Advertisement

ಚುನಾವಣೆಯಲ್ಲಿ ಮಹಿಳೆಗೆ ಸಿಗಲಿ ಪ್ರಾತಿನಿಧ್ಯ: ಗೀತಾ

06:52 PM Sep 04, 2020 | Suhan S |

ದಾವಣಗೆರೆ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಒಂದು ಕ್ಷೇತ್ರದಲ್ಲಾದರೂ ಮಹಿಳೆಯರಿಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಪಕ್ಷದ ವರಿಷ್ಠರಲ್ಲಿ ಮನವಿ ಮಾಡುವುದಾಗಿ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ ಹೇಳಿದರು.

Advertisement

ನಗರದ ಬಿಜೆಪಿ ಜಿಲ್ಲಾ ಘಟಕ ಕಚೇರಿಯಲ್ಲಿ ಗುರುವಾರ ಏರ್ಪಡಿಸಿದ್ದ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಘಟಕದ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರಸ್ತುತ ಐದು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರೇ ಇದ್ದಾರೆ. ಆ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಸ್ಪರ್ಧಿಸಲು ಅವಕಾಶ ಕೊಡಿ ಎಂದು ಕೇಳುವುದು ಸರಿಯಲ್ಲ. ಬಿಜೆಪಿ ಶಾಸಕರಿಲ್ಲದ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರದಲ್ಲಾದರೂ ಮಹಿಳೆಯರಿಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಪಕ್ಷದ ಹಿರಿಯರಲ್ಲಿ ಕೇಳಿಕೊಳ್ಳಬಹುದು ಎಂದರು.

ಜಿಲ್ಲೆಯಲ್ಲಿ ಜಿಪಂ, ತಾಪಂಗಳಲ್ಲಿ ಪಕ್ಷದ ಮಹಿಳೆಯರೇ ಅಧಿಕಾರದಲ್ಲಿದ್ದು ಇಲ್ಲಿ ನಾರಿಶಕ್ತಿ ಪ್ರಬಲವಾಗಿದೆ. ಪಕ್ಷದ ಹಿರಿಯರಿಗೆ ಗೆಲ್ಲುವ ಭರವಸೆ ಹುಟ್ಟಿಸುವ ರೀತಿಯಲ್ಲಿ ಮಹಿಳೆಯರು ಆಯಾ ಕ್ಷೇತ್ರಗಳಲ್ಲಿ ಕೆಲಸ ಮಾಡಬೇಕು. ಯಾರು ಪಕ್ಷ ಸಂಘಟನೆಯಲ್ಲಿ ಹೆಚ್ಚು ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ ಎಂಬುದನ್ನು ಪಕ್ಷ ವೇ ಗುರುತಿಸಿ ಅವರಿಗೆ ಸ್ಪರ್ಧಿಸುವ ಅವಕಾಶ ಕಲ್ಪಿಸಲಿದೆ. ಪಕ್ಷ ಕೊಡುವ ಜವಾಬ್ದಾರಿ ಸಣ್ಣದಿರಲಿ, ದೊಡ್ಡದಿರಲಿ ಅದನ್ನು ಸಮರ್ಥವಾಗಿ ನಿಭಾಯಿಸಬೇಕು. ಆಗ ಅವಕಾಶಗಳು ತಾನಾಗಿಯೇ ಹುಡುಕಿಕೊಂಡು ಬರುತ್ತವೆ ಎಂದರು.

ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಸುನೀತಾ ಮಾತನಾಡಿ, ಮಹಿಳೆಯರು ಪಕ್ಷ ಸಂಘಟನೆಯಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳಬೇಕು. ಬೂತ್‌ ಮಟ್ಟದಲ್ಲಿ ಹೆಚ್ಚೆಚ್ಚು ಕಾರ್ಯಕರ್ತರನ್ನು ಸೇರಿಸಿಕೊಳ್ಳಬೇಕು. ಬಿಜೆಪಿ ಸರಕಾರದ ಯೋಜನೆಗಳ ಬಗ್ಗೆ ಮನೆ ಮನೆಗೆ ತಿಳಿಸುವ ಕಾರ್ಯ ಮಾಡಬೇಕು ಎಂದು ಕರೆ ನೀಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ವಿರೇಶ ಹನಗವಾಡಿ ಮಾತನಾಡಿ, ಮಹಿಳೆಯೇ ಅಧ್ಯಕ್ಷರಾಗಿರುವ ಕಾಂಗ್ರೆಸ್‌ನಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ದೊರಕಿಲ್ಲ. ಆದರೆ ಬಿಜೆಪಿಯಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಲಾಗಿದೆ. ಮಹಿಳೆಯರು ರಾಜಕೀಯವಾಗಿ ಬಿಜೆಪಿಯಲ್ಲಿ ಹೆಚ್ಚು ಅವಕಾಶವಿದೆ ಎಂದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್‌. ಜಗದೀಶ ಮಾತನಾಡಿ, ಮಹಿಳೆಯರು ತಮ್ಮ ಮನೆಯಿಂದಲೇ ಭಾರತೀಯ ಸಂಸ್ಕಾರ, ಸಂಸ್ಕೃತಿಯನ್ನು ಮಕ್ಕಳಲ್ಲಿ , ಮನೆಯವರಲ್ಲಿ ರೂಢಿಸಿ, ಬೆಳೆಸಬೇಕು. ಪಾಶ್ಚಾತ್ಯ ಸಂಸ್ಕೃತಿಯನ್ನು ಮನೆಯಿಂದಲೇ ತಿರಸ್ಕಾರ ಮಾಡಬೇಕು ಎಂದರು.

Advertisement

ಜಿಪಂ ಅಧ್ಯಕ್ಷೆ ಗೀತಾ ಜಗದೀಶ್‌ ಪ್ರಾಸ್ತಾವಿಕವಾಗಿ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಒಂದು ಕ್ಷೇತ್ರವಾದರೂ ಮಹಿಳೆಯರಿಗೆ ಮೀಸಲಿಡಬೇಕು. ಈ ದಿಸೆಯಲ್ಲಿ ರಾಜ್ಯಾಧ್ಯಕ್ಷರು ವರಿಷ್ಠರ ಗಮನ ಸೆಳೆಯಬೇಕು ಎಂದರು.

ಇದೇ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳಿಗೆ ರಾಜ್ಯಾಧ್ಯಕ್ಷರು ಜವಾಬ್ದಾರಿ ಪತ್ರ ವಿತರಣೆ ಮಾಡಿದರು. ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ಮಹೇಶ್‌ ಅಧ್ಯಕ್ಷತೆ ವಹಿಸಿದ್ದರು. ತಾಪಂ ಅಧ್ಯಕ್ಷೆ ಮಮತಾ ಮಲ್ಲೇಶಪ್ಪ, ಪಕ್ಷದ ಪೂರ್ಣಾವಧಿ ಕಾರ್ಯಕರ್ತ ಗಿರೀಶ್‌, ಪ್ರಮುಖರಾದ ಸವಿತಾ ರವಿಕುಮಾರ್‌, ದೀಪಾ ಜಗದೀಶ್‌, ಸರ್ವಮಂಗಳಾ ಇನ್ನಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next