Advertisement

ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಹಿನ್ನಡೆಗೆ ಏನು ಕಾರಣ?

10:15 AM May 15, 2017 | Harsha Rao |

ಬೆಂಗಳೂರು: ಎಸ್ಸೆಸ್ಸೆಲ್ಸಿ ಹಾಗೂ ಪಿಯು ಫ‌ಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಲು ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಸಾಧ್ಯವಾಗಿಲ್ಲ. ರಾಜ್ಯದ ಆಡಳಿತ ಭಾಷೆ ಕನ್ನಡ ಹಾಗೂ ಎಲ್ಲಾ ಇಲಾಖೆಗಳಲ್ಲೂ ಕಡ್ಡಾಯವಾಗಿ
ಇದನ್ನು ಅನುಷ್ಠಾನ ಮಾಡಬೇಕು ಎಂದು ಸರ್ಕಾರವೇ ಆದೇಶ ಹೊರಡಿಸಿದೆ. ಇದಕ್ಕೆ ಶಿಕ್ಷಣ ಇಲಾಖೆಯೂ ಹೊರತಾಗಿಲ್ಲ. ಬಹುತೇಕ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಮಾಧ್ಯಮವೇ ಪ್ರಧಾನವಾಗಿದೆ. ಹೀಗಿದ್ದೂ ಸರ್ಕಾರಿ ಶಾಲೆಗಳ ಏಳ್ಗೆ ಮತ್ತು ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರ ಸೂಕ್ತ ಕಾರ್ಯತಂತ್ರ ರೂಪಿಸದೆ ಇರುವುದರಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಹಿನ್ನೆಡೆ ಅನುಭವಿಸುವಂತಾಗಿದೆ ಎಂಬುದು ಶಿಕ್ಷಣ ತಜ್ಞರ ಅಭಿಪ್ರಾಯವಾಗಿದೆ.

Advertisement

ಫ‌ಲಿತಾಂಶದ ವಿಶ್ಲೇಷಣೆ: 2017ರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸರ್ಕಾರಿ ಪ್ರೌಢಶಾಲೆಯ 2,22,581 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 1,53,301 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಹಾಗೆಯೇ ಖಾಸಗಿ ಶಾಲೆಯ 2,46,409 ವಿದ್ಯಾರ್ಥಿಗಳಲ್ಲಿ 1,98,852 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಒಟ್ಟಾರೆಯಾಗಿ ಖಾಸಗಿ ಶಾಲೆಗಿಂತ ಸರ್ಕಾರಿ ಶಾಲೆಯ ಫ‌ಲಿತಾಂಶ ಶೇ.11.83ರಷ್ಟು ಕಡಿಮೆ ಇದೆ. ಕನ್ನಡ ಮಾಧ್ಯಮದ 5,34,339 ವಿದ್ಯಾರ್ಥಿಗಳಲ್ಲಿ 3,33,777 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಆಂಗ್ಲ ಮಾಧ್ಯಮದ 2,80,925 ವಿದ್ಯಾರ್ಥಿಗಳಲ್ಲಿ 2,21,753
ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಒಟ್ಟು ಫ‌ಲಿತಾಂಶದಲ್ಲಿ ಶೇ.16.47ರಷ್ಟು ಕನ್ನಡ ಮಾಧ್ಯಮ ಕುಸಿತ ಖಂಡಿದೆ.
ಪಿಯುಸಿಯಲ್ಲಿ ಕನ್ನಡ ಮಾಧ್ಯಮದಲ್ಲಿ 2,95,911 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1,20,380 ವಿದ್ಯಾರ್ಥಿಗಳು ಪಾಸಾಗಿದ್ದಾರೆ.

ಆಂಗ್ಲ ಮಾಧ್ಯಮದಲ್ಲಿ 3,83,150 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2,55,311 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇಕಡಾ ವಾರು ಫ‌ಲಿತಾಂಶದಲ್ಲಿ ಕನ್ನಡ ಮಾಧ್ಯಮ ಜಸ್ಟ್‌ ಪಾಸ್‌, ಆಂಗ್ಲ ಮಾಧ್ಯಮ ಫ‌ಸ್ಟ್‌ಕ್ಲಾಸ್‌. ಕನ್ನಡ ಮಾಧ್ಯಮದ ಫ‌ಲಿತಾಂಶ ಶೇ.20.73ರಷ್ಟು ಕಡಿಮೆ ಇದೆ.

ಕಾರ್ಯತಂತ್ರದಲ್ಲಿ ಸೋತಿದೆ: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಫ‌ಲಿತಾಂಶ ಕುಸಿತದ ಬಗ್ಗೆ “ಉದಯವಾಣಿ’ಯೊಂದಿಗೆ ಮಾತನಾಡಿದ ಶಿಕ್ಷಣ ತಜ್ಞ ಡಾ. ವಿ.ಪಿ.ನಿರಂಜನಾರಾಧ್ಯ, ಸರ್ಕಾರಿ ಪ್ರೌಢಶಾಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ ಮಾಡಿಕೊಳ್ಳದೆ ಇರುವುದು ಫ‌ಲಿತಾಂಶ ಕುಸಿತಕ್ಕೆ ಮೂಲ ಕಾರಣ. ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಎಲ್ಲಾ ಸೌಲಭ್ಯದ ಜತೆಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದಾರೆ. ಆದರೆ,
ಸರ್ಕಾರಿ ಪ್ರೌಢಶಾಲೆಯಲ್ಲಿ ಆ ಗುಣಮಟ್ಟ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಕನ್ನಡ ಮಾಧ್ಯಮ ಶಾಲೆಗಳನ್ನು ಸರ್ಕಾರವೇ ನಿರ್ಲಕ್ಷ್ಯ ಮಾಡುತ್ತಿದೆ ಎಂದರು.

ವರ್ಷದಿಂದ ವರ್ಷಕ್ಕೆ ಕಲಾ ವಿಭಾಗದಲ್ಲಿ ವಿದ್ಯಾರ್ಥಿಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ. ವಿಜ್ಞಾನ ಅಥವಾ ಗಣಿತ ವಿಭಾಗದಲ್ಲಿ ಉನ್ನತ ವ್ಯಾಸಂಗವನ್ನು ಕನ್ನಡ ಮಾಧ್ಯಮದಲ್ಲಿ ಮಾಡಲು ಬೇಕಾದ ಯಾವ ವ್ಯವಸ್ಥೆಯೂ ನಮ್ಮಲ್ಲಿ ಇಲ್ಲ. ಬೇರೆ ಬೇರೆ ವಿಷಯಕ್ಕೆ ಸಂಬಂಧಿಸಿದ ಬೇರೆ ಬೇರೆ ಭಾಷೆಯ ಉತ್ಕೃಷ್ಟ ಕೃತಿಗಳನ್ನು ಕನ್ನಡಕ್ಕೆ ಭಾಷಾಂತರ ಮಾಡುವಲ್ಲಿ ಎಡವುತ್ತಿದ್ದೇವೆ. ವಿದೇಶದಲ್ಲಿ ಮಾತೃಭಾಷೆಯ ಶಿಕ್ಷಣಕ್ಕೆ ಬೇಕಾದ ಪಠ್ಯವೂ ಸಿದ್ಧವಿರುತ್ತದೆ. ಆದರೆ, ಆ ವ್ಯವಸ್ಥೆ ರಾಜ್ಯದ ಪಿಯು, ಪದವಿ ಹಾಗೂ ಸ್ನಾತಕೋತ್ತರ ಪದವಿ ಶಿಕ್ಷಣದಲ್ಲಿ  ಮರ್ಪಕವಾಗಿ ಅನುಷ್ಠಾನ ಆಗಿಲ್ಲ. ಭಾಷೆಯ ಉಳಿಗಾಗಿ ಸರ್ಕಾರ ಈ ಹಂತದಲ್ಲೇ ಶ್ರಮಿಸುವ ಅಗತ್ಯವಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next