ಮಂಡ್ಯ: ಈ ಬಾರಿ ರಾಜ್ಯದಲ್ಲಿ 136 ಕ್ಷೇತ್ರ ಗೆಲ್ಲಲು ಹಣ, ಸಂಘಟನೆ, ಹೋರಾಟ ಮಾಡಿದವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್. ಐದು ವರ್ಷ ರಾಜ್ಯದಲ್ಲಿ ಆಡಳಿತ ನಡೆಸಿದ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಅವರಿಗೆ ಏಕೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲಿಲ್ಲ ಎಂದು ಸಂಸದ ಪ್ರತಾಪಸಿಂಹ ಪ್ರಶ್ನಿಸಿದರು.
ಪ್ರಚಾರ ಸಭೆಯಲ್ಲಿ ಮಾತನಾಡಿ, ಒಕ್ಕಲಿಗ ಸಮುದಾಯದ ಬಗ್ಗೆ ಮಮತೆ ತೋರಿಸುತ್ತಿರುವ ಸಿದ್ದರಾಮಯ್ಯ ಅವರ ಕಾಂಗ್ರೆಸ್ ಪಕ್ಷದ ನಿಯಮದ ಪ್ರಕಾರ ಕೆಪಿಸಿಸಿ ಅಧ್ಯಕ್ಷರಾದವರನ್ನು ಮುಖ್ಯಮಂತ್ರಿ ಮಾಡಬೇಕು. ಇದೇ ನಿಯಮದಂತೆ ಹಿಂದೆ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದರು ಎಂದರು.
ಕಾವೇರಿಗಾಗಿ ಮಾಜಿ ಪ್ರಧಾನಿ ದೇವೇಗೌಡರು ಇಳಿವಯಸ್ಸಿನಲ್ಲಿ ಏರು ಧ್ವನಿಯಲ್ಲಿ ಮಾತನಾಡುತ್ತಾರೆ. ಆ ತಾಕತ್ತನ್ನು ಸಿದ್ದರಾಮಯ್ಯ ಎಂದಾದರೂ ಪ್ರದರ್ಶಿಸಿದ್ದಾರೆಯೇ ಎಂದು ಪ್ರಶ್ನಿಸಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಆದಾಗಲೆಲ್ಲ ರಾಜ್ಯದಲ್ಲಿ ಬರ ತಾಂಡವವಾಡಲಿದ್ದು, ಅದೇ ಯಡಿಯೂರಪ್ಪ, ಕುಮಾರಸ್ವಾಮಿ ಮುಖ್ಯಮಂತ್ರಿಯಾದರೆ ರಾಜ್ಯದಲ್ಲಿ ಮಳೆ, ಬೆಳೆ ಹೆಚ್ಚಾಗುತ್ತದೆ ಎಂದು ಹೇಳಿದರು.