ಚೆನ್ನೈ: ಕಾರು ಚಲಾಯಿಸುತ್ತಿದ್ದ ವೇಳೆಯಲ್ಲಿಯೇ ಭಾರೀ ಗಾಳಿ, ಮಳೆಯಿಂದಾಗಿ ಮರವೊಂದು ಉರುಳಿ ಬಿದ್ದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ಚೆನ್ನೈನ ಕೆಕೆ ನಗರ್ ಪ್ರದೇಶದಲ್ಲಿ ಶುಕ್ರವಾರ ಸಂಜೆ ನಡೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಶಿವಸೇನೆ ಮುಗಿಸಲು ಎನ್ ಸಿಪಿ ಮತ್ತು ಕಾಂಗ್ರೆಸ್ ಪ್ರಯತ್ನಿಸುತ್ತಿದೆ : ಸಂಜಯ್ ಪಾಟೀಲ್
ಪೊಲೀಸರ ಮಾಹಿತಿ ಪ್ರಕಾರ, 57 ವರ್ಷದ ಮಹಿಳೆಯೊಬ್ಬರು ತಮ್ಮ ಕಚೇರಿಯ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಕಾರಿನ ಮೇಲೆ ಮರ ಬಿದ್ದು, ಸ್ಥಳದಲ್ಲಿಯೇ ಆಕೆ ಸಾವನ್ನಪ್ಪಿದ್ದರು.
ಕಾರಿನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದು, ಅವರನ್ನು ಕೆಕೆ ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಕಳೆದ ಕೆಲವು ದಿನಗಳಿಂದ ಚೆನ್ನೈನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ನಗರದ ಕೆಲವು ಪ್ರದೇಶಗಳಲ್ಲಿ ದಾಖಲೆಯ ಮಳೆಯಾಗಿದೆ. ಕೆಲವು ಪ್ರದೇಶಗಳು ಜಲಾವೃತಗೊಂಡಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಮುಂದಿನ ಕೆಲವು ದಿನಗಳ ಕಾಲ ಚೆನ್ನೈನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.