ಯಾದಗಿರಿ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರನ್ನು ನೋಂದಾಯಿಸುವ ಪ್ರಕ್ರಿಯೆಯನ್ನು ಎರಡು-ಮೂರು ದಿನಗಳಲ್ಲಿ ಪೂರ್ಣಗೊಳಿಸಬೇಕು. ತಾಲೂಕಿನ ಯಾವುದೇ ಅರ್ಹ ರೈತರು ಈ ಯೋಜನೆಯಿಂದ ವಂಚಿತರಾಗದಂತೆ ಕ್ರಮ ವಹಿಸುವ ಮೂಲಕ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ. ರಜಪೂತ ಸೂಚಿಸಿದರು.
ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅನುಷ್ಠಾನ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಂದಾಯ, ಗ್ರಾಮೀಣಾಭಿವೃದ್ಧಿ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು. ಯೋಜನೆ ಬಗ್ಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹೆಚ್ಚಿನ ಪ್ರಚಾರ ನೀಡಬೇಕು. ರೈತರಿಂದ ಸರ್ವೇ ನಂಬರ್, ಆಧಾರ್ ಕಾರ್ಡ್, ಆಧಾರ್ ಸಂಖ್ಯೆ ಜೋಡಣೆ ಮಾಡಿದ ಬ್ಯಾಂಕ್ ಪಾಸ್‌ಬುಕ್ ನಕಲು ಪ್ರತಿಗಳೊಂದಿಗೆ ಸ್ವಯಂಘೋಷಣಾ ಪತ್ರ ಪಡೆದು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬೇಕು ಎಂದು ನಿರ್ದೇಶಿಸಿದರು.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ಪ್ರತಿ ರೈತ ಕುಟುಂಬಕ್ಕೆ ಒಂದು ವರ್ಷಕ್ಕೆ 6000 ರೂ.ಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆಯಂತೆ ಒಟ್ಟು 3 ಸಮಾನ ಕಂತುಗಳಲ್ಲಿ ನೀಡಲಾಗುತ್ತದೆ. ಎರಡನೆಯ ಮತ್ತು ಮೂರನೆಯ ಕಂತುಗಳಿಗೆ ರೈತರಿಂದ ಪದೇ ಪದೇ ಮಾಹಿತಿ ಸಂಗ್ರಹಿಸುವ ಅಗತ್ಯ ಇರುವುದಿಲ್ಲ. ಆಧಾರ್ ಸಂಖ್ಯೆ ಜೋಡಣೆ ಮಾಡಿದ ಅವರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಆಗುತ್ತದೆ ಎಂದು ಮಾಹಿತಿ ನೀಡಿದರು.
ಕುಟುಂಬದ ಒಬ್ಬರು ಮಾತ್ರ ಈ ಯೋಜನೆಗೆ ಅರ್ಹರು. ರೈತರ ಹೆಸರಿನಲ್ಲಿ ಎಷ್ಟೇ ಜಮೀನು/ ಸರ್ವೇ ನಂಬರ್ ಇದ್ದರೂ ಒಂದೇ ಅರ್ಜಿಯನ್ನು ಪರಿಗಣಿಸಲಾಗುತ್ತದೆ. ನಿವೃತ್ತಿ ಅಥವಾ ಹಾಲಿ ಸೇವೆಯಲ್ಲಿರುವ ಸರ್ಕಾರಿ ನೌಕರರು (ಗ್ರೂಪ್ ಡಿ ಹೊರತುಪಡಿಸಿ), ಪ್ರತಿ ಮಾಹೆಯಾನ 10 ಸಾವಿರ ರೂ.ಗಿಂತ ಹೆಚ್ಚಿನ ಮೊತ್ತ ಪಡೆಯುತ್ತಿರುವ ಪಿಂಚಣಿದಾರರು, ಆದಾಯ ತೆರಿಗೆ ಪಾವತಿದಾರರು, ವೃತ್ತಿಪರರು (ವೈದ್ಯರು, ಅಭಿಯಂತರರು, ವಕೀಲರು ಮತ್ತು ಇತರೆ), ಮಾಜಿ ಮತ್ತು ಹಾಲಿ ಸಾಂವಿಧಾನಿಕ ಹುದ್ದೆ ಹೊಂದಿದವರು ಈ ಯೋಜನೆಗೆ ಅರ್ಹರಲ್ಲ ಎಂದು ವಿವರಿಸಿದರು.
ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಸಹಾಯಕ ಕೃಷಿ ನಿರ್ದೇಶಕ ಧೂಳಪ್ಪ, ಗುರುಮಠಕಲ್ ತಹಶೀಲ್ದಾರ್ ಶ್ರೀಧರಾಚಾರ್ಯ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.