Advertisement
“ವೈಟ್ನರ್ ಹಿಂದಿರುವ ಅಕ್ಷರಗಳೇನು? ಎಂಬುದನ್ನು ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ’ ಎಂದು ಸಿದ್ದರಾಮಯ್ಯ ಮಾಡಿರುವ ಟ್ವೀಟ್‌ಗೆ ಖಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದು ಈ ರಾಜ್ಯದ ಘನತೆವೆತ್ತ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ’ ಎಂದು ಕಾಲೆಳೆದಿದ್ದಾರೆ. ಸಿಎಂ ಮಾಡಿರುವ ಟ್ವೀಟ್‌ನಲ್ಲಿ ಹಾಕಿರುವ ವೀಡಿಯೋದಲ್ಲಿ ಟಾರ್ಚ್ ಬೆಳಕಿರುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಈ ರೀತಿ ಟೀಕಿಸಿದ್ದಾರೆ.ಮುಡಾ ಅಕ್ರಮವಾಗಿ ಸ್ವಾಧೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್ ಹಚ್ಚಿದ್ದನ್ನೇ ಮಹಾನ್ ಅಪರಾಧವೆಂಬಂತೆ ಗಂಟಲು ಹರಿದು ಕೊಂಡ ಬಿಜೆಪಿ -ಜೆಡಿಎಸ್ ನಾಯಕರೇ, ವೈಟ್ನರ್ ಹಿಂದಿರುವ ಅಕ್ಷರಗಳೇನು? ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ, ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ; ಇದರಲ್ಲಿ ಟಿಪ್ಪಣಿಯೂ ಇಲ್ಲ, ಆದೇಶವೂ ಇಲ್ಲ, ಅಪ್ಪಣೆಯೂ ಇಲ್ಲ. ತನಗೆ ಸೇರಿದ ಭೂಮಿಯಲ್ಲೇ ನಿವೇಶನ ಕೊಡಿ ಎಂಬ ಮನವಿ ಅಷ್ಟೆ ಇದೆ ಎಂದು ಸಿಎಂ ತಿಳಿಸಿದ್ದಾರೆ.
ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರು ವುದು ಈ ರಾಜ್ಯದ ಘನತೆವೆತ್ತ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ. ಇದು ಮೂಲ ದಾಖಲೆ, ಮುಡಾದಲ್ಲಿದೆ. ನಿಮ್ಮ ಬಳಿಗೆ ಹೇಗೆ ಬಂತು? ನಿಮಗೆ ಈ ಮೂಲ ದಾಖಲೆ ತಂದು ಕೊಟ್ಟ ಮಹಾಶಯರು ಯಾರು? ಇಷ್ಟಕ್ಕೂ ಈ ಮೂಲ ದಾಖಲೆ ಮುಡಾದಲ್ಲಿದೆಯಾ? ಅಥವಾ ನಿಮ್ಮ ಮನೆಯಲ್ಲಿದೆಯಾ? ಈ ಮೂಲ ದಾಖಲೆಗೆ ಟಾರ್ಚ್ ಹಾಕಿದವರು ಯಾರು? ನೀವಾ..? ಅಥವಾ ಇನ್ನಾರಾದರೂ ಇದ್ದಾರಾ? ನನ್ನ ಪ್ರಶ್ನೆ; ಈ ದಾಖಲೆಯನ್ನೇಕೆ ನೀವು ನ್ಯಾಯಾಲಯಕ್ಕೆ ಕೊಟ್ಟಿಲ್ಲ!? ಜನರನ್ನು ದಿಕ್ಕು ತಪ್ಪಿಸಿದ ಹಾಗೇ ನ್ಯಾಯಾಲಯಕ್ಕೂ ಸುಳ್ಳು ಮಾಹಿತಿ ಕೊಟ್ಟು ಅಲ್ಲಿಯೂ ಟಾರ್ಚ್ ಬಿಟ್ಟು ತೋರಿಸುತ್ತೀರಾ..? ಶಿಶುಪಾಲನ ಹಾಗೆ ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದೀರಿ ಎಂದು ವ್ಯಂಗ್ಯವಾಡಿದ್ದಾರೆ.