Advertisement

ಕಾರ್ಮಿಕರ ನಿರ್ವಹಣೆ: ಅಧಿಕಾರಿಗಳಿಗೆ ಬುಲಾವ್‌

07:28 AM May 23, 2020 | Lakshmi GovindaRaj |

ಬೆಂಗಳೂರು: ಲಾಕ್‌ಡೌನ್‌ ಸಡಿಲಿಕೆ ನಂತರ ವಲಸೆ ಕಾರ್ಮಿಕರನ್ನು ತವರು ರಾಜ್ಯಗಳಿಗೆ ಕಳಿಸಿಕೊಡುವ ಹಾಗೂ ಪ್ರಯಾಣ ವೆಚ್ಚ ಭರಿಸುವ ವಿಚಾರ ಸೇರಿ ಒಟ್ಟಾರೆ ವಲಸೆ ಕಾರ್ಮಿಕರ ನಿರ್ವಹಣೆ ಕುರಿತು ವಿವರಣೆ ನೀಡಲು ರಾಜ್ಯ  ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಹೈಕೋರ್ಟ್‌ ಬುಲಾವ್‌ ನೀಡಿದೆ.

Advertisement

ವಲಸೆ ಕಾರ್ಮಿಕರ ವಿಚಾರವಾಗಿ ಎಐಸಿಸಿಟಿಯು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ  ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 26ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆಗೆ ಹಾಜರಾಗಿ ಸಂಪೂರ್ಣ ವಿವರಣೆ  ನೀಡುವಂತೆ ಸರ್ಕಾರ ದ ಮುಖ್ಯ ಕಾರ್ಯದರ್ಶಿ ಹಾಗೂ ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ತಾಕೀತು ಮಾಡಿದೆ.

ಅರ್ಜಿ ವಿಚಾರಣೆ ವೇಳೆ, ತವರು ರಾಜ್ಯಗಳಿಗೆ ತೆರಳಬ ಯಸುವ ವಲಸೆ ಕಾರ್ಮಿಕರ ಪ್ರಯಾಣ ದರ ಪಾವತಿಸುವ  ವಿಚಾರದಲ್ಲಿ ರಾಜ್ಯ ಸರ್ಕಾರ ಸ್ಪಷ್ಟ ನಿಲುವು ತಿಳಿಸದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ನ್ಯಾಯಪೀಠ, ರಾಜ್ಯದಲ್ಲಿ ವಲಸೆ ಕಾರ್ಮಿಕರು ಅತ್ಯಂತ ಅಪಾಯಕಾರಿ ಸ್ಥಿತಿಯಲ್ಲಿದ್ದಾರೆ. ಅವರ ಪ್ರಯಾಣ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸದೇ  ಇರುವುದು ದುರದೃಷ್ಟಕರ ಸಂಗತಿ. ವಲಸೆ ಕಾರ್ಮಿಕರು ಆಹಾರಕ್ಕಾಗಿ ಸರ್ಕಾರದತ್ತ ನೋಡುತ್ತಿದ್ದಾರೆ. ಈ ಬಗ್ಗೆ ಇದೇ 26ರಂದು ವಿಡಿಯೋ ಕಾನ್ಫರೆನ್ಸ್‌ ಮೂಲಕ ಖುದ್ದು ವಿವರಣೆ ನೀಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿ ವಿಚಾರಣೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next