Advertisement

ಬಸವೇಶ್ವರ ಜಯಂತಿ ಆಚರಣೆಗೆ ಸೂಚನೆ

03:02 PM May 05, 2019 | Team Udayavani |

ಯಾದಗಿರಿ: ಲೋಕಸಭಾ ಸಾರ್ವತ್ರಿಕ ಚುನಾವಣೆ ಮಾದರಿ ನೀತಿ ಸಂಹಿತೆ ಇನ್ನೂ ಜಾರಿಯಲ್ಲಿರುವುದರಿಂದ ಮೇ 7ರಂದು ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿಯನ್ನು ಸರಳ ಮತ್ತು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ಜಿ. ರಜಪೂತ ಸೂಚಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಗಜ್ಯೋತಿ ಬಸವೇಶ್ವರ ಜಯಂತಿ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಡಳಿತ ವತಿಯಿಂದ ಬಸವೇಶ್ವರ ಜಯಂತಿ ಕಾರ್ಯಕ್ರಮವನ್ನು ಮೇ. 7ರಂದು ಬೆಳಗ್ಗೆ 10:00 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗುವುದು. ಜಯಂತಿ ಅಂಗವಾಗಿ ಅಂದು ಬೆಳಗ್ಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಅದರಂತೆ ಬೆಳಗ್ಗೆ 9:00 ಗಂಟೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ಶ್ರದ್ಧಾ, ಭಕ್ತಿಯೊಂದಿಗೆ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು ಎಂದು ನಿರ್ದೇಶಿಸಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ವೇದಿಕೆ ಮೇಲೆ ಅಧಿಕಾರಿಗಳು ಮಾತ್ರ ಕುಳಿತುಕೊಳ್ಳಲು ಅವಕಾಶ ಇದೆ. ಈ ಕಾರ್ಯಕ್ರಮಗಳಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದ ರೀತಿಯಲ್ಲಿ ಉಪನ್ಯಾಸ ನೀಡುವ ವ್ಯಕ್ತಿಗಳನ್ನು ನೇಮಕ ಮಾಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಸವೇಶ್ವರರ ಜಯಂತ್ಯುತ್ಸವ ಸಮಿತಿಯ ಜಿಲ್ಲಾಧ್ಯಕ್ಷ ಅಯ್ಯಣ್ಣ ಹುಂಡೇಕಾರ ಡಾ| ಜ್ಯೋತಿಲತಾ ತಡಿಬಿಡಿ ಮಠ ಅವರನ್ನು ಕಾರ್ಯಕ್ರಮದ ಉಪನ್ಯಾಸಕರನ್ನಾಗಿ ನೇಮಿಸಬೇಕು ಎಂದರು.

ಜಯಂತಿ ಪ್ರಯುಕ್ತ ನಗರದ ರಸ್ತೆ ಸ್ವಚ್ಛತೆ ಮಾಡಿಸಲು ಕ್ರಮ ಕೈಗೊಳ್ಳುವಂತೆ ನಗರಸಭೆ ಪೌರಾಯುಕ್ತರಿಗೆ ಸೂಚಿಸಲಾಯಿತು. ಕಾರ್ಯಕ್ರಮದಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಸೂಕ್ತ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ ಮಾಡಲು ಜಿಲ್ಲಾ ಪೊಲೀಸ್‌ ಇಲಾಖೆಗೆ ಸಭೆಯಲ್ಲಿ ತಿಳಿಸಲಾಯಿತು.

Advertisement

ಸಭೆಯಲ್ಲಿ ಡಿವೈಎಸ್‌ಪಿ ಯು. ಶರಣಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶ್ರೀಶೈಲ ಬಿರಾದಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸಿದ್ದಪ್ಪ ಎಸ್‌. ಹೊಟ್ಟಿ, ತಾಲೂಕು ವೀರಶೈವ ಸಮಾಜ ಯುವ ಘಟಕದ ಅಧ್ಯಕ್ಷ ನೀಲಕಂಠ ಶೀಲವಂತ, ಅಖೀಲ ಭಾರತ ವೀರಶೈವ ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ಆರ್‌. ಮಹಾದೇವಪ್ಪ ಅಬ್ಬೆತುಮಕೂರು, ಡಾ| ಸಿದ್ರಾಮಪ್ಪ ಪಾಟೀಲ, ಚನ್ನಪ್ಪ ಕೋರಿಶೆಟ್ಟಿ ಠಾಣಗುಂದಿ, ದೇವೀಂದ್ರರೆಡ್ಡಿ ಯಡ್ಡಳ್ಳಿ, ನೂರಂದಪ್ಪ, ಬಸವಂತ್ರಾಯಗೌಡ ಮಾಲಿಪಾಟೀಲ, ನಗರಸಭೆ ಸದಸ್ಯರಾದ ವಿಲಾಸ ಪಾಟೀಲ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಮಾಜದ ಮುಖಂಡರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next