Advertisement

ವೆನ್ಲಾಕ್‌ ಆಸ್ಪತ್ರೆ; ಶೀಘ್ರ ಒಳರೋಗಿ ಸೇವೆ: ಸಚಿವ ಕೋಟ

07:11 AM Jun 27, 2020 | mahesh |

ಮಂಗಳೂರು: ವೆನ್ಲಾಕ್‌ ಜಿಲ್ಲಾಸ್ಪತ್ರೆಯಲ್ಲಿ ಶೀಘ್ರವೇ ಒಳರೋಗಿ ಸೇವೆ ಆರಂಭಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಶುಕ್ರವಾರ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್‌ ನಿರ್ವಹಣೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವೆನ್ಲಾಕ್‌ ಆಸ್ಪತ್ರೆಯನ್ನು ಕೋವಿಡ್‌ಗೆ ನಿಗದಿತ ಆಸ್ಪತ್ರೆಯಾಗಿ ಪರಿಗಣಿಸಿದ್ದರಿಂದ ಇತರ ಸೇವೆ ಗಳನ್ನು ನಿಲ್ಲಿಸಲಾಗಿತ್ತು. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಈ ನಿಟ್ಟಿನಲ್ಲಿ ಹೊರರೋಗಿ ಸೇವೆ ಆರಂಭಿಸಲಾಗಿತ್ತು. ಇದೀಗ ಶೀಘ್ರ ಕನಿಷ್ಠ 100 ಒಳರೋಗಿಗಳ ಸೇವೆ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

Advertisement

ಡಿಸಿ ಸಿಂಧೂ ಬಿ.ರೂಪೇಶ್‌ ಮಾತನಾಡಿ, ಕೋವಿಡ್‌ ರೋಗಿಗಳು ಖಾಸಗಿ ಆಸ್ಪತ್ರೆಗಳಿಗೂ ದಾಖಲಾಗಿ ಚಿಕಿತ್ಸೆ ಪಡೆಯಬಹುದು. ಆಸ್ಪತ್ರೆಯ ನಿಗದಿತ ವೆಚ್ಚವನ್ನು ರೋಗಿಗಳೇ ಭರಿಸಬೇಕಾಗುತ್ತದೆ. ಆಯುಷ್ಮಾನ್‌ಯೋಜನೆಯಡಿ ಚಿಕಿತ್ಸೆ ಪಡೆಯುವವರು ಆರೋಗ್ಯ ಇಲಾಖೆಯ ಶಿಫಾರಸ್ಸಿನೊಂದಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ|ರಾಮಚಂದ್ರ ಬಾಯರಿ ಮಾತನಾಡಿ, ಜಿಲ್ಲೆಯ ಖಾಸಗಿ ಮೆಡಿಕಲ್‌ ಕಾಲೇಜುಗಳು ಈಗಾಗಲೇ ಕೋವಿಡ್‌ ರೋಗಿಗಳಿಗೆ ಚಿಕಿತ್ಸೆ ನೀಡಲು ಮುಂದೆ ಬಂದಿದ್ದು 800 ಹಾಸಿಗೆಗಳು ಚಿಕಿತ್ಸೆಗೆ ಲಭ್ಯವಾಗಲಿವೆ. ಇದಲ್ಲದೇ, ಕೆಲವು ಖಾಸಗಿ ಆಸ್ಪತ್ರೆಗಳು ಕೂಡ ಕೋವಿಡ್‌ ಚಿಕಿತ್ಸೆ ನೀಡುತ್ತಿವೆ. ಐದು ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಹೇಳಿದರು. ವೆನ್ಲಾಕ್‌ ಅಧೀಕ್ಷಕ ಡಾ|ಸದಾಶಿವ, ಉಮಾನಾಥ ಕೋಟ್ಯಾನ್‌, ಡಾ| ಭರತ್‌ ಶೆಟ್ಟಿ, ಎಂ.ಜೆ. ರೂಪಾ, ಡಾ|ಜಗದೀಶ್‌ ಉಪಸ್ಥಿತರಿದ್ದರು.

ದ.ಕ. ಜಿಲ್ಲೆಯಲ್ಲಿ ಪ್ರಸಕ್ತ 142 ಕೊರೊನಾ ಸಕ್ರಿಯ ಪ್ರಕರಣಗಳಿವೆ. 370 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 10 ಮಂದಿ ಮೃತಪಟ್ಟಿದ್ದಾರೆ. ಕೋವಿಡ್‌ ಪರೀಕ್ಷೆಗೆ ಜಿಲ್ಲೆಯಲ್ಲಿ 4 ಖಾಸಗಿ ಹಾಗೂ 1 ಸರಕಾರಿ ಪ್ರಯೋಗಾಲಯಗಳು ಕಾರ್ಯನಿರ್ವಹಿಸುತ್ತಿವೆ.
– ಕೋಟ ಶ್ರೀನಿವಾಸ ಪೂಜಾರಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next