Advertisement

ಬ್ಯಾಂಕ್‌ ಸಿಬ್ಬಂದಿ ಸೌಜನ್ಯದಿಂದ ವರ್ತಿಸಲಿ

11:02 AM Jul 05, 2019 | Naveen |

ಯಾದಗಿರಿ: ವಾಣಿಜ್ಯ ಬ್ಯಾಂಕ್‌ಗಳಲ್ಲಿ ಸಾಲ ಪಡೆದ ರೈತರೊಂದಿಗೆ ಬ್ಯಾಂಕ್‌ ಸಿಬ್ಬಂದಿ ಸೌಜನ್ಯದಿಂದ ವರ್ತಿಸಬೇಕು ಹಾಗೂ ಸರ್ಕಾರದ ಸಾಲಮನ್ನಾ ಕುರಿತು ಜಾಗೃತಿ ಮೂಡಿಸಲು ಸೂಚಿಸುವಂತೆ ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕರಿಗೆ ವಿಧಾನ ಪರಿಷತ್‌ ಸದಸ್ಯ ಹಾಗೂ ಕಂದಾಯ ಖಾತೆ ಸಚಿವರ ಸಂಸದೀಯ ಕಾರ್ಯದರ್ಶಿ ಐವಾನ್‌ ಡಿಸೋಜಾ ನಿರ್ದೇಶಿಸಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಕಂದಾಯ ಇಲಾಖೆ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ, ತಹಶೀಲ್ದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ನಿಯಮಿತವಾಗಿ ಕಂದಾಯ ಮತ್ತು ಪಿಂಚಣಿ ಅದಾಲತ್‌ ನಡೆಸಬೇಕು. ಜಿಲ್ಲೆಯ ಕಂದಾಯ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಪಹಣಿ ತಿದ್ದುಪಡಿ ಪ್ರಕರಣಗಳಿಗೆ ಸಂಬಂಧಿಸಿದಂತೆ ತಹಶೀಲ್ದಾರರು ಮುತುವರ್ಜಿ ವಹಿಸಿ ವಿಲೇವಾರಿ ಮಾಡಬೇಕು. ಜಿಲ್ಲಾಧಿಕಾರಿಗಳು, ಸಹಾಯಕ ಆಯುಕ್ತರು ಹಾಗೂ ತಹಶೀಲ್ದಾರ್‌ ಹಂತಗಳಲ್ಲಿನ ನ್ಯಾಯಾಲಯ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಬೇಕು. ಸರ್ಕಾರದ ಯೋಜನೆಗಳಿಗೆ ಹೆಚ್ಚಿನ ಪ್ರಚಾರ ನೀಡಿ ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಮಾತನಾಡಿ, ವಾಣಿಜ್ಯ ಬ್ಯಾಂಕ್‌ಗಳ ರೈತರ ಬೆಳೆಸಾಲ ಮನ್ನಾಗೆ ಸಂಬಂಧಿಸಿದಂತೆ ಜಿಲ್ಲೆಯ 69,965 ಲೋನ್‌ಗಳು ಅರ್ಹ ಇದ್ದು, ಲೋನ್‌ಗಳ ಒಟ್ಟು ಮೊತ್ತ 350.30 ಕೋಟಿ ರೂ. ಆಗುತ್ತದೆ. ಈ ಪೈಕಿ 224.46 ಕೋಟಿ ರೂ. ಬಿಡುಗಡೆಯಾಗಿದೆ. ಇನ್ನೂ 125.84 ಕೋಟಿ ರೂ. ಬಿಡುಗಡೆಗೆ ಬಾಕಿ ಇದೆ. ಸಹಕಾರ ಬ್ಯಾಂಕ್‌ಗಳ ರೈತರ ಬೆಳೆ ಸಾಲಮನ್ನಾಗೆ ಸಂಬಂಧಿಸಿದಂತೆ ಜಿಲ್ಲೆಯ 13,944 ಲೋನ್‌ಗಳು ಅರ್ಹ ಇದ್ದು, ಲೋನ್‌ಗಳ ಒಟ್ಟು ಮೊತ್ತ 30.41 ಕೋಟಿ ರೂ. ಆಗುತ್ತದೆ. ಈ ಪೈಕಿ 10.89 ಕೋಟಿ ರೂ. ಬಿಡುಗಡೆಯಾಗಿದ್ದು, ಇನ್ನೂ 19.52 ಕೋಟಿ ರೂ. ಬಿಡುಗಡೆಗೆ ಬಾಕಿ ಇದೆ ಎಂದು ವಿವರಿಸಿದರು.

ಸಹಕಾರ ಸಂಘಗಳ ಉಪ ನಿಬಂಧಕ ವಿಶ್ವನಾಥ ಮಲಕೂಡ ಮಾತನಾಡಿ, ಇತ್ತೀಚೆಗೆ ಜಿಲ್ಲೆಯ ಗ್ರಾಮ ವಾಸ್ತವ್ಯದ ಜನತಾದರ್ಶನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಭರವಸೆ ನೀಡಿದಂತೆ ರೈತರಿಗೆ ಹೊಸ ಬೆಳೆ ಸಾಲ ನೀಡಲು ಅಪೆಕ್ಸ್‌ ಬ್ಯಾಂಕ್‌ನಿಂದ ಡಿಸಿಸಿ ಬ್ಯಾಂಕ್‌ಗೆ 50 ಕೋಟಿ ರೂ. ಸಾಲ ಕೊಡಿಸಿದ್ದಾರೆ ಎಂದು ಹೇಳಿದರು. ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಒಟ್ಟು 131 ಕಂದಾಯ ಅದಾಲತ್‌ ನಡೆಸಲಾಗಿದೆ. 5167 ಅರ್ಜಿಗಳು ಬಂದಿದ್ದವು. ಈ ಪೈಕಿ 5,110 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು, 57 ಅರ್ಜಿಗಳು ಬಾಕಿ ಇವೆ ಎಂದು ಜಿಲ್ಲಾಧಿಕಾರಿಗಳು ವಿವರಿಸಿದರು. ಸಹಾಯಕ ಆಯುಕ್ತ ಶಂಕರಗೌಡ ಎಸ್‌. ಸೋಮನಾಳ ಮಾತನಾಡಿ, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ನೂತನ ಮೂರು ತಾಲೂಕುಗಳು ಸೇರಿದಂತೆ ಆರೂ ತಾಲೂಕುಗಳಲ್ಲಿ ಒಟ್ಟು 27 ಪಿಂಚಣಿ ಅದಾಲತ್‌ ನಡೆಸಲಾಗಿದ್ದು, 312 ಅರ್ಜಿಗಳು ಬಂದಿದ್ದವು. ಬಂದ ಎಲ್ಲ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

Advertisement

ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಅರುಣಕುಮಾರ ಕುಲಕರ್ಣಿ ಮಾತನಾಡಿ, ಸಾಮಾಜಿಕ ಭದ್ರತೆ ಯೋಜನೆಗಳಾದ ವೃದ್ಧಾಪ್ಯ ವೇತನ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 1286 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು, 355 ಬಾಕಿ ಇವೆ. ಸಂಧ್ಯಾ ಸುರಕ್ಷಾ ಯೋಜನೆಯಡಿ 2567 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು, 352 ಅರ್ಜಿಗಳು ಬಾಕಿ ಇವೆ. ನಿರ್ಗತಿಕ ವಿಧವಾ ವೇತನದ 883 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು, 283 ಅರ್ಜಿಗಳು ಬಾಕಿ ಇವೆ. ಅಂಗವಿಕಲರ 670 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು, 123 ಬಾಕಿ ಇವೆ. ಮನಸ್ವಿನಿ ಯೋಜನೆಯ 109 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು, 33 ಬಾಕಿ ಇವೆ ಎಂದು ವಿವರಿಸಿದರು.

ಜಿಲ್ಲೆಯಲ್ಲಿ ಅಂತ್ಯೋದಯ ಅನ್ನ ಯೋಜನೆಯ 27,038 ಪಡಿತರ ಚೀಟಿ, 2,25,280 ಬಿಪಿಎಲ್ ಹಾಗೂ 7,428 ಎಪಿಎಲ್ ಪಡಿತರ ಚೀಟಿಗಳಿವೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ದತ್ತಪ್ಪ ಕಲ್ಲೂರ್‌ ಮಾಹಿತಿ ನೀಡಿದರು.

ನಂತರ ವಿಧಾನ ಪರಿಷತ್‌ ಸದಸ್ಯರು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯೋಜನೆಗಳ ಪ್ರಗತಿ ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ಪಿಂಚಣಿ ಅದಾಲತ್‌ ಮೂಲಕ ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಫಲಾನುಭವಿಗಳಿಗೆ ಮಾಸಾಶನಗಳ ಮಂಜೂರಾತಿ ಆದೇಶ ವಿತರಿಸಿದರು.

ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ಜಿ.ರಜಪೂತ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪೂರ್ಣಿಮಾ ಚೂರಿ ಹಾಗೂ ತಹಶೀಲ್ದಾರರು ಸಭೆಯಲ್ಲಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next