ದೇವನಹಳ್ಳಿ: ಕೋವಿಡ್ ನಿಯಂತ್ರಿಸುವ ಸಲುವಾಗಿ ನೋಡಲ್ ಅಧಿಕಾರಿಗಳಾಗಿ ನೇಮಕವಾದ ಜಿಲ್ಲಾಮಟ್ಟದ ಅಧಿಕಾರಿಗಳು ತಾಲೂಕು, ಹೋಬಳಿ, ಗ್ರಾಮಗಳಿಗೆ ಭೇಟಿ ನೀಡಿ, ವಹಿಸಿರುವ ಜವಾಬ್ದಾರಿಯನ್ನು ದಕ್ಷತೆಯಿಂದ ನಿಭಾಯಿಸುವಂತೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್ ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಹಾಸಿಗೆ, ಆಕ್ಸಿಜನ್, ಔಷಧ, ಆಹಾರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಬೇಕು ಎಂದು ಸೂಚಿಸಿದರು.
ಈಗಾಗಲೇ ನಿಗದಿಪಡಿಸಿರುವ ಆಸ್ಪತ್ರೆಗಳಿಗೆ ನೋಡಲ್ ಅಧಿಕಾರಿಗಳು ಭೇಟಿ ನೀಡಿ ವಿಚಾರಣೆ ನಡೆಸಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಮಟ್ಟದ ಸಭೆಗಳಲ್ಲಿ ಪಾಲ್ಗೊಂಡು ಮಾಹಿತಿ ಪಡೆದುಕೊಳ್ಳಬೇಕು. ಕೋವಿಡ್ ಕೇರ್ ಸೆಂಡರ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದರು.
ಜಿಪಂ ಸಿಇಒ ಎಂ.ಆರ್.ರವಿಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಹಲವು ಹಂತಗಳಲ್ಲಿತಂಡಗಳನ್ನು ರಚಿಸಲಾಗಿದ್ದು ನೋಡಲ್ ಅಧಿಕಾರಿಗಳು ತಾಪಂ, ಗ್ರಾಪಂ ಮಟ್ಟದಲ್ಲಿ ಸಮನ್ವಯ ಸಾಧಿಸಿ ಸೋಂಕು ಹತೋಟಿಗೆ ಶ್ರಮಿಸಬೇಕು. ಅಧಿಕಾರಿಗಳ ಮಟ್ಟದಲ್ಲಿ ಸಮಾಲೋಚನೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು ಎಂದರು.
ಮೇ 1 ರಿಂದ ಆರಂಭವಾಗಲಿರುವ ಮೂರನೇಸುತ್ತಿನ ಲಸಿಕಾಕರಣವು 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡುವ ಉದ್ದೇಶ ಹೊಂದಲಾಗಿದ್ದು, ಆನ್‌ಲೈನ್ ನೋಂದಣಿ ಹೊಂದಿರುವವರಿಗೆ ಲಸಿಕೆ ನೀಡಬೇಕು ಎಂದರು. ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಅರುಳುಕುಮಾರ್, ಜಿಲ್ಲಾಆರೋಗ್ಯಾಧಿಕಾರಿ ಡಾ. ಮಂಜುಳಾದೇವಿ, ವಾರ್ತಾಇಲಾಖೆ ಉಪ ನಿರ್ದೇಶಕ ಮಹೇಶ್ ಸೇರದಂತೆ ಇತರರಿದ್ದರು