Advertisement

ಅಂಗಡಿಗಳ ಮೇಲೆ ದಾಳಿ

12:35 PM Aug 02, 2019 | Naveen |

ಯಾದಗಿರಿ: ನಗರದ ರೈಲು ನಿಲ್ದಾಣ ಏರಿಯಾ, ಮಾರುಕಟ್ಟೆ ಪ್ರದೇಶ, ಸುಭಾಷ್‌ ವೃತ್ತ, ಮುದ್ನಾಳ ಪೆಟ್ರೋಲ್ ಪಂಪ್‌, ಹಳೆ ಬಸ್‌ ನಿಲ್ದಾಣ ಹಾಗೂ ಹೊಸ ಬಸ್‌ ನಿಲ್ದಾಣದ ಸುತ್ತಮುತ್ತಲಿನ ಸ್ಟಾಲ್, ಮಳಿಗೆ, ಅಂಗಡಿಗಳ ಮೇಲೆ ಬುಧವಾರ ದಾಳಿ ನಡೆಸಿದ ಅಧಿಕಾರಿಗಳು ಪ್ಲಾಸ್ಟಿಕ್‌, ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ.

Advertisement

ಅನಿರೀಕ್ಷಿತ ದಾಳಿ, ತಪಾಸಣೆ ಸಂದರ್ಭದಲ್ಲಿ ಅಂಗಡಿಗಳ ಮಾಲೀಕರ ವಿರುದ್ಧ ಒಟ್ಟು 18 ಪ್ರಕರಣ ದಾಖಲಿಸಿಕೊಂಡಿದ್ದು, 3600 ರೂ. ದಂಡ ವಿಧಿಸಿದ್ದಾರೆ.

ಜಿಲ್ಲಾ ಬಾಲಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕ ರಘುವೀರಸಿಂಗ್‌ ಠಾಕೂರ ಮಾತನಾಡಿ, ಸರ್ಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳ ಆದೇಶ ಪಡೆದು ದಾಳಿ ನಡೆಸಲಾಗಿದೆ. ನಿಷೇಧಿತ ಪ್ಲಾಸ್ಟಿಕ್‌ ವಸ್ತುಗಳನ್ನು ಬಳಸುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವುದನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸಿದಲ್ಲಿ 25000 ರೂ. ವರೆಗೆ ದಂಡ ವಿಧಿಸುವುದರ ಜತೆಗೆ ಶಿಕ್ಷೆಗೆ ಒಳಪಡಬೇಕಾಗುತ್ತದೆ. ಬಾಲ ಕಾರ್ಮಿಕ ಪದ್ಧತಿ 1986ರ ಕಾಯ್ದೆಯಡಿ 18 ವರ್ಷದೊಳಗಿನ ಮಕ್ಕಳನ್ನು ಯಾವುದೇ ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂಬ ವಿಷಯದ ಕುರಿತು ಅರಿವು ಮೂಡಿಸಲಾಗಿದೆ ಎಂದು ಹೇಳಿದರು.

ಸಾಕಷ್ಟು ಬಾರಿ ಜಾಥಾ, ಆಟೋ ಪ್ರಚಾರ, ಕರಪತ್ರಗಳ ವಿತರಣೆ ಮೂಲಕ, ಕಾನೂನು ಅರಿವು- ನೆರವು ಕಾರ್ಯಕ್ರಮಗಳು ಮತ್ತು ಹಲವಾರು ಬಾರಿ ಅನಿರೀಕ್ಷಿತ ತಪಾಸಣೆ, ದಾಳಿ ಮಾಡಿ ಸಾರ್ವಜನಿಕರಿಗೆ ಹಾಗೂ ಸಬಂಧಿಸಿದ ಅಂಗಡಿ ಮಾಲೀಕರಿಗೆ ಮಾಹಿತಿ ನೀಡಲಾಗಿದೆ. ಆದರೂ ಹಲವಾರು ಅಂಗಡಿ ಮಾಲೀಕರು ನಿಯಮ ಉಲ್ಲಂಘಿಸಿ ನಿಷೇಧಿತ ಪ್ಲಾಸ್ಟಿಕ್‌ ವಸ್ತುಗಳನ್ನು ಬಳಸುತ್ತಿರುವುದು, ಬಹಿರಂಗವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಹಾಗೂ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ಮಹಾಲಕ್ಷ್ಮೀ ಸಜ್ಜನ ಮಾತನಾಡಿ, ಕೋಟ್ಪಾ-2003 ಕಾಯ್ದೆಯಡಿ ಸೆಕ್ಷನ್‌ 4, 5, 6, 6ಎ, 6ಬಿ ಮತ್ತು 7ರ ಪ್ರಕಾರ ಸಂಬಂಧಿಸಿದ ಕಾಯ್ದೆಗಳನುಸಾರ ಹೋಟೆಲ್, ರೆಸ್ಟೋರೆಂಟ್, ಬಾರ್‌, ಧಾಬಾ, ಅಂಗಡಿಗಳಲ್ಲಿ ಮತ್ತು ಶಾಲಾ-ಕಾಲೇಜು ಪ್ರದೇಶದ 100 ಮೀಟರ್‌ ಅಂತರದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕಿಗೆ ಸಂಬಂಧಿಸಿದ ಉತ್ಪನ್ನಗಳನ್ನು ಬಹಿರಂಗವಾಗಿ ಮಕ್ಕಳಿಂದ ಮಾರುವುದಕ್ಕೆ ಪ್ರಚೋದನೆ ನೀಡುವುದು, ದುಡಿಸಿಕೊಳ್ಳುವುದು ಮತ್ತು ಸೇದುವುದನ್ನು ಕಾನೂನಿನ ಪ್ರಕಾರ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದಲ್ಲಿ ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೆ ಒಳಪಡಬೇಕಾಗುತ್ತದೆ ಎಂದು ಹೇಳಿದರು.

Advertisement

ಪರಿಸರ ಇಂಜಿನಿಯರ್‌ ಸಂಗಮೇಶ, ಎಎಸ್‌ಐ ಕಲ್ಯಾಣಿ, ವಾಯು ಮಾಲಿನ್ಯ ನಿಯಂತ್ರಣ ಸಹಾಯಕ ಪರಿಸರ ಅಧಿಕಾರಿಗಳಾದ ಬಸವರಾಜ ಮತ್ತು ನಗರಸಭೆ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next