ಬೆಂಗಳೂರು: ರಾಜ್ಯದ ಮೈತ್ರಿ ಸರ್ಕಾರದ ಶಾಸಕರ ರಾಜೀನಾಮೆ ವಿರೋಧಿಸಿ ರಾಜ್ಯದ ಹಲವೆಡೆ ಕನ್ನಡಪರ, ರೈತ ಸಂಘಟನೆಗಳು ಬುಧವಾರ ಪ್ರತಿಭಟನೆ ನಡೆಸಿದವು. ಒಕ್ಕಲಿಗ ಸಮುದಾಯದ ನಾಯಕರಾದ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಸುಗಮವಾಗಿ ಆಡಳಿತ ನಡೆಸಲು ಬಿಡದೆ, ಮುಖ್ಯಮಂತ್ರಿ ಆದ ದಿನದಿಂದಲೂ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಒಕ್ಕಲಿಗರ ಒಕ್ಕೂಟದಿಂದ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಪಂಚಾಯತ್ ಕಚೇರಿ ಎದುರು ಸೇರಿದ ಒಕ್ಕೂಟದ ಪದಾಧಿಕಾರಿಗಳು ಕಪ್ಪುಪಟ್ಟಿ ಧರಿಸಿ, ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ, ಚಿಕ್ಕಬಳ್ಳಾಪುರದ ತಾಲೂಕು ಕಚೇರಿ ಆವರಣದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ದಲಿತ ಸೇನೆಯಿಂದ ಪ್ರತಿಭಟನೆ: ಕೇಂದ್ರದ ಬಿಜೆಪಿ ಸರ್ಕಾರದ ಕುಮ್ಮಕ್ಕಿನಿಂದ ಕರ್ನಾಟಕ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ಅಭದ್ರಗೊಳಿಸಿ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿರುವ ಕೆಲವು ಅತೃಪ್ತ ಶಾಸಕರ ಸದಸ್ಯತ್ವವನ್ನು ರದ್ದುಗೊಳಿಸಿ ಚುನಾವಣೆಗೆ ನಿಲ್ಲದಂತೆ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಪಾಂಡವಪುರದಲ್ಲಿ ದಲಿತ ಕ್ರಾಂತಿ ಸೇವಾ ಸಮಿತಿ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಮಿನಿ ವಿಧಾನಸೌಧದ ಎದುರಿನ ಶ್ರೀರಂಗಪಟ್ಟಣ-ಜೇವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಮಾವಣೆಗೊಂಡ ಕಾರ್ಯಕರ್ತರು, ಕೆಲಕಾಲ ರಸ್ತೆ ತಡೆ ನಡೆಸಿ, ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಅತೃಪ್ತ ಶಾಸಕರ ವಿರುದ್ದ ಧಿಕ್ಕಾರದ ಘೋಷಣೆ ಕೂಗಿದರು.
ಕರವೇಯಿಂದ ಪ್ರತಿಭಟನೆ: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಕಾರ್ಯಕರ್ತರು ರಾಮನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಐಜೂರು ವೃತ್ತದಲ್ಲಿ ಜಮಾಯಿಸಿದ ಕರವೇ ಸ್ವಾಭಿಮಾನಿ ಬಣದ ಕಾರ್ಯಕರ್ತರು, 14 ಶಾಸಕರ ವಿರುದ್ದ ಘೋಷಣೆ ಕೂಗಿದರು. ವೀಳೆÂದೆಲೆ ಜಗಿದು ಶಾಸಕರುಗಳ ಭಾವಚಿತ್ರಗಳಿಗೆ ಉಗಿದು, ತಮ್ಮ ಆಕ್ರೋಶ ವ್ಯಕ್ತಪಡಿಸಿದರು.