Advertisement

ನೇಮಕಾತಿ ಪರೀಕ್ಷೆಗೂ ಬಂತು ವೆಬ್‌ ಕಾಸ್ಟಿಂಗ್‌: ಇಂದು, ನಾಳೆ ನಿಗಮ-ಮಂಡಳಿ ನೇಮಕಾತಿ ಪರೀಕ್ಷೆ

12:21 AM Jul 13, 2024 | Team Udayavani |

ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರತಿ ಪರೀಕ್ಷಾ ಕೊಠಡಿಯಿಂದ ನಡೆಸಿದ ವೆಬ್‌ಕಾಸ್ಟಿಂಗ್‌ ಪರೀಕ್ಷಾ ಅಕ್ರಮಕ್ಕೆ ಕಡಿವಾಣ ಹಾಕುವಲ್ಲಿ ಯಶ ಕಂಡಿರುವುದರಿಂದ ಪ್ರೇರಿತಗೊಂಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಈಗ ತಾನು ನಡೆಸುತ್ತಿರುವ ನೇಮಕಾತಿ ಪರೀಕ್ಷೆಗಳಿಗೂ ವೆಬ್‌ ಕಾಸ್ಟಿಂಗ್‌ ಅಳವಡಿಸಿಕೊಳ್ಳಲು ಮುಂದಾಗಿದೆ.

Advertisement

ಇದರ ಭಾಗವಾಗಿ ಶನಿವಾರ ಮತ್ತು ರವಿವಾರ ನಡೆಯಲಿರುವ ಬಿಎಂಟಿಸಿ (ಕಲ್ಯಾಣ ಕರ್ನಾಟಕ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವಿವಿಧ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ಕೆಮರಾ ಕಣ್ಗಾವಲಿನಲ್ಲಿ ನಡೆಸಲಿವೆ.

ಬೆಂಗಳೂರು, ಕಲಬುರಗಿ, ಧಾರವಾಡ ಮತ್ತು ಬಳ್ಳಾರಿ ನಗರಗಳ ಒಟ್ಟು 22 ಕೇಂದ್ರಗಳ 377 ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ. ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲೂ ಕೆಮರಾ ಅಳವಡಿಸಿದ್ದು, ವೆಬ್‌ ಕಾಸ್ಟಿಂಗ್‌ ಮೂಲಕ ಅಲ್ಲಿನ ಎಲ್ಲ ಬೆಳವಣಿಗೆಗಳನ್ನು ವೀಕ್ಷಿಸುವ ವ್ಯವಸ್ಥೆಯನ್ನು ಇದೇ ಮೊದಲ ಬಾರಿಗೆ ಮಾಡಲಾಗಿದೆ.

ಈ ಬಗ್ಗೆ ಪತ್ರಿಕಾ ಪ್ರಕಟನೆ ನೀಡಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ, ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಈ ಕ್ರಮ ತೆಗೆದುಕೊಂಡಿದ್ದು ಬೆಂಗಳೂರಿನ ಕೆಇಎ ಕಚೇರಿಯಲ್ಲಿ ರಾಜ್ಯಮಟ್ಟದ ಕಮಾಂಡ್‌ ಸೆಂಟರ್‌ ಸ್ಥಾಪಿಸಿದ್ದೇವೆ. ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲಿ ಆಗುವ ಬೆಳವಣಿಗೆಗಳನ್ನು ಗಮನಿಸಲು ಟಿವಿಗಳನ್ನು ಅಳವಡಿಸಲಾಗಿದೆ. ಮೇಲ್ವಿಚಾರಣೆಗೆ ಸಿಬಂದಿಯನ್ನೂ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಪ್ರಶ್ನೆ ಪತ್ರಿಕೆ ಸ್ವೀಕಾರ ಮತ್ತು ಅದರ ಬಂಡಲ್‌ ತೆರೆಯುವ ಎಲ್ಲ ಪ್ರಕ್ರಿಯೆಯನ್ನೂ ವೆಬ್‌ ಕಾಸ್ಟಿಂಗ್‌ ಮಾಡಲಾಗುತ್ತದೆ. ಅಲ್ಲದೆ, ಅಭ್ಯರ್ಥಿಗಳು ಪರೀûಾ ಕೇಂದ್ರಕ್ಕೆ ಪ್ರವೇಶಿಸುವ ಸಂದರ್ಭದಲ್ಲಿ ಅವರ ಬೆರಳಚ್ಚು ಮತ್ತು ಭಾವಚಿತ್ರವನ್ನು ತೆಗೆದುಕೊಂಡು ಅಲ್ಲೇ ಅದನ್ನು ಅವರು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಗತ್ತಿಸಿರುವ ಚಿತ್ರದ ಜತೆಗೂ ಆನ್‌ಲೈನ್‌ನಲ್ಲಿ ಹೊಂದಾಣಿಕೆ ಮಾಡುವ ವ್ಯವಸ್ಥೆ ಮಾಡಲಾಗಿದೆ. ಹೀಗೆ ಮಾಡುವುದರಿಂದ ಯಾರದೊ ಹೆಸರಿನಲ್ಲಿ ಇನ್ಯಾರೊ ಪರೀಕ್ಷೆ ಬರೆಯುವುದನ್ನು ತಡೆಯಬಹುದು ಎಂದು ತಿಳಿಸಿದ್ದಾರೆ.

Advertisement

ಶನಿವಾರ ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ. ಸುಧಾಕರ್‌ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣ ಪ್ರಕಾಶ ಪಾಟೀಲ್‌ ಅವರು ಕೆಇಎ ಕಚೇರಿಗೆ ಹಾಜರಾಗಿ ಈ ಪ್ರಕ್ರಿಯೆಯನ್ನು ವೀಕ್ಷಿಸಲಿದ್ದಾರೆ ಎಂದು ಎಚ್‌. ಪ್ರಸನ್ನ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next