Advertisement

ಉತ್ತಮ ಆರೋಗ್ಯಕ್ಕೆ ಕ್ರೀಡೆಗಳು ಪೂರಕ

03:16 PM Sep 20, 2019 | Naveen |

ಯಾದಗಿರಿ: ಕ್ರೀಡಾ ಚಟುವಟಿಕೆಗಳು ಜೀವನದ ಬಹುಮುಖ್ಯ ಭಾಗವಾಗಿದೆ. ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ಪೂರಕವಾಗಿವೆ. ಆದ್ದರಿಂದ ಪ್ರತಿಯೊಬ್ಬರೂ ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಜಿಪಂ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ್ ಹೇಳಿದರು.

Advertisement

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ 2019-20ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಆವರು ಮಾತನಾಡಿದರು.

ಕ್ರೀಡೆಗಳಲ್ಲಿ ಸೋಲು-ಗೆಲುವು ಸಾಮಾನ್ಯ. ಆದ್ದರಿಂದ ಕ್ರೀಡಾಪಟುಗಳಿಗೆ ಸೋಲು-ಗೆಲುವು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯವಾಗಿರುತ್ತದೆ. ಇಂದಿನ ಸೋಲು ಮುಂದಿನ ಗೆಲುವಿಗೆ ಪೂರಕವಾಗುತ್ತದೆ. ಸೋತಾಗ ನಿರಾಶರಾಗದೆ ತೀರ್ಪುಗಾರರು ನೀಡುವ ತೀರ್ಪಿಗೆ ಬದ್ಧರಾಗಿರಬೇಕು. ಎಲ್ಲರೂ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಕ್ರೀಡಾ ಸ್ಫೂಧಿರ್ತಿ ಮೆರೆಯಬೇಕು ಎಂದು ಹೇಳಿದರು.

ಜಿಲ್ಲಾ ಮಟ್ಟದಲ್ಲಿ ವಿಜೇತರಾದ ಕ್ರೀಡಾಪಟುಗಳು ಮುಂದೆ ವಿಭಾಗಮಟ್ಟ ಹಾಗೂ ರಾಜ್ಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ ಜಿಲ್ಲೆಯ ಕೀರ್ತಿ ತರಬೇಕು. ಜಿಲ್ಲಾ ಕ್ರೀಡಾಂಗಣದ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನಲ್ಲಿ 8 ಲಕ್ಷ ರೂ. ಅನುದಾನ ನೀಡಲಾಗುವುದು ಎಂದು ಹೇಳಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಪ್ರತಿಯೊಬ್ಬರಲ್ಲಿಯೂ ಪ್ರತಿಭೆ ಇರುತ್ತದೆ. ಪ್ರತಿಭೆ ಗುರುತಿಸಲು ಇಂತಹ ಕ್ರೀಡಾಕೂಟಗಳು ವೇದಿಕೆ ಕಲ್ಪಿಸುತ್ತವೆ. ಹೀಗಾಗಿ ಎಲ್ಲರೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗಹಿಸಬೇಕು ಎಂದು ಹೇಳಿದರು.

Advertisement

ಜಿಪಂ ಉಪಾಧ್ಯಕ್ಷೆ ಗಿರಿಜಮ್ಮ ಎಸ್‌. ರೊಟ್ನಡಗಿ ಮಾತನಾಡಿ, ಗುರಿ ಸಾಧನೆಗೆ ಕ್ರೀಡಾಪಟುಗಳಲ್ಲಿ ಸತತ ಪ್ರಯತ್ನ ಇರಬೇಕು. ಅಂದಾಗ ಏನಾದರೂ ಸಾಧನೆ ಮಾಡಲು ಸಾಧ್ಯವಿದೆ ಎಂದು ಹೇಳಿದರು.

ನಗರಸಭೆ ಸದಸ್ಯ ಹಣಮಂತ ಟಿ.ನಾಯಕ, ಸುರಪುರ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಂಜೀವ ದರಬಾರಿ, ಯಾದಗಿರಿ ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಹಣಮಂತ ಹೊಸಮನಿ, ಗೌರವ ಅಧ್ಯಕ್ಷ ಶಂಕರಗೌಡ ಪಾಟೀಲ, ಉಪನ್ಯಾಸಕ ರುದ್ರಗೌಡ ಪಾಟೀ ಇದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಚನ್ನಬಸಪ್ಪ ಕುಳಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪವಿತ್ರಾ ಶಿರವಾಳ ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು. ಶೃತಿ ಹಾಗೂ ಸಂಗಡಿಗರು ಪ್ರಾರ್ಥನಾ ಗೀತೆ ಹಾಡಿದರು. ದೈಹಿಕ ಶಿಕ್ಷಣ ಶಿಕ್ಷಕ ತುಳಜಪ್ಪ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಬಸಲಿಂಗಪ್ಪ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next