Advertisement

ಪ್ರತಿಭೆ ಪ್ರೋತ್ಸಾಹಿಸಲು ಸಲಹೆ

04:43 PM Dec 27, 2019 | Naveen |

ಯಾದಗಿರಿ: ಗ್ರಾಮೀಣ ಕ್ರೀಡೆಗಳು ಹಾಗೂ ವಿವಿಧ ಕಲಾ ಚಟುವಟಿಕೆಗಳು ದೇಶದ ಸಂಸ್ಕೃತಿಯ ಪ್ರತೀಕವಾಗಿವೆ. ಯುವ ಜನರಲ್ಲಿ ಸುಪ್ತವಾಗಿರುವ ಕಲಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಯುವ ಜನೋತ್ಸವದಂತಹ ಕಾರ್ಯಕ್ರಮ ಪ್ರೇರಣೆಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ್‌ ಹೇಳಿದರು.

Advertisement

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚೆಗೆ ಗ್ರಾಮೀಣ ಕ್ರೀಡೆಗಳು ಮತ್ತು ಕಲೆಗಳು ಮರೆಯಾಗುತ್ತಿವೆ. ಇವುಗಳನ್ನು ಬೆಳೆಸುವುದು ಇಂದಿನ ಅಗತ್ಯವಾಗಿದೆ. ಯುವಜನೋತ್ಸವ ಕಾರ್ಯಕ್ರಮಗಳಿಂದ ಯುವಕರಲ್ಲಿನ ಪ್ರತಿಭೆಗಳು ಹೊರಬರಲಿ, ಇಂತಹ ಕಾರ್ಯಕ್ರಮ ನೆಪ ಮಾತ್ರಕ್ಕೆ ಆಯೋಜಿಸದೆ ಯುವ ಜನರ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸುವ ಕಾರ್ಯಕ್ರಮವಾಗಬೇಕು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮಲ್ಲಿರುವ ಪ್ರತಿಭೆ ಪ್ರದರ್ಶಿಸಿ, ರಾಜ್ಯಮಟ್ಟದಲ್ಲಿ ಜಿಲ್ಲೆಯ ಹೆಸರು ತರುವ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಟಿ.ಎನ್‌.ಭೀಮುನಾಯಕ ಮಾತನಾಡಿ, ರಾಜ್ಯದಲ್ಲಿ ಯಾದಗಿರಿ ಜಿಲ್ಲೆಯು ಹಿಂದುಳಿದ ಜಿಲ್ಲೆಯೆಂದು ಬಿಂಬಿಸಿಕೊಂಡಿದೆ. ಯುವ ಜನೋತ್ಸವದಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜಿಲ್ಲೆಯ ಯುವ ಜನರ ಕಲಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಬೇಕು. ಈ ದೇಶದ ಭವಿಷ್ಯ ಯುವ ಜನರ ಮೇಲಿದೆ. ಅಂತಹ ಯುವಕರಲ್ಲಿರುವ ಪ್ರತಿಭೆಗಳನ್ನು ಗುರುತಿಸುವ ಕಾರ್ಯವಾಗಬೇಕು ಎಂದು ಹೇಳಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಚನ್ನಬಸಪ್ಪ ಕುಳಗೇರಿ ಮಾತನಾಡಿದರು. ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಮನೋಹರ್‌, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಹಣಮಂತ, ಕ್ರೀಡಾ ಇಲಾಖೆಯ ಅಧೀಕ್ಷಕ ಗೋವಿಂದಪ್ಪ ಜಿ. ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next