ಬೆಂಗಳೂರು: ಸುಧಾರಿತ ತಂತ್ರಜ್ಞಾನಗಳಿಂದ ಹೊಸ ಉದ್ಯೋಗಗಳ ಸೃಷ್ಟಿ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಉದ್ಯಮಿಗಳು ಹೊಸ ಉದ್ಯೋಗಗಳನ್ನು ಸೃಷ್ಟಿಸುವತ್ತ ಗಮನ ಹರಿಸಬೇಕಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.
ನಗರದಲ್ಲಿ ಗುರುವಾರ ನಡೆದ ಫೆಡರೇಷನ್ ಆಫ್ ಹೋಟೆಲ್ ಮತ್ತು ರೆಸ್ಟೋರೆಂಟ್ಸ್ ಅಸೋಸಿಯೇಷನ್ಸ್ ಆಫ್ ಇಂಡಿಯಾ (ಎಫ್ಎಚ್‌ಆರ್‌ಎಐ) ಒಕ್ಕೂಟದ 52ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ನಿರುದ್ಯೋಗ ಸಮಸ್ಯೆ ನಿವಾರಿಸುವುದು ಸವಾಲಾಗಿ ಪರಿಣಮಿಸಿದೆ.
ಆಟೋಮೇಷನ್, ಅನಿಮೇಷನ್ ಸೇರಿದಂತೆ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿನ ಬೆಳವಣಿಗೆಗಳಿಂದ ಹೊಸ ಉದ್ಯೋಗ ಸೃಷ್ಟಿ ಪ್ರಮಾಣ ಕಡಿಮೆಯಾಗಿದೆ. ಇನ್ನೊಂದೆಡೆ ಎಲ್ಲ ಬಗೆಯ ಉದ್ಯಮಗಳಿಗೆ ನುರಿತ ಮಾನವ ಸಂಪನ್ಮೂಲ ಒದಗಿಸಬೇಕಾದ ಜವಾಬ್ದಾರಿಯಿದ್ದು, ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಬೇಕಿದೆ ಎಂದು ಹೇಳಿದರು.
ಮೂಲ ಸೌಕರ್ಯ ಕಲ್ಪಿಸುವಲ್ಲಿ ಕರ್ನಾಟಕವು ದೇಶದ ಐದು ಪ್ರಮುಖ ರಾಜ್ಯಗಳಲ್ಲಿ ಒಂದಾಗಿದೆ. ಬೆಂಗಳೂರು ನಗರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಪಡೆಯಲು ಇಲ್ಲಿ ಲಭ್ಯವಿರುವ ಉದ್ಯಮಕ್ಕೆ ಪೂರಕವಾದ ವೃತ್ತಿಪರ ಮಾನವ ಸಂಪನ್ಮೂಲ ಕಾರಣವಾಗಿದೆ ಎಂದು ತಿಳಿಸಿದರು.
ಆರ್ಟ್ ಆಫ್ ಲಿವಿಂಗ್‌ನ ರವಿಶಂಕರ ಗುರೂಜಿ, “ಜಪಾನಿಯರ ಶಿಸ್ತು, ಜರ್ಮನ್ನರ ತಂತ್ರಜ್ಞಾನ ಸೇರಿದಂತೆ ನಾನಾ ದೇಶಗಳ ಆತಿಥ್ಯ, ಮಾರುಕಟ್ಟೆ ಕೌಶಲ್ಯವನ್ನು ಮೈಗೂಡಿಸಿಕೊಳ್ಳಬೇಕಾದ ಅಗತ್ಯವಿದೆ. ಬಂಡವಾಳ ಆಕರ್ಷಣೆ, ಉದ್ಯಮ ಸ್ಥಾಪನೆಗೆ ಪೂರಕ ವಾತಾವರಣವಿದ್ದರೂ ಉದ್ಯೋಗ ಸೃಷ್ಟಿ ನಿರೀಕ್ಷಿತ ಪ್ರಮಾಣದಲ್ಲಿಲ್ಲ.
ಅಧ್ಯಾತ್ಮ ಪ್ರವಾಸೋದ್ಯಮ, ವೈದ್ಯಕೀಯ ಪ್ರವಾಸೋದ್ಯಮ ಇತರೆ ಕ್ಷೇತ್ರಗಳಿಗೆ ಪ್ರೋತ್ಸಾಹ ನೀಡಿದರೆ ಹೆಚ್ಚು ಉದ್ಯೋಗ ಸೃಷ್ಟಿಸಲು ಅನುಕೂಲವಾಗಲಿದೆ’ ಎಂದು ಹೇಳಿದರು. ಕೇಂದ್ರ ಸಚಿವ ಅನಂತಕುಮಾರ್, ಒಡಿಶಾ ಪ್ರವಾಸೋದ್ಯಮ ಸಚಿವ ಅಶೋಕ್ ಚಂದ್ರಪಾಂಡ ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.