Advertisement

ಕುಷ್ಠ ರೋಗ ಪತ್ತೆಗೆ 847 ತಂಡ ರಚನೆ

01:17 PM Oct 17, 2019 | Naveen |

ಯಾದಗಿರಿ: ಸ್ಪರ್ಶ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಅಂಗವಾಗಿ ಜಿಲ್ಲಾದ್ಯಂತ ನ. 11ರಿಂದ 28ರವರೆಗೆ ಹಮ್ಮಿಕೊಂಡಿರುವ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ ಯಶಸ್ವಿಗೊಳಿಸುವ ಮೂಲಕ ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಶ್ರಮಿಸಬೇಕು ಎಂದು ಜಿಲ್ಲಾ ಧಿಕಾರಿ ಎಂ. ಕೂರ್ಮಾರಾವ್‌ ಸೂಚಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ ಅಂಗವಾಗಿ ಹಮ್ಮಿಕೊಂಡಿದ್ದ ಜಿಲ್ಲಾ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮ ಆಯೋಜಿಸಿ ಸಾರ್ವಜನಿಕರಿಗೆ ತಿಳಿವಳಿಕೆ ನೀಡಬೇಕು. ಶಾಲಾ-ಕಾಲೇಜುಗಳಲ್ಲಿ ಸ್ಪರ್ಶ ಕುಷ್ಠರೋಗ ಕುರಿತು ಜಾಗೃತಿ ಮೂಡಿಸಬೇಕು. ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಆಂದೋಲನ ಅವ ಧಿಯಲ್ಲಿ ಮನೆ ಮನೆಗೆ ಭೇಟಿ ನೀಡಿ, ರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ರೋಗಿಗಳನ್ನು ಪತ್ತೆಹಚ್ಚಿ ಅವರಿಗೆ ಚಿಕಿತ್ಸೆ ಕೊಡಿಸಬೇಕು ಎಂದು ನಿರ್ದೇಶಿಸಿದರು.

ನವೆಂಬರ್‌ 10ರಂದು ಪೂರ್ವಭಾವಿಯಾಗಿ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ ಬಗ್ಗೆ ಪ್ರತಿಯೊಂದು ತಂಡದವರು ತಮ್ಮ ತಮ್ಮ ಗ್ರಾಮದಲ್ಲಿ ಸಮುದಾಯದ ಸಭೆ ನಡೆಸಬೇಕು. ತಾಲೂಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಮಟ್ಟದಲ್ಲಿ ತರಬೇತಿಯನ್ನು ನಡೆಸಲು ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಭಗವಂತ ಅನವಾರ ಮಾತನಾಡಿ, ಜಿಲ್ಲೆಯಲ್ಲಿ ಪ್ರಸ್ತುತ ಸಾಲಿನಲ್ಲಿ 43 ಜನ ಕುಷ್ಠರೋಗದ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ 27 ಜನ ಗುಣಮುಖ ಹೊಂದಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 2,32,605 ಮನೆಗಳಿದ್ದು, ಕುಷ್ಠರೋಗ ಪತ್ತೆಗಾಗಿ ಒಟ್ಟು 847 ತಂಡಗಳನ್ನು ರಚಿಸಲಾಗಿದೆ. ಪ್ರತಿಯೊಂದು ತಂಡದಲ್ಲಿ ಒಬ್ಬ ಆಶಾ ಕಾರ್ಯಕರ್ತೆ, ಮತ್ತೂಬ್ಬರು ವಾಲೆಂಟ್ರಿ ಇರುತ್ತಾರೆ. ಪ್ರತಿ 5 ತಂಡಕ್ಕೆ ಒಬ್ಬರು ಮೇಲ್ವಿಚಾರಕರಂತೆ ಒಟ್ಟು 168 ಮೇಲ್ವಿಚಾರಕರು ಇರುವರೆಂದು ತಿಳಿಸಿದರು.

ಆಂದೋಲನ ಅಂಗವಾಗಿ ಕುಷ್ಠರೋಗದ ಕುರಿತು ಜಾಗೃತಿ ಮೂಡಿಸುವ ಭಿತ್ತಿಪತ್ರವನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಯಾದಗಿರಿ ಡಿವೈಎಸ್‌ಪಿ ಯು. ಶರಣಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ನಾರಾಯಣಪ್ಪ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ|ಸೂರ್ಯಪ್ರಕಾಶ ಎಂ. ಕಂದಕೂರ, ನಗರಸಭೆ ಪೌರಾಯುಕ್ತ ರಮೇಶ ಸುಣಗಾರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿರಾದಾರ ಶಂಕರ, ಜಿಲ್ಲಾ ಸಮನ್ವಯ ಸಮಿತಿ ಸದಸ್ಯ ರಾಯಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next