Advertisement

ಬೇಡಿಕೆ ಈಡೇರಿಕೆಗೆ ಬೀದಿಗಿಳಿದ ಕಾರ್ಮಿಕರು

03:30 PM Mar 29, 2022 | Team Udayavani |

ಗದಗ: ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆ ನಿಯಂತ್ರಣ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ(ಜೆಸಿಟಿಯು) ಕರೆ ನೀಡಿರುವ ಅಖೀಲ ಭಾರತ ಎರಡು ದಿನಗಳ ಸಾರ್ವತ್ರಿಕ ಮುಷ್ಕರದ ಭಾಗವಾಗಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಯಿತು.

Advertisement

ಮಹಾತ್ಮಗಾಂಧಿ ವೃತ್ತದಲ್ಲಿ ಜಮಾಯಿಸಿದ ವಿವಿಧ ವಲಯಗಳ ಕಾರ್ಮಿಕರು ತಹಶೀಲ್ದಾರ್‌ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಶೀಲ್ದಾರ್‌ ಮೂಲಕ ಕೇಂದ್ರ-ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.

ಆದಾಯ ತೆರಿಗೆ ವ್ಯಾಪ್ತಿಗೆ ಒಳಪಡದ ಪ್ರತಿ ಕುಟುಂಬಕ್ಕೆ ಮಾಸಿಕ 7,500 ರೂ. ನೇರ ನಗದು ವರ್ಗಾವಣೆ ಮಾಡಬೇಕು. ಪ್ರತಿ ವ್ಯಕ್ತಿಗೂ ತಲಾ 10 ಕೆಜಿ ಆಹಾರ ಧಾನ್ಯ ನೀಡಬೇಕು. ಬಂಡವಾಳ ಶಾಹಿಗಳ ಪರವಾದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು. ಕೃಷಿ ಕಾಯ್ದೆಗಳ ಜೊತೆಗೆ ವಿದ್ಯುತ್‌(ತಿದ್ದುಪಡಿ) ಮಸೂದೆಯನ್ನು ವಾಪಸ್‌ ಪಡೆಯಬೇಕು. ಶಾಸನಬದ್ಧ ಬೆಂಬಲ ಬೆಲೆ ಕಾಯ್ದೆ ರೂಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಅಂಗನವಾಡಿ, ಆಶಾ, ಬಿಸಿಯೂಟ ಸೇರಿದಂತೆ ಸ್ಕೀಂ  ವರ್ಕರ್ಸ್‌ ಗೆ ಶಾಸನಬದ್ಧ ಕನಿಷ್ಟ ವೇತನ ಮತ್ತು ಸಾಮಾಜಿಕ ಭದ್ರತೆ ಜಾರಿ ಮಾಡಬೇಕು. ಎನ್‌ಪಿಎಸ್‌ ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು. ಸಾಮಾನ್ಯ ಕನಿಷ್ಟ ವೇತನ 26 ಸಾವಿರ ರೂ. ಜಾರಿಗೆ ತರಬೇಕು. ಹಮಾಲಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ವಸತಿ ರಹಿತ ಅಸಂಘಟಿತ ಕಾರ್ಮಿಕರಿಗೆ ವಸತಿ ಯೋಜನೆ ಜಾರಿಗೆ ತರಬೇಕು ಎಂದು ಮನವಿ ಮಾಡಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾರುತಿ ಚಿಟಗಿ, ಬಸವರಾಜ ಮಂತೂರು, ಆರ್‌.ಎಸ್‌.ಸಂಕನಗೌಡ್ರ, ರುದ್ರಪ್ಪ ಕಂದಗಲ್ಲ, ಶಿವು ಮೊರಬ, ಯಮುನಾ ಗೊಟೂರು, ಸಾವಿತ್ರಿ ಸಬನೀಸ, ಶೈಲಜಾ ಕೊಂಕಲ, ನಾಗರತ್ನ ಬಡಿಗಣ್ಣವರ, ಶೋಭಾ ಕರಿಲಿಂಗಣ್ಣವರ ಇನ್ನಿತರರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next