ಮೂಡಿಗೆರೆ: ಕುಡಿಯುವ ನೀರಿಗೆ ಎಸ್‌ಇಪಿ ಟಿಎಸ್‌ಪಿಯಲ್ಲಿ 1 ಕೋಟಿ ರೂ. ಅನುದಾನ ನೀಡಲಾಗಿದೆ. ಈ ಹಿಂದೆ ಸಚಿವ ಆಂಜನೇಯ ಅವರು ನೀಡಿದ ಅನುದಾನದಲ್ಲಿ 2 ಕೋಟಿ ರೂ.ಗಳನ್ನು ಕುಡಿಯುವ ನೀರಿಗೆ ಮೀಸಲಿರಿಸಲಾಗಿದೆ. ಅದನ್ನು ಸಮರ್ಪಕವಾಗಿ ಬಳಸಿಕೊಂಡು ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ತ್ತೈ„ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಿಂದೆ ಕಂದಾಯ ಇಲಾಖೆ ಸಚಿವರು ಬಂದಾಗ ಫಾರಂ ನಂ. 54ಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳ ಕಡತಗಳನ್ನು ಅರಣ್ಯ ಇಲಾಖೆಗೆ ಕಳುಹಿಸಿ ಸುಮ್ಮನೇ ಸಮಯ ವ್ಯರ್ಥ ಮಾಡುವುದು ಬೇಡ. ಕಂದಾಯ ಇಲಾಖೆ ಅಧಿಕಾರಿಗಳೇ ಪರಿಶೀಲನೆ ನಡೆಸಿ ಇತ್ಯರ್ಥಪಡಿಸಬಹುದು ಎಂದಿದ್ದರು. ಕಂದಾಯ ಜಾಗವೆಂದು ಪರಿಗಣನೆಗೆ ಬಂದರೆ 94.ಸಿ. ಮತ್ತು ಫಾ.ನಂ. 54 ನಲ್ಲಿ ಅರ್ಜಿ ಹಾಕಿದ ಫಲಾನುಭವಿಗಳಿಗೆ ಕಂದಾಯ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಿಗರ ವರದಿ ಪಡೆದು ಕೂಡಲೇ ವಿಲೇವರಿ ಮಾಡಬೇಕು ತಹಶೀಲ್ದಾರ್ ಪದ್ಮನಾಭಶಾಸ್ತ್ರಿ ಅವರಿಗೆ ಸೂಚಿಸಿದರು.
ತಾಪಂ ಅಧ್ಯಕ್ಷ ಕೆ.ಸಿ.ರತನ್ ಮಾತನಾಡಿ, ತಾಲೂಕಿನಲ್ಲಿ ಈ ಬಾರಿ ಹೆಚ್ಚು ಮಳೆಯಾಗಿದ್ದರೂ ನದಿ ಹಳ್ಳಗಳು ಸಂಪೂರ್ಣವಾಗಿ ಬತ್ತಿ ಹೋಗಿವೆ. ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಮುಂದಿನ ದಿನದಲ್ಲಿ ಇನ್ನೂ ಹೆಚ್ಚಿನ ಸಮಸ್ಯೆ ಉಂಟಾಗುತ್ತದೆ. ಹಾಗಾಗಿ ಕುಡಿಯುವ ನೀರಿನ ಸಮಸ್ಯೆ ಎಲ್ಲೆಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ಕಲೆ ಹಾಕಿ ಸಮಸ್ಯೆ ಪರಿಹರಿಸುವ ಕೆಲಸ ಮಾಡಬೇಕು ಎಂದರು.
ನಿರ್ಣಯ: ಪಶು ಮತ್ತು ಬಿಸಿಎಂ ಇಲಾಖೆ ಅಧಿಕಾರಿಗಳು ಶಾಸಕರ ಕೆಡಿಪಿ ಸಭೆಗೆ ಪದೇಪದೆ ಗೈರಾಗುತ್ತಿದ್ದು, ಅವರಿಗೆ ನೋಟಿಸ್ ನೀಡಬೇಕು. ತಾಲೂಕಿನಲ್ಲಿ ಸಿಬ್ಬಂದಿಗಳ ಕೊರತೆ ಇರುವುದರಿಂದ ಜನಸಾಮಾನ್ಯರ ಕೆಲಸಕ್ಕೆ ತೊಡಕುಂಟಾಗುತ್ತದೆ. ಹಾಗಾಗಿ ಜಿಲ್ಲಾಡಳಿತ ಕೇಂದ್ರಕ್ಕೆ ಯಾವ ಅಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಬಾರದು. ಕಳಸ ಹೋಬಳಿ ಮಾವಿನಕೆರೆ ಗ್ರಾಮದಲ್ಲಿ 10 ಎಕರೆ ಸೋಶಿಯಲ್ ಫಾರೆಸ್ಟ್ ಇಲಾಖೆ ಅಕೇಶಿಯಾ ಮರಗಳನ್ನು ತೆರವುಗೊಳಿಸಿ ನಿವೇಶನಕ್ಕಾಗಿ ಕಾಯ್ದಿರಿಸಬೇಕು ಸೇರಿದಂತೆ ವಿವಿಧ ಕಾರ್ಯಗಳು ನಡೆಯುವ ಹಾಗೂ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ನಿರ್ಣಯಿಸಲಾಯಿತು.
ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರಭಾಕರ್, ಸುಧಾ ಯೋಗೇಶ್, ಅಮಿತಾ ಮುತ್ತಪ್ಪ, ತಾಪಂ ಉಪಾಧ್ಯಕ್ಷೆ ಸವಿತಾ ರಮೇಶ್, ತಾಪಂ ಇಒ ಎಂ. ವೆಂಕಟೇಶ್, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.