ ಆರ್.ವೆಂಕಟಸುಬ್ಬೇಗೌಡ, ಜೆಡಿಎಸ್ ತಾಲೂಕು ಅಧ್ಯಕ್ಷ ಹೇಮಂತ್‌ಕುಮಾರ್, ಜಿಪಂ ಉಪಾಧ್ಯಕ್ಷೆ ಗಾಯತ್ರಿ, ಸದಸ್ಯರಾದ ದೇವರಾಜು, ಎಚ್.ಟಿ.ಮಂಜು, ಡಾ. ಪ್ರೇಮಕುಮಾರಿ, ರಾಮದಾಸ್, ಚೋಳೇನಹಳ್ಳಿ ಪುಟ್ಟಸ್ವಾಮಿಗೌಡ ಮತ್ತಿತರರಿದ್ದರು.