Advertisement

“ಹೈಕಮಾಂಡ್‌ ಸೂಚಿಸಿದ ಅಭ್ಯರ್ಥಿ ಗೆಲ್ಲಿಸಿ’ 

08:54 AM Oct 13, 2018 | Team Udayavani |

ಬೆಂಗಳೂರು: ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಕುರಿತು ಸ್ಥಳೀಯ ನಾಯಕರಲ್ಲಿ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಹೈ ಕಮಾಂಡ್‌ ಸೂಚಿಸುವ ಅಭ್ಯರ್ಥಿ ಪರವಾಗಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವಂತೆ ಬಳ್ಳಾರಿ ಜಿಲ್ಲಾ ಮುಖಂಡರಿಗೆ ರಾಜ್ಯ ಕಾಂಗ್ರೆಸ್‌ ನಾಯಕರು ಸೂಚಿಸಿದ್ದಾರೆ. 

Advertisement

ಶುಕ್ರವಾರ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಎಲ್ಲ ಮುಖಂಡರನ್ನು ಕರೆಸಿ ಚರ್ಚೆ ನಡೆಸಲಾಯಿತು. ಕಳೆದ ನಾಲ್ಕು ದಿನಗಳಿಂದ ಬಳ್ಳಾರಿ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಅಭ್ಯರ್ಥಿ ಆಯ್ಕೆ ಕುರಿತು ಮಾತುಕತೆ ನಡೆಸಿದ್ದರೂ, ಜಿಲ್ಲಾ ಮುಖಂಡರು
ಒಮ್ಮತಕ್ಕೆ ಬರದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು. ಈ ವೇಳೆ ಪಕ್ಷ ಸೂಚಿಸುವ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವಂತೆ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಮುಖವಾಗಿ ಮೂವರು ಸಂಭಾವ್ಯರ ಪಟ್ಟಿ ಸಿದ್ದಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದ್ದು, ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ ಸಹೋದರ ವೆಂಕಟೇಶ್‌ ಪ್ರಸಾದ್‌, ವಿಧಾನ ಪರಿಷತ್‌ ಸದಸ್ಯ ವಿ.ಎಸ್‌. ಉಗ್ರಪ್ಪ ಹಾಗೂ ಬಳ್ಳಾರಿ ಜಿಪಂ ಮಾಜಿ ಅಧ್ಯಕ್ಷ ದೇವೇಂದ್ರಪ್ಪ ಹೆಸರುಗಳನ್ನು ಪಟ್ಟಿ ಮಾಡಿಕೊಂಡಿದ್ದು, ಶನಿವಾರ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಬೆಂಗಳೂರಿಗೆ ಆಗಮಿಸುತ್ತಿರುವುದರಿಂದ ಅವರೊಂದಿಗೆ ಚರ್ಚಿಸಿ ಅಭ್ಯರ್ಥಿಯ ಅಂತಿಮ ಆಯ್ಕೆ ಮಾಡುವ ಸಾಧ್ಯತೆ ಇದೆ. ಬಳ್ಳಾರಿ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್‌ಗೆ ಅಭ್ಯರ್ಥಿ ಆಯ್ಕೆ ಜವಾಬ್ದಾರಿ ವಹಿಸಿದ್ದರಿಂದ ಕೆಲವು ಶಾಸಕರು ಅಸಮಾಧಾನ ಹೊಂದಿ, ಸಿದ್ದರಾಮಯ್ಯ ಸಮ್ಮುಖದಲ್ಲೇ ಅಭ್ಯರ್ಥಿ ಆಯ್ಕೆಯಾಗಬೇಕೆಂದು ಪಟ್ಟು ಹಿಡಿದಿದ್ದರಿಂದ ಶುಕ್ರವಾರ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಿ, ಎಲ್ಲರೂ ಒಟ್ಟಾಗಿ ಕೆಲಸ ಮಾಡುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರದ
ಸಭೆಗೆ ಮಾಜಿ ಸಚಿವ ಸಂತೋಷ್‌ ಲಾಡ್‌, ಅನಿಲ್‌ ಲಾಡ್‌, ವಿಧಾನ ಪರಿಷತ್‌ ಸದಸ್ಯರಾದ ಕೆ.ಸಿ. ಕೊಂಡಯ್ಯ, ಅಲ್ಲಂ ವೀರಭದ್ರಪ್ಪ ಗೈರು ಹಾಜರಾಗಿದ್ದರು.

ಸಭೆ ನಂತರ ಮಾತನಾಡಿದ ಬಳ್ಳಾರಿ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್‌, ಪಕ್ಷ ನೀಡಿರುವ ಜವಾಬ್ದಾರಿಯನ್ನು ನಾನು ನಿಭಾಯಿಸಿದ್ದೇನೆ. ಎಲ್ಲ ಶಾಸಕರು ಮತ್ತು ಪಕ್ಷದ ಮುಖಂಡರೊಂದಿಗೆ ಚರ್ಚಿಸಿದ್ದೇನೆ, ಎಲ್ಲರೂ ಒಟ್ಟಾಗಿ ಪಕ್ಷವನ್ನು ಗೆಲ್ಲಿಸಲು ತೀರ್ಮಾನಿಸಿದ್ದೇವೆ. ಜೆಡಿಎಸ್‌ ಜೊತೆ
ಸೇರಿ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದರು.  ಪ್ರಾಥಮಿಕ ಶಿಕ್ಷಣ ಸಚಿವ ಎನ್‌. ಮಹೇಶ್‌ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ರಾಜಕೀಯದಲ್ಲಿ ಇವೆಲ್ಲ ಆಕಸ್ಮಿಕವಾಗಿ ನಡೆಯುತ್ತವೆ. ಅವರು ಮತ್ತೆ ಶಿಕ್ಷಣ ಖಾತೆ ನಿರ್ವಹಿಸಲಿ ಎಂಬುದು ನಮ್ಮ ಆಶಯ ಎಂದರು.

ಸಚಿವ ಡಿಕೆಶಿ ವ್ಯಂಗ್ಯ
ಶ್ರೀರಾಮ, ಶ್ರೀರಾಮುಲು ದೊಡ್ಡವರು ಅವರು ಗೆಲ್ಲಬೇಕು. ನಾವು ಕಾರ್ಯಕರ್ತರು ನಮ್ಮ ಶಕ್ತಿಯಿಂದ ನಾವು ಕೆಲಸ ಮಾಡುತ್ತೇವೆ ಎಂದು
ವ್ಯಂಗ್ಯವಾಡಿದ ಸಚಿವ ಡಿ.ಕೆ.ಶಿವಕುಮಾರ್‌, ಇನ್ನು ಮಾಜಿ ಉಪ ಮುಖ್ಯಮಂತ್ರಿ ಆರ್‌. ಅಶೋಕ್‌ ಕುದುರೆ ವ್ಯಾಪಾರ ಮಾಡುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ, ಅವರಿಗೆ ಶುಭವಾಗಲಿ ಎಂದು ಹೇಳಿದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next