ಬೆಂಗಳೂರು: ಬೆಂಗಳೂರಿನಲ್ಲಿ ತೆರೆದ ಕಾಲುವೆ ಮುಚ್ಚಲು ಬಿಬಿಎಂಪಿ ಏಕೆ ವಿಳಂಬ ಮಾಡುತ್ತಿದೆ ಎಂದು ಪ್ರಶ್ನಿಸಿರುವ ಹೈಕೋರ್ಟ್ ಈ ವಿಚಾರದಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡುವಂತೆ ಪಾಲಿಕೆಗೆ ನಿರ್ದೇಶನ ನೀಡಿದೆ.
ತೆರೆದ ಕಾಲುವೆಗಳನ್ನು ಮುಚ್ಚುವಂತೆ ಬಿಬಿಎಂಪಿಗೆ ನಿರ್ದೇಶನ ನೀಡುವುದು ಹಾಗೂ ಕಾಲುವೆ ಮುಚ್ಚಲು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸುವಂತೆ ನಮ್ಮ ಬೆಂಗಳೂರು ಫೌಂಡೇಶನ್ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಶುಕ್ರವಾರ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ನಡೆಸಿತು.
ಅರ್ಜಿದಾರರ ಪರ ಹಿರಿಯ ವಕೀಲ ಸಜನ್ ಪೂವಯ್ಯ ವಾದಿಸಿ, “ತೆರೆದ ಕಾಲುವೆಗಳಿಂದ ದುರಂತಗಳು ಸಂಭವಿಸುತ್ತಲಿದ್ದರೂ ಬಿಬಿಎಂಪಿ ಎಚ್ಚೆತ್ತುಕೊಂಡಿಲ್ಲ. ಈ ಕುರಿತು ಕಳೆದ ವರ್ಷ ನವೆಂಬರ್‌ನಲ್ಲಿ ಹೈಕೋರ್ಟ್ ನಿರ್ದೇಶನ ನೀಡಿದ್ದರೂ, ಅಧಿಕಾರಿಗಳು ಅಗತ್ಯ ಕ್ರಮ ಕೈಗೊಂಡು ವರದಿಯನ್ನೂ ಸಲ್ಲಿಸಿಲ್ಲ,’ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, “ಬಿಬಿಎಂಪಿ ತೆರೆದ ಕಾಲುವೆ, ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಏಕೆ ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ,’ ಎಂದು ಪ್ರಶ್ನಿಸಿತು. ಅಲ್ಲದೆ ತೆರೆದ ಕಾಲುವೆ ಮುಚ್ಚಲು ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡುವಂತೆ ಬಿಬಿಎಂಪಿಗೆ ನಿರ್ದೇಶನ ನೀಡಿತು. ಜೊತೆಗೆ ತೆರೆದ ಕಾಲುವೆಗಳ ನಿರ್ವಹಣೆ ಸಂಬಂಧ ಮೇಲ್ವಿಚಾರಣಾ ಸಮಿತಿ ನೇಮಕ ಮಾಡಲು ಆದೇಶಿಸಲಾಗುವುದು ಎಂದೂ ತಿಳಿಸಿದ ನ್ಯಾಯಪೀಠ ಜೂನ್ 16ಕ್ಕೆ ಅರ್ಜಿ ವಿಚಾರಣೆ ಮುಂದೂಡಿತು.
ಅರ್ಜಿ ಸಲ್ಲಿಸಲು ಕಾರಣವೇನು?: 2014ರ ಅಕ್ಟೋಬರ್ ತಿಂಗಳಿನಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ಬನ್ನೇರುಘಟ್ಟ ರಸ್ತೆಯ ಬಿಳೇಕಹಳ್ಳಿ ಬಳಿಯ ಕಾಲುವೆ ತುಂಬಿ ಹರಿಯುತ್ತಿತ್ತು. ಈ ಕಾಲುವೆ ದಾಟುತ್ತಿದ್ದ ಗೀತಾ ಲಕ್ಷ್ಮೀ ಬಾಲಕಿ ಕಾಲು ಜಾರಿ ಕಾಲುವೆಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದಳು. ಎರಡು ದಿನಗಳ ಕಾರ್ಯಾಚರಣೆಯ ನಂತರ ಮಡಿವಾಳ ಕೆರೆಯ ರಾಜಕಾಲುವೆಯಲ್ಲಿ ಬಾಲಕಿಯ ಶವಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ತೆರೆದ ಕಾಲುವೆ ಮುಚ್ಚಲು ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯ ಕಾರಣವಾಗಿದ್ದ ಹಿನ್ನೆಲೆಯಲ್ಲಿ ನಮ್ಮ ಬೆಂಗಳೂರು ಫೌಂಡೇಶನ್ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದೆ.