Advertisement

65 ರಸ್ತೆ ಅಪಘಾತ ವಲಯ ಗುರುತು

05:09 PM May 18, 2019 | Naveen |

ಯಾದಗಿರಿ: ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ತಂಡದಿಂದ ವೈಜ್ಞಾನಿಕವಾಗಿ ತನಿಖೆ ಕೈಗೊಂಡು ಜಿಲ್ಲೆಯಲ್ಲಿ ಒಂದೇ ಸ್ಥಳದಲ್ಲಿ ಪದೇ ಪದೇ ಅಪಘಾತ ಸಂಭವಿಸುವಂತಹ 65 ಅಪಘಾತ ವಲಯಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ತಿಳಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದ ಅವರು, ಪ್ರಾದೇಶಿಕ ಸಾರಿಗೆ ಇಲಾಖೆ, ಪೊಲೀಸ್‌ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಗಳ ವತಿಯಿಂದ ಜಂಟಿ ಸಮೀಕ್ಷೆ ಕೈಗೊಂಡು ಬ್ಲಾ ್ಯಕ್‌ಸ್ಪಾಟ್‌ಗಳ ವರದಿ ಸಿದ್ಧಪಡಿಸಲಾಗಿದೆ ಎಂದರು.

ಗುರುತಿಸಿರುವ ಸ್ಥಳಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ಸೂಚನಾ ಫಲಕಗಳನ್ನು ಅಳವಡಿಸುವುದು, ಸ್ಪೀಡ್‌ ಬ್ರೇಕರ್‌ ಅಳವಡಿಸುವುದು, ಜಂಗಲ್ ಕಟಿಂಗ್‌ ಮಾಡಿಸುವುದು, ಝಿಬ್ರಾ ಕ್ರಾಸಿಂಗ್‌, ರಸ್ತೆಯನ್ನು ನೇರವಾಗಿ ಸರಿಪಡಿಸುವುದು, ರಸ್ತೆ ವಿಸ್ತರಣೆ ಸೇರಿದಂತೆ ಇನ್ನಿತರ ಪರಿಹಾರ ಅಂಶಗಳನ್ನು ತಂಡದ ಅಧಿಕಾರಿಗಳು ವರದಿಯಲ್ಲಿ ನೀಡಿದ್ದಾರೆ. ಅದರಂತೆ ಪರಿಹಾರ ಕಾರ್ಯಕ್ಕಾಗಿ ಈ ತಿಂಗಳ ಅಂತ್ಯದೊಳಗೆ ಅಂದಾಜು ವೆಚ್ಚಪಟ್ಟಿ ಸಿದ್ಧಪಡಿಸುವಂತೆ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್‌ ಚನ್ನಬಸಪ್ಪ ಮೇಕಾಲೆಗೆ ಸೂಚಿಸಿದರು.

ರಾಜ್ಯದಲ್ಲಿ ಸರಕು ಸಾಗಣೆ ವಾಹನಗಳಲ್ಲಿ ಶಾಲಾ ಮಕ್ಕಳು, ಕೂಲಿ ಕಾರ್ಮಿಕರು ಹಾಗೂ ಇನ್ನಿತರೆ ಪ್ರಯಾಣಿಕರನ್ನು ಮೋಟಾರು ವಾಹನ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸಿ ಸುರಕ್ಷಿತವಲ್ಲದ ರೀತಿಯಲ್ಲಿ ಕಾರ್ಯಾಚರಣೆ ಮಾಡುತ್ತಿರುವ ಬಗ್ಗೆ ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ರಿಟ್ ಅರ್ಜಿ ದಾಖಲಾಗಿದೆ. ಇಂತಹ ಪ್ರಕರಣಗಳನ್ನು ತಡೆಗಟ್ಟಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಇತ್ತೀಚೆಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಹಲವು ಸೂಚನೆಗಳನ್ನು ನೀಡಿದ್ದಾರೆ. ಹಾಗಾಗಿ, ರಸ್ತೆ ಸುರಕ್ಷತಾ ನಿಯಮಗಳನ್ನು ಅನುಷ್ಠಾನಗೊಳಿಸುವಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದಲ್ಲಿ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜಿಲ್ಲೆಯ ಕಾರ್ಖಾನೆ ಮತ್ತು ಉದ್ದಿಮೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರನ್ನು ಸುರಕ್ಷಿತವಲ್ಲದ ವಾಹನಗಳಲ್ಲಿ ತುಂಬಿಕೊಂಡು ಹೋಗುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಬಂಧಪಟ್ಟ ಕಾರ್ಖಾನೆ ಮಾಲೀಕರು ಹಾಗೂ ಕಾರ್ಮಿಕ ಸಂಘಟನೆಗಳೊಂದಿಗೆ ಚರ್ಚೆ ನಡೆಸಬೇಕು. ಅಗತ್ಯವಿರುವ ಕಡೆಗಳಲ್ಲಿ ಕಾರ್ಮಿಕರ ಸುರಕ್ಷಿತ ಪ್ರಯಾಣಕ್ಕಾಗಿ ಕೆಎಸ್‌ಆರ್‌ಟಿಸಿ ವತಿಯಿಂದ ಬಸ್‌ ವ್ಯವಸ್ಥೆ ಮಾಡಿಸಬೇಕು ಎಂದು ತಿಳಿಸಿದರು.

Advertisement

2018-19ನೇ ಸಾಲಿಗೆ ಸಾರಿಗೆ ಕ್ಷೇಮಾಭಿವೃದ್ಧಿ ಮತ್ತು ರಸ್ತೆ ಸುರಕ್ಷತಾ ಯೋಜನೆಯಡಿ ಯಾದಗಿರಿ ಜಿಲ್ಲೆಗೆ 5.33 ಲಕ್ಷ ರೂ. ಬಿಡುಗಡೆಯಾಗಿದೆ. ಈ ಹಣವನ್ನು ಜಿಲ್ಲೆಯಲ್ಲಿನ ಬ್ಲಾ ್ಯಕ್‌ಸ್ಪಾಟ್ ಸರಿಪಡಿಸುವಿಕೆಗೆ ಬಳಸಲು ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಂತ ಚವ್ಹಾಣ ಅವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಶಹಾಪುರ ಪಿಐ ನಾಗರಾಜ ಮಾತನಾಡಿ, ಯುವಕರು ಹೆಚ್ಚಾಗಿ ಚಾಲನಾ ಪರವಾನಗಿ ಇಲ್ಲದೆ ವಾಹನ ಚಲಾಯಿಸುತ್ತಾರೆ. ಹೆಲ್ಮೆಟ್ ಹಾಕಿಕೊಳ್ಳುವುದಿಲ್ಲ ಮತ್ತು ಬೈಕ್‌ ಮೇಲೆ ಮೂರು ಜನ ಸವಾರಿ ಮಾಡುವಂತಹ ಪ್ರಕರಣಗಳು ಕಂಡು ಬರುತ್ತಿವೆ. ಹಾಗಾಗಿ, ಪ್ರೌಢಶಾಲೆ ಮತ್ತು ಕಾಲೇಜುಗಳಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಜಾಗೃತಿಗಾಗಿ ತಿಂಗಳಿಗೆ ಒಂದು ಕ್ಲಾಸ್‌ ಆಯೋಜಿಸಬೇಕು ಎಂದು ಮನವಿ ಮಾಡಿದರು. ಜಿಲ್ಲಾಧಿಕಾರಿಗಳು ಇದಕ್ಕೆ ಒಪ್ಪಿಗೆ ನೀಡಿ, ಅದರಂತೆ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಗೆ ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್‌ ಸೋನವಣೆ ಮಾತನಾಡಿ, ರಸ್ತೆ ಸುರಕ್ಷತಾ ವಿಷಯವನ್ನು ಸರ್ಕಾರದ ಮಟ್ಟದಲ್ಲಿ ಗಂಭೀರವಾಗಿ ಪರಿಗಣಿಸಲಾಗಿದೆ. ಸರಕು ಸಾಗಣೆ ವಾಹನಗಳಲ್ಲಿ ಶಾಲಾ ಮಕ್ಕಳು, ಕೂಲಿ ಕಾರ್ಮಿಕರು ಸೇರಿದಂತೆ ಇನ್ನಿತರೆ ಪ್ರಯಾಣಿಕರನ್ನು ಮೋಟಾರು ವಾಹನ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸಿ ಸುರಕ್ಷಿತವಲ್ಲದ ರೀತಿಯಲ್ಲಿ ಕಾರ್ಯಾಚರಣೆ ಮಾಡುತ್ತಿರುವುದು ಕಂಡು ಬಂದಲ್ಲಿ ಹೆಚ್ಚಿನ ಪ್ರಕರಣಗಳನ್ನು ದಾಖಲಿಸಬೇಕು ಎಂದು ಪೊಲೀಸ್‌ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಇತ್ತೀಚೆಗೆ ವಾಹನಗಳ ಸಂಖ್ಯೆ ಹೆಚ್ಚಳದ ಜೊತೆಗೆ ಅಪಘಾತಗಳು ಕೂಡ ಹೆಚ್ಚಾಗುತ್ತಿವೆ. ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗುವುದು. ಆರ್‌ಸಿ ಪರವಾನಗಿ ಮತ್ತು ಚಾಲನಾ ಪರವಾನಗಿ ರದ್ಧತಿಗಾಗಿ ಪ್ರಾದೇಶಿಕ ಸಾರಿಗೆ ಇಲಾಖೆಗೆ ಶಿಫಾರಸು ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕವಿತಾ ಎಸ್‌. ಮನ್ನಿಕೇರಿ, ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ಜಿ. ರಜಪೂತ, ಯಾದಗಿರಿ ಡಿವೈಎಸ್‌ಪಿ ಯು. ಶರಣಪ್ಪ, ಸುರಪುರ ಡಿವೈಎಸ್‌ಪಿ ಶಿವನಗೌಡ ಪಾಟೀಲ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಸಂತೋಷ ಗೋಗೇರಿ, ಪೌರಾಯುಕ್ತ ರಮೇಶ ಸುಣಗಾರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಉಪವಿಭಾಗದ ಎಇಇ ಸಿದ್ದಲಿಂಗಪ್ಪ ಐರೆಡ್ಡಿ, ಕಾರ್ಮಿಕ ಇಲಾಖೆಯ ಯಾದಗಿರಿ ವೃತ್ತ ನಿರೀಕ್ಷಕ ಶಿವಶಂಕರ ಬಿ. ತಳವಾರ, ಜಿಲ್ಲಾ ಬಾಲ ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಘುವೀರಸಿಂಗ್‌ ಠಾಕೂರ್‌ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ರಸ್ತೆ ಸುರಕ್ಷತಾ ಅಧಿಕಾರಿ ನೇಮಕ
ಜಿಲ್ಲೆಯಲ್ಲಿ ಆಟೋರಿಕ್ಷಾ, ಕ್ಯಾಬ್‌ಗಳಲ್ಲಿ ಆಸನ ಸಾಮರ್ಥ್ಯಕ್ಕಿಂತ ಹೆಚ್ಚಿಗೆ ಶಾಲಾ ಮಕ್ಕಳನ್ನು ಸಾಗಿಸುತ್ತಿರುವ ಬಗ್ಗೆ ಆರೋಪಗಳಿವೆ. ಇದನ್ನು ತಡೆಗಟ್ಟಲು ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರನ್ನು ರಸ್ತೆ ಸುರಕ್ಷತಾ ಅಧಿಕಾರಿಗಳನ್ನಾಗಿ ನೇಮಕ ಮಾಡಬೇಕು. ವಾಹನಗಳಲ್ಲಿ ಹೆಚ್ಚಿನ ಮಕ್ಕಳನ್ನು ಶಾಲೆಗೆ ಕರೆ ತಂದಾಗ ಸಂಬಂಧಪಟ್ಟ ವಾಹನ ಚಾಲಕರು/ ಮಾಲೀಕರಿಗೆ ಎಚ್ಚರಿಕೆ ನೀಡಬೇಕು. ಸುರಕ್ಷತಾ ಅಧಿಕಾರಿ ನೇಮಕದ ಬಗ್ಗೆ ಶಿಕ್ಷಣ ಇಲಾಖೆಯಿಂದ ಕ್ರಮ ವಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶ್ರೀಶೈಲ ಬಿರಾದಾರಗೆ ಜಿಲ್ಲಾಧಿಕಾರಿ ನಿರ್ದೇಶಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next