Advertisement

ಸರ್ವರಿಗೆ ಉದ್ಯೋಗ ಸರ್ಕಾರದ ಆಶಯ

04:27 PM Feb 29, 2020 | Suhan S |

ಬೆಳಗಾವಿ: ಸರ್ಕಾರಿ ನೌಕರಿ ಎಲ್ಲರಿಗೂ ಸಿಗುವುದಿಲ್ಲ. ಹೀಗಾಗಿ ಖಾಸಗಿ ನೌಕರಿಗಾಗಿ ಬೃಹತ್‌ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ ಹೇಳಿದರು.

Advertisement

ನಗರದ ಎಸ್‌. ಜಿ. ಬಾಳೇಕುಂದ್ರಿ ಎಂಜಿನಿಯರಿಂಗ್‌ ಕಾಲೇಜು ಆವರಣದಲ್ಲಿ ಜಿಲ್ಲಾಡಳಿತ ಬೆಳಗಾವಿ, ಧಾರವಾಡ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಆಶ್ರಯದಲ್ಲಿ ಏರ್ಪಡಿಸಲಾಗಿರುವ ಪ್ರಾದೇಶಿಕ ಬೃಹತ್‌ ಉದ್ಯೋಗ ಮೇಳಕ್ಕೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.

ಕೈಗಾರಿಕಾ ಅಭಿವೃದ್ಧಿಯನ್ನು ವಿಕೇಂದ್ರೀಕರಣ ಮಾಡುವ ಮೂಲಕ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ವಿವಿಧ ಯೋಜನೆಗಳ ಅನುಷ್ಠಾನ ಮಾಡಲಾಗುತ್ತಿದೆ. ಇದರೊಂದಿಗೆ ಎಲ್ಲರಿಗೂ ಉದ್ಯೋಗ ನೀಡುವುದು ನಮ್ಮ ಆಶಯ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೇಂದ್ರ ಸರ್ಕಾರದ ನೆರವಿನೊಂದಿಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಇಂತಹ ಮೇಳಗಳ ಮೂಲಕ ಅರ್ಹ ವಿದ್ಯಾವಂತ ವಿದ್ಯಾರ್ಥಿಗಳಿಗೆ ಸೂಕ್ತ ಉದ್ಯೋಗ ಒದಗಿಸುವ ಮಹತ್ವಾಕಾಂಕ್ಷಿ ಉದ್ದೇಶವನ್ನು ಸರ್ಕಾರ ಹೊಂದಿದೆ ಎಂದರು.

ಈವರೆಗೆ ರಾಜ್ಯದಲ್ಲಿ ದೊಡ್ಡ ದೊಡ್ಡ ಕಂಪನಿಗಳು ಕೇವಲ ಬೆಂಗಳೂರಿಗೆ ಸೀಮಿತವಾಗಿದ್ದವು. ನೂತನ ಕೈಗಾರಿಕಾ ಯೋಜನೆ ಬಗ್ಗೆ ಈಗಾಗಲೇ ನೀಲನಕ್ಷೆ ಸಿದ್ಧವಾಗಿದೆ. ಎರಡನೇ ಹಾಗೂ ಮೂರನೇ ಹಂತದ ನಗರಗಳಿಗೆ ಕೈಗಾರಿಕಾ ವಲಯ ವಿಸ್ತರಣೆ ಮಾಡಲಾಗುತ್ತಿದೆ. ಕೈಗಾರಿಕೆಗಳನ್ನು ವಿಸ್ತರಿಸುವ ಮೂಲಕ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಉತ್ತರ ಕರ್ನಾಟಕದತ್ತ ಸರ್ಕಾರಗಳು ಹೆಚ್ಚಿನ ಗಮನ ನೀಡುತ್ತಿದ್ದು, ಯುವ ಜನರ ವಿದ್ಯಾರ್ಹತೆಯ ಅನುಗುಣವಾಗಿ ಉದ್ಯೋಗ ಅವಕಾಶ ಒದಗಿಸುವ ಕೆಲಸ ನಡೆದಿದೆ. ನಗರದ ಮಕ್ಕಳಿಗೆ ಅವಕಾಶ ಇದೆ. ಗ್ರಾಮೀಣ ಮಕ್ಕಳು ಕೀಳರಿಮೆಯಿಂದ ಹಿಂದೆ ಬೀಳುವ ಸಾಧ್ಯತೆ ಇದೆ. ಹೆದರಿಕೆ ಇಲ್ಲದೇ, ಸಕಾರಾತ್ಮಕ ವಿಚಾರಗಳನ್ನು ಇಟ್ಟುಕೊಂಡು ಮುಂದೆ ಸಾಗಬೇಕು ಎಂದರು.

Advertisement

ಕೌಶಲ್ಯಾಭಿವೃದ್ಧಿ ಇಲಾಖೆಯನ್ನು ಪ್ರತ್ಯೇಕವಾಗಿ ಆರಂಭಿಸುವ ಮೂಲಕ ಉದ್ಯೋಕಾಂಕ್ಷಿಗಳಿಗೆ ಅಗತ್ಯ ತರಬೇತಿ ನೀಡಿ ಎಲ್ಲರಿಗೂ ಉದ್ಯೋಗ ಕಲ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮ ಕೈಗೊಂಡಿವೆ. ಗ್ರಾಮೀಣ ಮತ್ತು ನಗರಪ್ರದೇಶದ ಎಲ್ಲ ಯುವಕ-ಯುವತಿಯರು ಉದ್ಯೋಗ ಮೇಳದ ಪ್ರಯೋಜನ ಪಡೆದುಕೊಂಡು ಯಶಸ್ವಿಯಾಗಬೇಕು ಎಂದರು.

ಜಿಪಂ ಅಧ್ಯಕ್ಷೆ ಆಶಾ ಐಹೊಳೆ ಮಾತನಾಡಿ, ಗ್ರಾಮೀಣ ಪ್ರದೇಶಗಳ ಜನರು ಅದರಲ್ಲೂ ಮಹಿಳಾ ಸಮುದಾಯದ ಸಬಲೀಕರಣದ ಅಗತ್ಯವಿದೆ. ತಾಲೂಕು ಮಟ್ಟದಲ್ಲಿಯೂ ಇಂತಹ ಮೇಳ ಆಯೋಜಿಸಬೇಕು ಎಂದರು.

ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸುವ ಅಗತ್ಯವಿದೆ. ಸ್ವ ಉದ್ಯೋಗ ಸ್ಥಾಪನೆಗೆ ಪ್ರೋತ್ಸಾಹಿಸಲು ಸರ್ಕಾರ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದೆ. ಹೀಗಾಗಿ ಕೇವಲ ಉದ್ಯೋಗಕ್ಕಾಗಿ ಅಲೆದಾಡದೇ ಉದ್ಯಮಗಳನ್ನು ಸ್ಥಾಪಿಸಿ ಇತರರಿಗೆ ಉದ್ಯೋಗ ಕಲ್ಪಿಸಲು ಮುಂದಾಗಬೇಕು ಎಂದು ಹೇಳಿದರು.

ಶಾಸಕ ಅಭಯ ಪಾಟೀಲ ಮಾತನಾಡಿ, ಗಡಿ ಭಾಗವಾಗಿರುವ ಬೆಳಗಾವಿಯಲ್ಲಿ ಹೆಚ್ಚಿನ ಕೈಗಾರಿಕೆ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂದು ಕೈಗಾರಿಕಾ ಸಚಿವರನ್ನು ಒತ್ತಾಯಿಸಿದರು. ಶಾಸಕ ಅನಿಲ್‌ ಬೆನಕೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೆಳಗಾವಿಯ ಉತ್ಕೃಷ್ಟ ಗುಣಮಟ್ಟದ ತರಕಾರಿ ರಫ್ತು ಮಾಡಲು ಅನುಕೂಲವಾಗುವಂತೆ ಸರಕು ವಿಮಾನ ಸೌಲಭ್ಯ ಕಲ್ಪಿಸಬೇಕು. ಅತೀ ಹೆಚ್ಚು ವಿದ್ಯಾವಂತರು ಇರುವ ಈ ಭಾಗದಲ್ಲಿ ಐ.ಟಿ. ಪಾರ್ಕ್‌ ಸ್ಥಾಪಿಸುವ ಅಗತ್ಯವಿದೆ ಎಂದರು.

ಜಿಲ್ಲಾಧಿಕಾರಿ ಡಾ| ಎಸ್‌.ಬಿ. ಬೊಮ್ಮನಹಳ್ಳಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗಾವಕಾಶ ಒದಗಿಸುವ ದೃಷ್ಟಿಯಿಂದ ಸರ್ಕಾರ ಬೃಹತ್‌ ಉದ್ಯೋಗಮೇಳದ ಮೂಲಕ ಅತ್ಯುತ್ತಮ ವೇದಿಕೆ ಒದಗಿಸಿದೆ ಎಂದರು.

ಬೆಳಗಾವಿ ಪ್ರಾದೇಶಿಕ ಆಯುಕ್ತ ಆಮ್ಲಾನ್‌ ಆದಿತ್ಯ ಬಿಸ್ವಾಸ್‌, ಮಹಾನಗರ ಪೊಲೀಸ್‌ ಆಯುಕ್ತ ಬಿ.ಎಸ್‌. ಲೋಕೇಶಕುಮಾರ, ಜಿಪಂ ಸಿಇಒ ಡಾ| ರಾಜೇಂದ್ರ ಕೆ.ವಿ., ಎಸ್‌ಪಿ ಲಕ್ಷ್ಮಣ ನಿಂಬರಗಿ, ಪಾಲಿಕೆ ಆಯುಕ್ತ ಜಗದೀಶ ಕೆ.ಎಚ್‌., ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಡಿ.ವೈ. ಹೆಳವರ ಇತರರು ಇದ್ದರು. ಬಸವರಾಜ ಕುಪ್ಪಸಗೌಡರ ಹಾಗೂ ಸರ್ವಮಂಗಳ ಅರಳಿಮಟ್ಟಿ ನಿರೂಪಿಸಿದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ದೊಡ್ಡಬಸವರಾಜ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next