Advertisement

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ: ರಾಜ್ಯ ಸರ್ಕಾರದ ವಿರೋಧ

07:26 PM Dec 04, 2021 | Team Udayavani |

ಬೆಂಗಳೂರು: ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ವಲಯ ಎಂದು ಘೋಷಿಸುವುದರಿಂದ ಈ ಭಾಗದಲ್ಲಿ ವಾಸಿಸುವ ಜನರ ಜೀವನೋಪಾಯಕ್ಕೆ ಧಕ್ಕೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರ್ಕಾರ ಹಾಗೂ ಈ ಭಾಗದ ಜನತೆಯ ಒಕ್ಕೊರಲಿನ ವಿರೋಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದರು.

Advertisement

ಅವರು ಇಂದು ಪಶ್ಚಿಮ ಘಟ್ಟದ ಕಸ್ತೂರಿ ರಂಗನ್ ವರದಿ ಜಾರಿ ಕುರಿತಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಕಾರ್ಮಿಕ ಸಚಿವ ಭೂಪೇಂದರ್ ಯಾದವ್ ಅವರು ನಡೆಸಿದ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು ರಾಜ್ಯದ ಈ ನಿಲುವನ್ನು ಸ್ಪಷ್ಟಪಡಿಸಿದರು.

ಪಶ್ಚಿಮ ಘಟ್ಟ ಪ್ರದೇಶದ ನಿವಾಸಿಗಳು, ಅಧಿಕಾರಿಗಳು ಮತ್ತು ಸಂಬಂಧಪಟ್ಟ ಎಲ್ಲರೊಂದಿಗೆ ಕೂಲಂಕಷವಾಗಿ ಸಮಾಲೋಚನೆ ನಡೆಸಿ ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ರಾಜ್ಯ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ ಎಂಬುದನ್ನು ಸಭೆಯ ಗಮನಕ್ಕೆ ತಂದರು.

ಕರ್ನಾಟಕ ರಾಜ್ಯ ಅತಿ ಹೆಚ್ಚು ಅರಣ್ಯ ಪ್ರದೇಶಗಳನ್ನು ಹೊಂದಿರುವ ರಾಜ್ಯಗಳಲ್ಲಿ ಒಂದು ಎಂಬ ಹೆಗ್ಗಳಿಕೆಯನ್ನು ಹೊಂದಿದೆ. ನಮ್ಮ ಸರ್ಕಾರ ಹಾಗೂ ಜನತೆ ಪಶ್ಚಿಮ ಘಟ್ಟದ ಜೀವ ವೈವಿಧ್ಯದ ಸಂರಕ್ಷಣೆಗೆ ಹೆಚ್ಚಿನ ಕಾಳಜಿ ತೋರಿದ್ದೇವೆ. ಯಾವುದೇ ಕಾಯ್ದೆ ಕಾನೂನು ಜಾರಿಯಾಗುವ ಮುನ್ನವೂ ಈ ಭಾಗದ ಜನರು ಇಲ್ಲಿನ ಪ್ರಕೃತಿಗೆ ಸಹಜವಾದ ಕೃಷಿ, ತೋಟಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದು, ಪರಿಸರ ಸ್ನೇಹಿ ಜೀವನ ಶೈಲಿಯನ್ನು ರೂಢಿಸಿಕೊಂಡಿದ್ದಾರೆ; ಪಶ್ಚಿಮ ಘಟ್ಟದ ಸಂರಕ್ಷಣೆಗೆ ಆದ್ಯತೆ ನೀಡುತ್ತಲೇ ಬಂದಿದ್ದಾರೆ. ಈಗಾಗಲೇ ಜೀವ ವೈವಿಧ್ಯ ಸಂರಕ್ಷಣೆ ಕಾಯ್ದೆ, ಅರಣ್ಯ ಸಂರಕ್ಷಣೆ ಕಾಯ್ದೆ ಮೊದಲಾದ ಹಲವಾರು ಕಾನೂನುಗಳಡಿ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೊಂದು ಕಾನೂನು ಜಾರಿಗೆ ತರುವ ಮೂಲಕ ಈ ಭಾಗದ ಜನರ ಜೀವನೋಪಾಯಕ್ಕೆ ಧಕ್ಕೆ ತರುವುದು ಸರಿಯಲ್ಲ ಎಂದು ಮುಖ್ಯಮಂತ್ರಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.

ಉಪಗ್ರಹ ಸಮೀಕ್ಷೆಯ ಆಧಾರದಲ್ಲಿ ಕಸ್ತೂರಿ ರಂಗನ್ ವರದಿ ರೂಪಿಸಲಾಗಿದೆ. ಆದರೆ ವಸ್ತುಸ್ಥಿತಿ ಇದಕ್ಕಿಂತ ಭಿನ್ನವಾಗಿದೆ. ಪ್ರತಿ ಎಕರೆಯನ್ನು ಪ್ರತ್ಯಕ್ಷವಾಗಿ ಸಮೀಕ್ಷೆ ನಡೆಸುವುದರಿಂದ ಜನರ ಪರಿಸರ ಸ್ನೇಹಿ ಜೀವನಶೈಲಿಯನ್ನು ಗಮನಿಸಬಹುದಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

Advertisement

ಈ ಹಿನ್ನೆಲೆಯಲ್ಲಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ಅಧಿಕಾರಿಗಳು ರಾಜ್ಯಕ್ಕೆ ಭೇಟಿ ನೀಡಿ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಕೇಂದ್ರ ಸಚಿವರು ತಿಳಿಸಿದರು.

ಸಭೆಯಲ್ಲಿ ಸಚಿವರಾದ ಅರಗ ಜ್ನಾನೇಂದ್ರ , ಆನಂದ್ ಸಿಂಗ್, ಮುಖ್ಯಮಂತ್ರಿ ಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಸೇರಿದಂತೆ ಇತರರು ವರ್ಚುವಲ್ ಸಭೆಯಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next