ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಾಗೂ ವಿವಿಧ ಅಭಿವೃದ್ಧ ಕಾಮಗಾರಿಗಳ ಉದ್ಘಾಟನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೆ. 17ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಮುಖ್ಯಮಂತ್ರಿಗಳು ಭಾಗವಹಿಸುವ ಎಲ್ಲ ಕಾರ್ಯಕ್ರಮ ಯಶಸ್ವಿಗೊಳಿಸಲು ಹಾಗೂ ಯಾವುದೇ ರೀತಿಯಲ್ಲಿ ಲೋಪಕ್ಕೆ ಅಸ್ಪದ ನೀಡದೆ ತಮಗೆ ವಹಿಸಲಾದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಬಿ. ಶರತ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮುಖ್ಯಮಂತ್ರಿಗಳ ಪ್ರವಾಸ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಪೂರ್ವಸಿದ್ಧತೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿಗಳು ಸೆ. 17ರಂದು ವಿಶೇಷ ವಿಮಾನದ ಮೂಲಕ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 8:45ಕ್ಕೆ ಆಗಮಿಸುವರು. ಮುಖ್ಯಮಂತ್ರಿಗಳನ್ನು ಶಿಷ್ಠಾಚಾರದಂತೆ ಬರಮಾಡಿಕೊಳ್ಳುವುದು. ವಿಮಾನ ನಿಲ್ದಾಣಕ್ಕೆ ಜನಪ್ರತಿನಿಧಿಗಳು ಸಹ ಆಗಮಿಸುವುದರಿಂದ ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸುವುದು. ಸರ್ದಾರ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆ ಸುತ್ತಮುತ್ತ ಸ್ವಚ್ಛತೆ ಕೈಗೊಂಡು ಪ್ರತಿಮೆಯನ್ನು ಹೂವಿನಿಂದ ಆಲಂಕಾರಗೊಳಿಸಬೇಕು ಎಂದು ಸೂಚಿಸಿದರು.
ಪೊಲೀಸ್ ಪರೇಡ್ ಮೈದಾನದಲ್ಲಿ ನಡೆಯುವ ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಭಿಕರನ್ನು ಉದ್ದೇಶಿಸಿ ಮಾತನಾಡುವರು. ಇಲ್ಲಿ ಹೆಚ್ಚಿನ ಸಂಖ್ಯೆ ಮಕ್ಕಳು ಮತ್ತು ಸಾರ್ವಜನಿಕರು ಬರುವುದರಿಂದ ಕುಡಿಯುವ ನೀರಿನ ವ್ಯವಸ್ಥೆ, ಇ-ಟಾಯಲೆಟ್ ವ್ಯವಸ್ಥೆ, ಪೊಲೀಸ್ ಬಂದೋಬಸ್ತ್, ಮಕ್ಕಳಿಗೆ ಸಿಹಿ ತಿಂಡಿ ವಿತರಣೆ ಸೇರಿದಂತೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ವಿದ್ಯುತ್ ಸಂಪರ್ಕ ಕಡಿತವಾಗದಂತೆ ಗಮನಹರಿಸಿ ಎಂದು ಹೇಳಿದರು. ಜಿಲ್ಲಾ ಪೊಲೀಸ್ ಅಧೀಕ್ಷಕ ವಿನಾಯಕ ಪಾಟೀಲ, ಕಾನೂನು ಮತ್ತು ಸುವ್ಯಸ್ಥೆ ಡಿಸಿಪಿ. ಕಿಶೋರ ಬಾಬು, ಹೆಚ್ಚುವರಿ ಜಿಲ್ಲಾಧಿಕಾರಿ ಬಿ. ಶರಣಪ್ಪ, ಪ್ರೊಬೇಷನರ್ ಐಎಎಸ್ ಅಧಿಕಾರಿ ಡಾ| ಗೋಪಾಲಕೃಷ್ಣ ರಾಘವೇಂದ್ರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.