ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನೀಡಬೇಕು ಎಂದು ನಿರಂತರ ಪ್ರಯತ್ನ ಮಾಡುತ್ತಿದ್ದೇವೆ. ಆಸ್ಪತ್ರೆ ಸಿಗುವವರೆಗೂ ನಿರಂತರ ಪ್ರಯತ್ನ ಮಾಡುತ್ತಲೇ ಇರುತ್ತೇವೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ಇದೆ. ಆಸ್ಪತ್ರೆಗಾಗಿ ನಿತಂತರವಾಗಿ ಪ್ರಯತ್ನ ಮಾಡುತ್ತಿದ್ದೇವೆ. ಈ ಕುರಿತು ಆರೋಗ್ಯ ಸಚಿವ ಸುಧಾಕರ್ ಅವರ ಜೊತೆ ಮಾತನಾಡಿದ್ದೇನೆ. ಅಧಿಕಾರಿಗಳು ಮತ್ತು ಶಾಸಕರ ಜೊತೆ ಚರ್ಚೆ ಮಾಡಿದ್ದೇನೆ. ಮುಖ್ಯಮಂತ್ರಿಯವರ ಜೊತೆ ಚರ್ಚೆ ಮಾಡಿ ಆಸ್ಪತ್ರೆ ಮಂಜೂರು ಮಾಡುವುದಾಗಿ ಸುಧಾಕರ್ ಹೇಳಿದ್ದಾರೆ. ಅಂತಿಮ ನಿರ್ಣಯ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.
ಹಲವು ವರ್ಷಗಳಿಂದ ಆಸ್ಪತ್ರೆ ಮಂಜೂರಾತಿಗೆ ಪ್ರಯತ್ನ ನಡೆಸಲಾಗುತ್ತಿದೆ. ಬಹಳ ನೀರು ಹರಿದು ಹೋಗಿದೆ. ನಿರಂತರ ಪ್ರಯತ್ನ ನಡೆಯಲಿದೆ. ಆಸ್ಪತ್ರೆ ಸಿಗುವವರೆಗೂ ನಿರಂತರ ಪ್ರಯತ್ನ ಮಾಡುತ್ತಲೇ ಇರುತ್ತೇವೆ ಎಂದು ಹೇಳಿದರು.
ಸುಸಜ್ಜಿತ ತುರ್ತು ಚಿಕಿತ್ಸಾ ವ್ಯವಸ್ಥೆಗೆ ಆಗ್ರಹಿಸಿ ಉತ್ತರ ಕನ್ನಡದ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಅಹವಾಲು ಮುಕ್ತ ಮನಸ್ಸಿನಿಂದ ಆಲಿಸಿ ಸಮಸ್ಯೆ ಬಗೆಹರಿಸುವತ್ತ ಕಾರ್ಯಪ್ರವೃತ್ತವಾಗಬೇಕು ಎಂದು ಒತ್ತಾಯಿಸುತ್ತೇನೆ.
-ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲವಿದೆ ಮತ್ತು ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ. ವರ್ಷಗಳ ಕಾಲದ ನ್ಯಾಯಯುತವಾದ ಬೇಡಿಕೆಯನ್ನು ರಾಜ್ಯ ಬಿಜೆಪಿ ಸರ್ಕಾರ ಆದ್ಯತೆ ಮೇರೆಗೆ ಈಡೇರಿಸಬೇಕು.
– ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ