ಯಾದಗಿರಿ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶಿವಶರಣ ಶ್ರೀ ಹಡಪದ ಅಪ್ಪಣ್ಣರವರ ಜಯಂತ್ಯುತ್ಸವ ಕಾರ್ಯಕ್ರಮ ಜುಲೈ 16ರಂದು ಬೆಳಗ್ಗೆ 11:00 ಗಂಟೆಗೆ ಯಾದಗಿರಿ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಶಿವಶರಣ ಹಡಪದ ಅಪ್ಪಣ್ಣರವರ ಜಯಂತ್ಯುತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಯಂತ್ಯುತ್ಸವ ಅಂಗವಾಗಿ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಅಂದು ಬೆಳಗ್ಗೆ 9:00 ಗಂಟೆಗೆ ಶಿವಶರಣ ಹಡಪದ ಅಪ್ಪಣ್ಣರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಅದರಂತೆ ಗ್ರಾಮ ಪಂಚಾಯಿತಿಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ಶ್ರದ್ಧಾ, ಭಕ್ತಿಯೊಂದಿಗೆ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು. ತಾಲೂಕು ಮಟ್ಟದಲ್ಲಿ ಕೂಡ ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.
ಶರಣರ ಜೀವನ ಹಾಗೂ ಅವರ ಸಂದೇಶಗಳನ್ನು ಜನರಿಗೆ ತಲುಪಿಸುವುದು ಜಯಂತಿಗಳ ಉದ್ದೇಶವಾಗಿದೆ. ಹಾಗಾಗಿ, ಸರ್ಕಾರದ ಜಯಂತಿ ಕಾರ್ಯಕ್ರಮಗಳಲ್ಲಿ ಸನ್ಮಾನಕ್ಕೆ ಅವಕಾಶ ಇರುವುದಿಲ್ಲ ಎಂಬುದಾಗಿ ತಿಳಿಸಿದ ಅಪರ ಜಿಲ್ಲಾಧಿಕಾರಿಗಳು, ಶಿವಶರಣ ಹಡಪದ ಅಪ್ಪಣ್ಣರ ಜಯಂತಿಯನ್ನು ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಹಮ್ಮಿಕೊಂಡಿರುವ ಬಗ್ಗೆ ಎರಡು ದಿನ ಮುಂಚಿತವಾಗಿ ಯಾದಗಿರಿ ನಗರದಾದ್ಯಂತ ಆಟೋದಲ್ಲಿ ಮೈಕ್ ಮೂಲಕ ಪ್ರಚಾರ ಮಾಡಬೇಕು ಎಂದು ನಗರಸಭೆ ಪೌರಾಯುಕ್ತರಿಗೆ ನಿರ್ದೇಶಿಸಿದರು.
ಜಯಂತಿಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆಗೆ ತಿಳಿಸಲಾಯಿತು. ಕಾರ್ಯಕ್ರಮದ ನೋಡಲ್ ಅಧಿಕಾರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಅವರನ್ನು ನೇಮಕ ಮಾಡಲಾಯಿತು.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕ ದತ್ತಪ್ಪ ಕಲ್ಲೂರ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ರಘುವೀರಸಿಂಗ್ ಠಾಕೂರ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಕೆ. ವಿಶ್ವನಾಥ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಗೌರಮ್ಮ ದೊಂತಾ, ವಿಕ್ರಂಸಿಂಗ್, ಶ್ರೀ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾ ಅಧ್ಯಕ್ಷ ಅಯ್ಯಣ್ಣ ಇಬ್ರಾಹಿಂಪೂರ, ಗೌರವ ಅಧ್ಯಕ್ಷರಾದ ಬಸವರಾಜ ತಳ್ಳಳ್ಳಿ, ಭಾಗಣ್ಣ ಇಟಗಿ, ಹಂಪಣ್ಣ, ಸೋಮಶೇಖರ, ಸೂಗಣ್ಣ, ಸುಭಾಶ್ಚಂದ್ರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.