Advertisement

ರಾಜ್ಯ ಸರ್ಕಾರ ಯಾವುದರಲ್ಲಿ ನಂ.1?

12:33 PM Mar 07, 2018 | Team Udayavani |

ಬೆಂಗಳೂರು: ನಗರದಲ್ಲಿ ದೊಡ್ಡ ಫ್ಲೆಕ್ಸ್‌ಗಳನ್ನು ಹಾಕಿ ನಾವೇ ನಂ. ಒನ್‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ. ಆದರೆ, ಅವರು ಯಾವುದರಲ್ಲಿ ನಂ.1? ಹತ್ಯೆಗಳಲ್ಲೇ, ಗೂಂಡಾ ವರ್ತನೆಯಲ್ಲೇ, ಮಾಫಿಯಾಗಳಲ್ಲೇ? ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್‌ ಪ್ರಶ್ನಿಸಿದರು.

Advertisement

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬೆಂಗಳೂರು ಉಳಿಸಿ ಪಾದಯಾತ್ರೆ ವೇಳೆ ಚಾಮರಾಜಪೇಟೆ ಮತ್ತು ಪದ್ಮನಾಭ ವಿಧಾನಸಭಾ ಕ್ಷೇತ್ರದಲ್ಲಿ ಮಂಗಳವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು. ಕೆಟ್ಟ ಕೆಲಸಗಳಲ್ಲೇ ನಂ.1 ಆಗಿರುವ ಸರ್ಕಾರ ಅದನ್ನು ಮುಚ್ಚಿಕೊಳ್ಳಲು ನಾವೇ ನಂ.1 ಎಂದು ಫ್ಲೆಕ್ಸ್‌ಗಳನ್ನು ಹಾಕಿಕೊಂಡು ತನ್ನ ಬೆನ್ನನ್ನು ತಾನೇ ತಟ್ಟಿಕೊಳ್ಳುತ್ತಿದೆ ಎಂದು ವ್ಯಂಗ್ಯವಾಡಿದರು.

ಪ್ರಧಾನಿ ನರೇಂದ್ರ ಮೋದಿ ಹೋದಲ್ಲೆಲ್ಲಾ ಬಿಜೆಪಿ ಗೆದ್ದು ಕಮಲ ಅರಳಿದರೆ, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಹೋದಲ್ಲೆಲ್ಲಾ ಕಾಂಗ್ರೆಸ್‌ ಪಕ್ಷ ನಿರ್ನಾಮವಾಗುತ್ತಿದೆ. ಕಳೆದ ಲೋಕಸಭೆ ಚುನಾವಣೆ ನಂತರ ನಡೆದ ಬಹುತೇಕ ರಾಜ್ಯಗಳಲ್ಲಿ ಕಾಂಗ್ರೆಸ್‌ ಸೋತು ಸುಣ್ಣವಾಗಿದೆ. ಮುಂದೆ ರಾಜ್ಯದಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲೂ ಇದೇ ಪರಿಸ್ಥಿತಿ ಕಾಂಗ್ರೆಸ್‌ಗೆ ಬರಲಿದ್ದು, ಬಿಜೆಪಿ ಅಧಿಕಾರ ಹಿಡಿಯುವುದು ನಿಶ್ಚಿತ ಎಂದು ಹೇಳಿದರು.

ಅಪರಾಧಗಳ ನಗರ: ರಾಜ್ಯದಲ್ಲಿ ಸೋಲುವ ಭೀತಿಯಲ್ಲಿರುವ ಕಾಂಗ್ರೆಸ್‌ ಎಷ್ಟೊಂದು ಹತಾಶವಾಗಿದೆ ಎಂಬುದು ಇಂದಿನ ಪಾದಯಾತ್ರೆ ವೇಳೆ ಗೊತ್ತಾಗಿದೆ. ಮಾಧ್ಯಮಗಳು ಮತ್ತು ಪೊಲೀಸರ ಸಮ್ಮುಖದಲ್ಲಿ ಕಾಂಗ್ರೆಸ್‌ನ ಕೆಲವು ಕಾರ್ಯಕರ್ತರು ಪಾದಯಾತ್ರೆ ನಡೆಸುತ್ತಿರುವ ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿಗೆ ಮುಂದಾಗಿದ್ದಾರೆ.

ಕಾಂಗ್ರೆಸ್‌ನವರ ದೌರ್ಜನ್ಯದ ಜತೆಗೆ ಕಳೆದ ಐದು ವರ್ಷಗಳಲ್ಲಿ ಬೆಂಗಳೂರನ್ನು ಅಪರಾಧಗಳ ನಗರವಾಗಿ ಪರಿವರ್ತಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕಾರದಲ್ಲಿ ಮುಂದುವರಿಯಲು ಯಾವುದೇ ನೈತಿಕತೆ ಇಲ್ಲ ಎಂದರು. ಪಾದಯಾತ್ರೆ ನೇತೃತ್ವ ವಹಿಸಿರುವ ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಪ್ರಮುಖ ವಿರೋಧಿ.

Advertisement

ರಾಜಧಾನಿಯ ನಾಗರಿಕರಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದ್ದಾರೆ. ಬೆಂಗಳೂರಿನಲ್ಲಿ ಗೂಂಡಾರಾಜ್‌ ಆಡಳಿತ ನಡೆಯುತ್ತಿದ್ದು, ವ್ಯಾಪಕ ಭ್ರಷ್ಟಾಚಾರ ತಾಂಡವಾಡುತ್ತಿದೆ. ಇದರ ವಿರುದ್ಧ ಹೋರಾಟ ನಡೆಸಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೂಗೆದು ಅಭಿವೃದ್ಧಿಪರ ಆಡಳಿತಕ್ಕಾಗಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂದು ಹೇಳಿದರು.

ಸಂಸದ ಪಿ.ಸಿ.ಮೋಹನ್‌, ವಿಧಾನ ಪರಿಷತ್‌ ಸದಸ್ಯ ವಿ.ಸೋಮಣ್ಣ, ವಿಧಾನ ಪರಿಷತ್‌ ಸದಸ್ಯೆ ತಾರಾ ಅನುರಾಧಾ, ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು, ಮಾಜಿ ಶಾಸಕ ನೆ.ಲ.ನರೇಂದ್ರಬಾಬು, ಚಾಮರಾಜಪೇಟೆ ಮಂಡಲ ಬಿಜೆಪಿ ಅಧ್ಯಕ್ಷ ಉದಯ್‌ಕುಮಾರ್‌, ಪಕ್ಷದ ಸಹ ವಕ್ತಾರೆ ಮಾಳವಿಕಾ ಸೇರಿದಂತೆ ನೂರಾರು ಮುಖಂಡರು, ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಕಾಂಗ್ರೆಸ್‌ನಿಂದ ಕಪ್ಪು ಬಾವುಟ ಪ್ರದರ್ಶನ: ಮಂಗಳವಾರ ಬೆಳಗ್ಗೆ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿದ್ದ ಬಿಜೆಪಿ ಪಾದಯಾತ್ರೆ ಮೈಸೂರು ರಸ್ತೆಯಲ್ಲಿ ಸಾಗುತ್ತಿದ್ದಾಗ ಕಾಂಗ್ರೆಸ್‌ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಬಿಜೆಪಿ ವಿರುದ್ಧ ಘೋಷಣೆ ಕೂಗಿದರು
.
ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ಪರಸ್ಪರ ಎದುರು ಬದುರು ಆಗಿ ಮಾತಿನ ಚಕಮಕಿಯಲ್ಲಿ ತೊಡಗಿದ್ದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ಮಧ್ಯಪ್ರವೇಶಿಸಿ ಕಾಂಗ್ರೆಸ್‌ ಕಾರ್ಯಕರ್ತರನ್ನು ಚದುರಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಕಾಂಗ್ರೆಸ್‌ ಕಾರ್ಯಕರ್ತರ ವರ್ತನೆಗೆ ಖಂಡಿಸಿದ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್‌ ಮತ್ತು ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌, ಪಾದಯಾತ್ರೆ ನಡೆಸುವ ಬಗ್ಗೆ ಪೊಲೀಸರಿಂದ ಅನುಮತಿ ಪಡೆಯಲಾಗಿತ್ತು. ಆದರೂ ಕಾಂಗ್ರೆಸ್‌ ಕಾರ್ಯಕರ್ತರು ನುಗ್ಗಿ ಪಾದಯಾತ್ರೆಗೆ ಅಡ್ಡಿಪಡಿಸಿದ್ದಾರೆ. ಪೊಲೀಸರು ಮೂಕ ಪ್ರೇಕ್ಷಕರಂತೆ ನಿಂತು ಅವರು ಪಾದಯಾತ್ರೆಯತ್ತ ನುಗ್ಗಲು ಅವಕಾಶ ಮಾಡಿಕೊಟ್ಟರು. ಈ ಮೂಲಕ ಸರ್ಕಾರದ ವಿರುದ್ಧ ಯಾರೂ ಸೊಲ್ಲೆತ್ತದಂತೆ ಕಾಂಗ್ರೆಸ್‌ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next