ಧಾರವಾಡ: ಹಿರಿಯ ಸಾಹಿತಿ, ಖ್ಯಾತ ವಿಮರ್ಶಕ, ಧಾರವಾಡ ಸಾಹಿತ್ಯ ಸಂಭ್ರಮದ ಸಾರಥಿಯಾಗಿದ್ದ ಡಾ|ಗಿರಡ್ಡಿ ಗೋವಿಂದರಾಜ್ (79) ಅವರು ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಇಲ್ಲಿನ ಕಲ್ಯಾಣ ನಗರದಲ್ಲಿರುವ ಅವರ ಸ್ವಗೃಹದಲ್ಲಿ ಕುಸಿದು ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಇಬ್ಬರು ಪುತ್ರರು, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧು-ಬಳಗವನ್ನು ಅವರು ಅಗಲಿದ್ದು, ಅವರ ಹುಟ್ಟೂರು ರೋಣ ತಾಲೂಕಿನ ಅಬ್ಬಿಗೇರಿಯಲ್ಲಿ ಶನಿವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
1939ರಲ್ಲಿ ಗದಗ ಜಿಲ್ಲೆಯ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದಲ್ಲಿ ಜನಿಸಿದ ಗಿರಡ್ಡಿ ಅವರು ಅಲ್ಲಿಯೇ ಪ್ರಾಥಮಿಕ ಶಿಕ್ಷಣ ಪೂರೈಸಿ, ಪ್ರೌಢ ಶಿಕ್ಷಣ ಹಾಗೂ ಉನ್ನತ ಶಿಕ್ಷಣಕ್ಕಾಗಿ ಧಾರವಾಡಕ್ಕೆ ಆಗಮಿಸಿದ್ದರು. ಧಾರವಾಡದ ಕರ್ನಾಟಕ ಕಾಲೇಜು ಮತ್ತು ಕರ್ನಾಟಕ ವಿವಿಯಲ್ಲಿ ಶಿಕ್ಷಣ ಪಡೆದು ಅಲ್ಲಿಯೇ ಇಂಗ್ಲಿಷ್ ಪ್ರಾಧ್ಯಾಪಕರಾಗಿ, ಅನಂತರ ವಿಭಾಗದ ಮುಖ್ಯಸ್ಥರಾಗಿ ಸೇವೆಯಿಂದ ನಿವೃತ್ತಿಯಾಗಿದ್ದರು. ಕೇಂದ್ರ ಸಾಹಿತ್ಯ ಅಕಾಡೆಮಿ ಸಹಿತ ಹಲವು ಪ್ರಶಸ್ತಿಗಳನ್ನು ಪಡೆದಿದ್ದ ಅವರು ಐವತ್ತು ವರ್ಷಗಳ ಕಾಲ ಸಾಹಿತ್ಯ ಕೃಷಿಯಲ್ಲಿ ನಿರತರಾಗಿದ್ದರು. ಹಿರಿಯ ಸಾಹಿತಿಯ ನಿಧನಕ್ಕೆ ಚೆನ್ನವೀರ ಕಣವಿ, ಪಾಟೀಲ ಪುಟ್ಟಪ್ಪ, ಮಲ್ಲಿಕಾರ್ಜುನ ಹಿರೇಮಠ, ಮೋಹನ ನಾಗಮ್ಮನವರ, ಸಚಿವ ವಿನಯ ಕುಲಕರ್ಣಿ ಸಹಿತ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಕನ್ನಡ ಸಾಹಿತ್ಯ ಲೋಕ ಅತ್ಯುತ್ತಮ ವಿಮರ್ಶಕನನ್ನು ಕಳೆದುಕೊಂಡಿದೆ. ಸಾಹಿತ್ಯ ಲೋಕಕ್ಕೆ ಗಿರಡ್ಡಿ ಗೋವಿಂದರಾಜ ಅವರ ಕೊಡುಗೆ ಅಪಾರ.ಭಗವಂತ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ.
-ಸಿದ್ದಲಿಂಗಯ್ಯ, ಕವಿ.
ದೊಡ್ಡ ವಿಮರ್ಶಕನನ್ನು ಕಳೆದುಕೊಂಡು ಕನ್ನಡ ಸಾಹಿತ್ಯ ಲೋಕ ಬಡವಾಗಿದೆ. ಸರಳ, ಸಜ್ಜನಿಕೆಗೆ ಹೆಸರುವಾಸಿ ಆಗಿದ್ದ ಗಿರಡ್ಡಿ ಗೋವಿಂದರಾಜ ಅವರು ತಮ್ಮದೇ ಆದ ಬರವಣಿಗೆ ಮೂಲಕ ನಾಡಿನ ಮನೆಮಾತಾಗಿದ್ದರು. ಅವರ ಅಗಲಿಕೆ ವೈಯಕ್ತಿಕವಾಗಿ ನೋವುಂಟು ಮಾಡಿದೆ.
-ಡಾ| ಮನುಬಳಿಗಾರ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ.