ಯಾದಗಿರಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜಿಲ್ಲೆಗಳ ಯೋಜನೆಯಡಿ ಆಯ್ಕೆಯಾಗಿರುವ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ನಿಗದಿ ಪಡಿಸಲಾಗಿರುವ ಮಾನದಂಡಗಳ ಏರಿಕೆಗೆ ಕ್ರಮವಹಿಸಿ ರ್‍ಯಾಂಕಿಂಗ್‌ನಲ್ಲಿ ಯಾದಗಿರಿ ಜಿಲ್ಲೆಯನ್ನು ಮತ್ತಷ್ಟು ಉತ್ತಮ ಪಡಿಸಿ ಪ್ರಗತಿ ಸಾಧಿಸಲು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್. ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಹತ್ವಾಕಾಂಕ್ಷಿ ಜಿಲ್ಲೆಯ ಸೂಚ್ಯಂಕಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಶಿಕ್ಷಣ, ಆರೋಗ್ಯ, ಕೃಷಿ, ಕೌಶಲ್ಯಾಭಿವೃದ್ಧಿ ಸೇರಿದಂತೆ ವಿವಿಧ ಸೂಚ್ಯಂಕಗಳನ್ನು ಏರಿಕೆಗೆ ಮಹತ್ವಾಕಾಂಕ್ಷಿ ಜಿಲ್ಲೆಗಳ ಯೋಜನೆಯಡಿ ಮಾನದಂಡ ನಿಗದಿಪಡಿಸಲಾಗಿದೆ. ಆದ ಕಾರಣ ಸಂಬಂಧಿಸಿದ ಇಲಾಖೆಗಳ ವ್ಯಾಪ್ತಿಯಡಿ ಕೈಗೊಳ್ಳಬೇಕಾದ ಅಗತ್ಯ ಕಾರ್ಯ ಚಟುವಟಿಕೆಗಳನ್ನು ಕೈಗೊಂಡು ನಿಗದಿಪಡಿಸಿದ ಮಾನದಂಡಗಳ ಸೂಚ್ಯಂಕಗಳಲ್ಲಿ ಪ್ರಗತಿ ಸಾಧಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಶ್ರಮಿಸಬೇಕೆಂದು ತಿಳಿಸಿದರು.
ಕೃಷಿ ಕ್ಷೇತ್ರಕ್ಕೆ ಕುರಿತಂತೆ ನಡೆದ ಚರ್ಚೆಯಲ್ಲಿ ಹನಿ ನೀರಾವರಿ, ತುಂತುರು ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಅದರಂತೆ ಬೆಳೆ ವಿಮೆಗೆ ಹೆಚ್ಚಿನ ರೈತರನ್ನು ನೋಂದಾಯಿಸಿಕೊಳ್ಳಬೇಕು. ರೈತ ಸಂಪರ್ಕ ಕೇಂದ್ರಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಇಂದುಮತಿ ಪಾಟೀಲ್, ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕ ಪ್ರಭಾಕರ್ ಕವಿತಾಳ, ಡಿಡಿಪಿಐ ಶಾಂತಗೌಡ ಪಾಟೀಲ್, ಜಂಟಿ ಕೃಷಿ ನಿರ್ದೇಶಕ ಅಭಿದ್ ಎಸ್.ಎಸ್. ಹಾಗೂ ಇನ್ನಿತರ ಇಲಾಖಾಧಿಕಾರಿಗಳಿದ್ದರು.