Advertisement

ಲಿಂಗ ಆಯ್ಕೆ ನಿಷೇಧ ಕಾಯ್ದೆ ಪರಿಣಾಮಕಾರಿ ಅನುಷ್ಠಾನಗೊಳಿಸಲು ಸೂಚನೆ

05:34 PM May 04, 2019 | Naveen |

ಯಾದಗಿರಿ: ಲಿಂಗ ಆಯ್ಕೆ ನಿಷೇಧ ಅಧಿನಿಯಮ-1994 ಕಾಯ್ದೆ (ಪಿಸಿ ಆ್ಯಂಡ್‌ ಪಿಎನ್‌ಡಿಟಿ ಕಾಯ್ದೆ) ಅನ್ವಯ ಗರ್ಭಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆ ಮಾಡುವುದು ಅಪರಾಧವಾಗಿದೆ. ಜಿಲ್ಲೆಯಾದ್ಯಂತ ಈ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಸೂಚಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಪಿಸಿ ಆ್ಯಂಡ್‌ ಪಿಎನ್‌ಡಿಟಿ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತೆಲಂಗಾಣ ರಾಜ್ಯಕ್ಕೆ ಹೊಂದಿಕೊಂಡಿರುವ ಬೀದರ್‌, ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಸೇರಿದಂತೆ ರಾಜ್ಯದ ಗಡಿ ಜಿಲ್ಲೆಗಳ ಸ್ಕಾ ್ಯನಿಂಗ್‌ ಸೆಂಟರ್‌ಗಳಿಗೆ ಹೊರ ರಾಜ್ಯಗಳಿಂದ ಅಕ್ರಮವಾಗಿ ವೈದ್ಯರು, ಸ್ಕಾ ್ಯನಿಂಗ್‌ ಸೆಂಟರ್‌, ಗರ್ಭಿಣಿಯರ ಸಂಬಂಧಿಕರು ಅಥವಾ ದಲ್ಲಾಳಿಗಳ ಮುಖಾಂತರ ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಮಾಡುತ್ತಿರುವುದು ಕಂಡು ಬಂದಿದೆ. ಇದರಿಂದಾಗಿ ಕರ್ನಾಟಕ ರಾಜ್ಯದ ಗಡಿಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಹೆಣ್ಣು ಮಕ್ಕಳ ಲಿಂಗಾನುಪಾತ ಕಡಿಮೆಯಾಗುತ್ತಿದ್ದು, ಸಮಾಜದ ಸ್ವಾಸ್ಥ ್ಯ ಹದಗೆಡುತ್ತಿದೆ ಎಂಬುದಾಗಿ ರಾಜ್ಯ ಸಕ್ಷಮ ಪ್ರಾಧಿಕಾರ ಹಾಗೂ ಪಿಸಿ ಆ್ಯಂಡ್‌ ಪಿಎನ್‌ಡಿಟಿ ಕೋಶದಿಂದ ಪತ್ರ ಬಂದಿದೆ. ಈ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ಗಡಿಭಾಗದಲ್ಲಿ ಇಂತಹ ಅಕ್ರಮ ಚಟುವಟಿಕೆ ನಡೆಯದಂತೆ ಸೂಕ್ತ ಕ್ರಮ ವಹಿಸುವ ಅಗತ್ಯವಿದೆ ಎಂದು ತಿಳಿಸಿದರು.

ಜನೇಟಿಕ್‌ ಕೌನ್ಸೆಲಿಂಗ್‌ ಕೇಂದ್ರ, ಜನೇಟಿಕ್‌ ಪ್ರಯೋಗಾಲಯ, ಜನೇಟಿಕ್‌ ಕ್ಲಿನಿಕ್‌ಗಳು ಪಿಸಿ ಆ್ಯಂಡ್‌ ಪಿಎನ್‌ಡಿಟಿ ಕಾಯ್ದೆಯನ್ನು ಉಲ್ಲಂಘನೆ ಮಾಡುವಂತಿಲ್ಲ. ಉಲ್ಲಂಘನೆ ಮಾಡಿದಲ್ಲಿ ಜಿಲ್ಲಾ ಮಟ್ಟದ ಪ್ರಾಧಿಕಾರವು ಅವುಗಳ ಮಾನ್ಯತೆಯನ್ನು ರದ್ದುಗೊಳಿಸಬಹುದು. ಒಂದು ವೇಳೆ ಲಿಂಗ ಪತ್ತೆ ಮಾಡಿದಲ್ಲಿ ಅಪರಾಗಳಿಗೆ ಕಠಿಣ ಶಿಕ್ಷೆ ವಿಧಿಸಲು ಅವಕಾಶ ಇದೆ ಎಂದು ತಿಳಿಸಿದ ಜಿಲ್ಲಾಧಿಕಾರಿಗಳು, ಭ್ರೂಣ ಲಿಂಗ ಪತ್ತೆ ಮಾಡಿಸುವ ಜನರ ಬಗ್ಗೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಹಿತಿ ಇರುತ್ತದೆ. ಇವರಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.

ಜಿಲ್ಲೆಯ ಲಿಂಗಾನುಪಾತ ಸಾವಿರ ಪುರುಷರಿಗೆ 987 ಮಹಿಳೆಯರಿದ್ದಾರೆ. ಮಹಿಳೆಯರು ಕೂಡ ಸಮಾಜದಲ್ಲಿ ಸಮಾನತೆಯಿಂದ ಬದುಕುವ ಹಕ್ಕು ಇದೆ. ಮಹಿಳೆಯರ ಸಂಖ್ಯೆ ಕಡಿಮೆಯಾಗಲು ಪ್ರಮುಖ ಕಾರಣವಾಗಿರುವ ಹೆಣ್ಣುಭ್ರೂಣ ಹತ್ಯೆ ತಡೆಯುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಹಾಗಾಗಿ, ಗರ್ಭಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆ ಮಾಡಿದಲ್ಲಿ ಕಠಿಣ ಶಿಕ್ಷೆ ಇರುವ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಸಭೆ-ಸಮಾರಂಭಗಳಲ್ಲಿ ಈ ಬಗ್ಗೆ ತಿಳಿವಳಿಕೆ ನೀಡಬೇಕು ಎಂದು ಸಲಹೆ ನೀಡಿದರು.

Advertisement

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಸಂತ ವಿ. ಕುಲಕರ್ಣಿ, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಹಬೀಬ ಉಸ್ಮಾನ್‌ ಪಟೇಲ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಸಂಜೀವಕುಮಾರ್‌ ರಾಯಚೂರಕರ್‌, ಜಿಲ್ಲಾ ಆರ್‌ಸಿಎಚ್ ಅಧಿಕಾರಿಗಳಾದ ಡಾ| ಲಕ್ಷ್ಮೀಕಾಂತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಪ್ರಭಾಕರ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ| ಎಸ್‌.ಬಿ.ಪಾಟೀಲ್, ಡಾ| ಸಂತೋಷ ರೆಡ್ಡಿ, ಡಾ| ಸುರೇಶರೆಡ್ಡಿ, ವೀಣಾ ಮೋದಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿರಾದಾರ ಶಂಕರ, ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ| ಹಣಮಂತರೆಡ್ಡಿ, ಡಾ| ರಮೇಶ, ನಾಗಣ್ಣ ವೆಂಕಟಾಪುರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next