ಬೆಳಗಾವಿ: ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ 90 ಸ್ಥಾನಗಳ ಪೈಕಿ 85 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆ ನಮ್ಮ ಮೇಲಿದೆ. ಹೀಗಾಗಿ ಕಾರ್ಯಕರ್ತರು ಗ್ರಾ.ಪಂ. ಚುನಾವಣೆ ಜೊತೆಗೆ ಜಿ.ಪಂ. ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಕರೆ ನೀಡಿದರು.
ನಗರದ ಧರ್ಮನಾಥ್ ಭವನದಲ್ಲಿ ಬುಧವಾರ ಆಯೋಜಿಸಿದ್ದ ಗ್ರಾಮ ಸ್ವರಾಜ್ಯ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಿಜೆಪಿ ಕಾರ್ಯಕರ್ತರು ಗಂಭೀರವಾಗಿ ಪರಿಗಣಿಸಿಬೇಕು. ಅತೀ ಹೆಚ್ಚು ಗ್ರಾಪಂಗಳನ್ನು ಬಿಜೆಪಿಗೆ ತೆಕ್ಕೆಗೆ ತೆಗೆದುಕೊಳ್ಳಬೇಕಾದ ಸವಾಲು ನಮ್ಮ ಮುಂದಿದೆ ಎಂದರು.
ಸಚಿವ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ಗ್ರಾಮದಲ್ಲಿಯೂ ಸಂಚಾರ ಮಾಡಲಾಗುತ್ತಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜಾತಿ, ಭಾಷೆಯನ್ನು ಬದಿಗಿಟ್ಟು ಕೆಲಸ ಮಾಡಬೇಕು. ಈ ಚುನಾವಣೆ ಮಹತ್ವದ್ದಾಗಿದ್ದು, ಮುಂದಿನ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಹೇಳಿದರು.
ಗ್ರಾಪಂ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಯಾರೇ ಆಗಿದ್ದರೂ ಅವರನ್ನು ಗೆಲ್ಲಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ. ಒಗ್ಗಟ್ಟಿನಿಂದ ಏನಾದರು ಮಾಡಬಹುದು ಎನ್ನುವುದಕ್ಕೆ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಸಾಕ್ಷಿ ಎಂದರು.
ಈ ಸಂದರ್ಭದಲ್ಲಿ ಸಚಿವರಾದ ಜಗದೀಶ್ ಶೆಟ್ಟರ, ಶಶಿಕಲಾ ಜೊಲ್ಲೆ, ಶಾಸಕ ಮಹಾಂತೇಶ ದೊಡ್ಡಗೌಡ, ಕಾಡಾ ಅಧ್ಯಕ್ಷ ಡಾ. ವಿಶ್ವನಾಥ ಪಾಟೀಲ, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಈರಣ್ಣಾ ಅಂಗಡಿ, ಮಾಜಿ ಸಚಿವ ಶಶಿಕಾಂತ ನಾಯಿಕ, ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಡಾ. ಸಂದೀಪ, ಮಾಜಿ ಶಾಸಕ ಜಗದೀಶ ಮೆಟಗುಡ್ಡ ಉಪಸ್ಥಿತರಿದ್ದರು.