ಬೆಂಗಳೂರು: ಪತ್ನಿಯ ಹೆಸರು ಮತ್ತು ಮೊಬೈಲ್ ನಂಬರ್ ಅನ್ನು ಡೇಟಿಂಗ್ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಪತಿಯನ್ನು ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹರ್ಷವರ್ಧನ್(31) ಬಂಧಿತ ಪತಿ. ಈತನಿಂದ ಮೊಬೈಲ್, ಲ್ಯಾಪ್‌ಟಾಪ್‌ಗ್ಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಮತ್ತು ಪತ್ನಿಯ ನಡುವೆ ಭಿನ್ನಾಭಿಪ್ರಾಯವಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಹೀಗಾಗಿ ಆಕೆಯ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಉದ್ದೇಶದಿಂದ ಕೃತ್ಯವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲ ವರ್ಷಗಳ ಹಿಂದೆ ವಿವಾಹವಾಗಿರುವ ಹರ್ಷವರ್ಧನ್ ನಗರದ ಪ್ರತಿಷ್ಠಿತ ಕಂಪೆನಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪತ್ನಿಯೊಂದಿಗೆ ನೆಲೆಸಿದ್ದಾನೆ. ಆರಂಭದಲ್ಲಿ ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದ ಆರೋಪಿ ನಂತರ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಲು ಶುರು ಮಾಡಿದ್ದಾನೆ.
ಅಲ್ಲದೇ ಹಣ ತರುವಂತೆ ಪೀಡಿಸುತ್ತಿದ್ದ. ಇದರಿಂದ ಬೇಸತ್ತ ಪತ್ನಿ ಈತನಿಂದ ದೂರವಾಗಲು ನ್ಯಾಯಾಲಯದ ಮೊರೆ ಹೋಗಿದ್ದಾರೆ. ನ್ಯಾಯಾಲಯದಲ್ಲಿ ಈಕೆಯ ನಡತೆ ಸರಿಯಿಲ್ಲ ಎಂಬುದನ್ನು ಸಾಬೀತು ಪಡಿಸಲು ಈ ಕೃತ್ಯವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದಕ್ಕೆ ಕೋಪಗೊಂಡ ಹರ್ಷವರ್ಧನ್, ಪತ್ನಿಯ ಈ-ಮೇಲ್ ಐಡಿ ಮೂಲಕ ಕನ್ನಡ ಮ್ಯಾಟ್ರಿಮೋನಿ ಮತ್ತು ಡೇಟಿಂಗ್ ವೆಬ್‌ಸೈಟ್‌ಗೆ ಈಕೆಯ ವಿವಿಧ ಭಂಗಿಯ ಫೋಟೋಗಳನ್ನು ಅಪ್‌ಲೋಡ್ ಮಾಡಿದ್ದಾನೆ. ಅಷ್ಟೇ ಅಲ್ಲದೇ, ಈಕೆಯ ನಂಬರ್, ಪ್ರೊಫೈಲ್‌ಗಳನ್ನು ಪ್ರಕಟಿಸಿದ್ದಾನೆ.
ಇದರಿಂದ ಪತ್ನಿಗೆ ನಿರಂತರ ಕರೆಗಳು ಬರುತ್ತಿತ್ತು. ಇದರಿಂದ ಅನುಮಾನಗೊಂಡ ಪತ್ನಿ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನನ್ವಯ ಕಾರ್ಯಾಚರಣೆ ನಡೆಸಿದಾಗ ಆರೋಪಿಯ ಕೃತ್ಯ ಬಯಲಾಗಿದೆ ಎಂದು ಪೊಲೀಸರು ತಿಳಸಿದ್ದಾರೆ.