ಬೆಂಗಳೂರು: ದೇಶದಲ್ಲಿ 100 ಕೋಟಿ ಡೋಸ್ ಲಸಿಕೆ ವಿತರಣೆ ಪೂರೈಸಿದ ವಿಚಾರಕ್ಕೆ ಕಾಂಗ್ರೆಸ್ ಟೀಕೆ ಮುಂದುವರಿದಿದೆ. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, ಸಂಭ್ರಮಾಚರಣೆಯು ಹಾಸ್ಯಾಸ್ಪದವಾಗಿದೆ ಎಂದು ಟೀಕಿಸಿದ್ದಾರೆ.
ದೇಶದ 139 ಕೋಟಿ ಜನರಲ್ಲಿ 29 ಕೋಟಿ ಜನರಿಗೆ ಮಾತ್ರ ಎರಡು ಡೋಸ್ ಕೊರೊನಾ ಲಸಿಕೆ ನೀಡಿರುವ ನರೇಂದ್ರ ಮೋದಿ ಸರ್ಕಾರ, ಅತ್ಯವಸರದಿಂದ 100 ಕೋಟಿ ಲಸಿಕೆ ನೀಡಿಕೆಯ ಸಂಭ್ರಮಾಚರಣೆಯ ಖಾಲಿ ತಟ್ಟೆ ಬಡಿಯುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದಿದ್ದಾರೆ.
ದೇಶದಲ್ಲಿ ಇಲ್ಲಿಯವರೆಗೆ 29 ಕೋಟಿ ಜನರಿಗೆ ಎರಡು ಡೋಸ್ ಮತ್ತು 42 ಕೋಟಿ ಜನರಿಗೆ ಒಂದು ಡೋಸ್ ಲಸಿಕೆ ಮಾತ್ರ ನೀಡಲಾಗಿದೆ. 139 ಕೋಟಿ ಜನರಲ್ಲಿ 68 ಕೋಟಿ ಜನರಿಗೆ ಇನ್ನು ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ. ಯಾವ ಸಾಧನೆಗೆ ಸಂಭ್ರಮಾಚರಣೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ
ಘೋಷಿತ ಗುರಿಯಂತೆ ದೇಶದ 103 ಕೋಟಿ ವಯಸ್ಕರಿಗೆ ಡಿಸೆಂಬರ್ 31ರೊಳಗೆ 2 ಡೋಸ್ ನೀಡಲು 206 ಕೋಟಿ ಲಸಿಕೆ ಬೇಕಾಗಿದೆ. ಕೊಟ್ಟಿರುವುದು 100 ಕೋಟಿ ಮಾತ್ರ. ಗುರಿ ತಲುಪಲು ಪ್ರತಿದಿನ 1.51 ಕೋಟಿ ಲಸಿಕೆ ನೀಡಬೇಕಾಗಿದೆ ಇದಕ್ಕಾಗಿ ಬೇಕಾಗಿರುವುದು ಸಿದ್ದತೆ, ಖಾಲಿ ತಟ್ಟೆಯ ಪ್ರಚಾರ ಅಲ್ಲ. ಅಮೆರಿಕ 56%, ಚೀನಾ 70% ಜನಸಂಖ್ಯೆಗೆ ಎರಡು ಡೋಸ್ ಕೋವಿಡ್ ಲಸಿಕೆ ನೀಡಿ ಬೂಸ್ಟರ್ ಲಸಿಕೆ ನೀಡುವ ಸಿದ್ದತೆಯಲ್ಲಿದೆ. ಭಾರತದಲ್ಲಿ ಕೇವಲ 21% ಜನಸಂಖ್ಯೆಗೆ ಮಾತ್ರ ಎರಡು ಡೋಸ್ ಲಸಿಕೆ ನೀಡಲಾಗಿದೆ. ಯಾವ ಸಾಧನೆಗೆ ಸಂಭ್ರಮ? ‘ವೈಫಲ್ಯದ ವಿಶ್ವಗುರು’ ಕುಖ್ಯಾತಿಗಾಗಿಯೇ ಎಂದಿದ್ದಾರೆ.
ಸುಳ್ಳು ಸಾಧನೆಗಳ ಖಾಲಿ ತಟ್ಟೆ ಬಡಿಯುತ್ತಾ ದೇಶದ ಜನರನ್ನು ಮರುಳು ಮಾಡುತ್ತಾ ಬಂದ ನರೇಂದ್ರ ಮೋದಿ ಅವರೇ? ಮೊದಲು ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಎರಡು ಡೋಸ್ ಲಸಿಕೆ ನೀಡಲು ಗಂಭೀರವಾಗಿ ಸರ್ಕಾರವನ್ನು ತೊಡಗಿಸಿಕೊಳ್ಳಿ. ಸಾಧನೆಯ ಸಂಭ್ರಮಾಚರಣೆ ಆ ಮೇಲೆ ಮಾಡೋಣ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.