ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಕೋವಿಡ್ 19 ಸೋಂಕು ಹರಡವುದನ್ನು ತಡೆಗಟ್ಟಲು ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲು ದೆಹಲಿ ಸರ್ಕಾರ ನಿರ್ಧರಿಸಿರುವುದಾಗಿ ಮಂಗಳವಾರ (ಜನವರಿ 04) ತಿಳಿಸಿದೆ.
ಇದನ್ನೂ ಓದಿ:ರಾಜಕೀಯ ಲೆಕ್ಕಾಚಾರ: ಬಿಜೆಪಿ ಚಿಂತನಾ ಬೈಠಕ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಗೈರು?
ದೆಹಲಿಯಲ್ಲಿನ ಕೋವಿಡ್ 19 ಸೋಂಕು ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಿದ ನಂತರ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ(ಡಿಡಿಎಂ) ಈ ನಿರ್ಧಾರ ತೆಗೆದುಕೊಂಡಿರುವುದಾಗಿ ವರದಿ ಹೇಳಿದೆ.
ಕೋವಿಡ್ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಪರಿಣಾಮ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸುತ್ತಿದ್ದೇವೆ. ಅಗತ್ಯ ಸೇವೆಗಳನ್ನು ನಿರ್ಬಂಧಿಸುವ ಸರ್ಕಾರಿ ಅಧಿಕಾರಿಗಳು ಮನೆಯಿಂದಲೇ ಕಾರ್ಯನಿರ್ವಹಿಸಲಿದ್ದಾರೆ ಎಂದು ಡಿಡಿಎಂಎ ಆದೇಶದಲ್ಲಿ ತಿಳಿಸಿದೆ.
ಕೋವಿಡ್ 19 ಸೋಂಕು ಕ್ಷಿಪ್ರವಾಗಿ ಹರಡುತ್ತಿದ್ದು, ಜನರು ಎಚ್ಚರಿಕೆಯಿಂದ ಇರಬೇಕಾಗಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೂ ಕೋವಿಡ್ 19 ಪಾಸಿಟಿವ್ ವರದಿ ಬಂದಿರುವುದಾಗಿ ಹೇಳಿದರು.
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಕೂಡಾ ಹೆಚ್ಚಳವಾಗತೊಡಗಿದೆ. ಕಳೆದ ಎರಡು ದಿನಗಳಲ್ಲಿ ಶೇ.84ರಷ್ಟು ಕೋವಿಡ್ ಪ್ರಕರಣಗಳು ಏರಿಕೆಯಾಗಿರುವುದಾಗಿ ಜೈನ್ ಸೋಮವಾರ ತಿಳಿಸಿದ್ದರು. ಇಂದು 4,000 ಪ್ರಕರಣಗಳು ವರದಿಯಾಗುವ ನಿರೀಕ್ಷೆ ಇದ್ದು, ಪಾಸಿಟಿವಿಟಿ ದರ ಶೇ.6.5ಕ್ಕೆ ಏರಿಕೆಯಾಗುವ ಸಾಧ್ಯತೆ ಇದ್ದಿರುವುದಾಗಿ ಹೇಳಿದರು.