Advertisement

ನಿಗದಿತ ಕಾಲಮಿತಿಯಲ್ಲಿ ಕೆಲಸ ಮಾಡಿ

11:09 AM May 12, 2022 | Team Udayavani |

ಬೆಳಗಾವಿ: ಜಿಲ್ಲೆಯ ಒಟ್ಟು 84 ಕೆರೆಗಳ ಅಭಿವೃದ್ಧಿ ಕಾಮಗಾರಿ ಸಮರ್ಪಕವಾಗಿ ನಡೆಯಲು ಮೊದಲು ಕೆರೆಗಳ ಅತಿಕ್ರಮಣವನ್ನು ತೆರವುಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ತಹಶೀಲ್ದಾರರು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದರ್ಶನ್‌ ಹೇಳಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಎಲ್ಲ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಕೈಗೊಳ್ಳಬೇಕಾಗಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಟೆಂಡರ್‌ ಪ್ರಕ್ರಿಯೆ ಸೇರಿದಂತೆ ಎಲ್ಲ ಕೆಲಸಗಳನ್ನು ನಿಗದಿತ ಕಾಲಮಿತಿಯಲ್ಲಿ ಮಾಡಬೇಕು ಎಂದರು.

ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಈ ಬಾರಿ 84 ಕೆರೆಗಳನ್ನು ಆಭಿವೃದ್ಧಿಪಡಿಸಲಾಗುತ್ತಿದ್ದು ಎಲ್ಲ 18 ವಿಧಾನಸಭಾ ಮತಕ್ಷೇತ್ರಗಳಿಂದ ತಲಾ ಐದು ಕೆರೆಗಳನ್ನು ಗುರುತಿಸಿ ಪಟ್ಟಿಯನ್ನು ಸಿದ್ಧಪಡಿಸಬೇಕು. ಈ ಕೆರೆಗಳನ್ನು ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಿ ಮಾದರಿ ಕೆರೆಯನ್ನಾಗಿ ರೂಪಿಸಲಾಗುವುದು ಎಂದು ಹೇಳಿದರು.

ಆಡಳಿತವನ್ನು ಚುರುಕುಗೊಳಿಸಿ ಅಭಿವೃದ್ಧಿ ಕಾರ್ಯಗಳ ವೇಗ ಹೆಚ್ಚಿಸಬೇಕು ಎಂಬುದು ಮುಖ್ಯಮಂತ್ರಿಗಳ ಆಶಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಹಾಗೂ ಅಧಿಕಾರಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಸಕಾಲ ಬಾಕಿ ಅರ್ಜಿ ಇತ್ಯರ್ಥ: ಸಕಾಲದಲ್ಲಿ 15 ಸಾವಿರಕ್ಕೂ ಅಧಿಕ ಅರ್ಜಿಗಳು ಬಾಕಿ ಉಳಿದಿವೆ. ಮುಂಬರುವ ದಿನಗಳಲ್ಲಿ ಯಾವುದೇ ಇಲಾಖೆಯಲ್ಲಿ ಒಂದೇ ಒಂದು ಅರ್ಜಿಗಳು ಬಾಕಿ ಉಳಿಯಬಾರದು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಕಚೇರಿಗಳಿಗೆ ಭೇಟಿ ನೀಡುವುದರ ಜತೆಗೆ ನಿಯಮಿತವಾಗಿ ಪ್ರಗತಿ ಪರಿಶೀಲಿಸಬೇಕು. ಅದೇ ರೀತಿ ಫಲಾನುಭವಿ ಆಧಾರಿತ ಕಾರ್ಯಕ್ರಮ ಅನುಷ್ಠಾನ ಕುರಿತು ಪರಿಶೀಲಿಸಬೇಕು ಎಂದ ಅವರು, ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾದ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಅನುಷ್ಠಾನ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ ಎಂದರು.

Advertisement

ಹೊಸದಾಗಿ ಕಸಾಯಿಖಾನೆ ಸ್ಥಾಪನೆಗೆ ಅನುಮತಿ ನೀಡುವಾಗ ಯಾವುದೇ ಕಾರಣಕ್ಕೂ ವಿಮಾನ ನಿಲ್ದಾಣದ ಸಮೀಪ ಅವಕಾಶ ನೀಡಬಾರದು. ಈಗಾಗಲೇ ಇರುವ ಮಾಂಸ ಮಾರಾಟ ಅಂಗಡಿಗಳು ತ್ಯಾಜ್ಯವನ್ನು ವ್ಯವಸ್ಥಿತವಾಗಿ ವಿಲೇ ನಡೆಯುವಂತೆ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ನಿರ್ದೇಶನ ನೀಡಿದರು. ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಲಕ್ಷ್ಯ ಹಾಗೂ ಕಾಯಕಲ್ಪ ಯೋಜನೆಗಳನ್ನು ಸರಕಾರದ ಮಾರ್ಗಸೂಚಿ ಪ್ರಕಾರ ಸಮರ್ಪಕವಾಗಿ ಜಾರಿಗೊಳಿಸಬೇಕು.ಆಯುಷ್ಮಾನ್‌ ಭಾರತ-ಆರೋಗ್ಯ ಕರ್ನಾಟಕ ಕಾರ್ಡುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ವಿತರಿಸಬೇಕು. ಕೋವಿಡ್‌ ತಪಾಸಣಾ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆ ಆಯುಕ್ತರಾದ ಡಾ.ರುದ್ರೇಶ್‌ ಘಾಳಿ, ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next