ಯಾದಗಿರಿ: ಜಿಲ್ಲೆಯಲ್ಲಿ ಪ್ರವಾಹದಿಂದ ಉಂಟಾದ ರಸ್ತೆ ಮತ್ತು ಸೇತುವೆಗಳ ದುರಸ್ತಿ ಕಾಮಗಾರಿಗಳಿಗೆ ಶೀಘ್ರ ಟೆಂಡರ್ ಕರೆದು ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ. ಅನಿಲಕುಮಾರ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ಅನುದಾನ ಬಿಡುಗಡೆ: ನೈಸರ್ಗಿಕ ವಿಕೋಪದಿಂದ ಹಾನಿಗೊಳಗಾದ ಕಾಮಗಾರಿಗಳಿಗಾಗಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗಕ್ಕೆ ಅಂದಾಜು 29 ಕೋಟಿ ರೂ., ಲೋಕೋಪಯೋಗಿ ಇಲಾಖೆಗೆ 9.60 ಕೋಟಿ ರೂ. ಅನುದಾನ ಹಂಚಿಕೆಯಾಗಿದ್ದು, ಅನುದಾನ ಕೂಡ ಬಿಡುಗಡೆಯಾಗಿದೆ. ಕೈಗೊಂಡ ಒಟ್ಟು 237 ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕೆಂದು ತಾಕೀತು ಮಾಡಿದರು.
ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಒಟ್ಟು 220 ಕಾಮಗಾರಿಗಳ ಪೈಕಿ 175 ಕಾಮಗಾರಿಗಳ ಅಂದಾಜು ಪಟ್ಟಿಗಳನ್ನು ಆಡಳಿತಾತ್ಮಕ ಅನುಮೋದನೆಗಾಗಿ ಜಿಪಂಗೆ ಸಲ್ಲಿಸಲಾಗಿದೆ. 45 ಕಾಮಗಾರಿಗಳ ಅಂದಾಜು ಪಟ್ಟಿ ತಯಾರಿಸುವ ಹಂತದಲ್ಲಿದೆ. ಲೋಕೋಪಯೋಗಿ ಇಲಾಖೆ ಒಟ್ಟು 17 ಕಾಮಗಾರಿಗಳಲ್ಲಿ 7 ಪೂರ್ಣಗೊಂಡಿದ್ದು, 10 ಪ್ರಗತಿ ಹಂತದಲ್ಲಿವೆ ಎಂಬುದಾಗಿ ಸಂಬಂಧಪಟ್ಟ ಇಲಾಖೆಗಳ ಇಂಜಿನಿಯರರು ಮಾಹಿತಿ ನೀಡಿದರು.
ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಜನರ ಗುಳೆ ತಪ್ಪಿಸಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅನುಷ್ಠಾನಗೊಳಿಸಿ, ಪ್ರತಿಶತ ಗುರಿ ಸಾಧಿಸಬೇಕು. ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಬೇಕು. ಕುಡಿಯುವ ನೀರು ಪೂರೈಸುವುದಕ್ಕೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
ಹೂಳೆತ್ತುವ ಕಾರ್ಯಕ್ಕೆ ಶೀಘ್ರ ಚಾಲನೆ: ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಮಾತನಾಡಿ, ಮಹತ್ವಾಕಾಂಕ್ಷೆ ಜಿಲ್ಲೆ ಯೋಜನೆಯಡಿ ಕಳೆದ ಸಾಲಿನಲ್ಲಿ ಕೈಗೊಂಡಿದ್ದ ಕೆರೆಗಳ ಹೂಳೆತ್ತುವ ಯೋಜನೆಗೆ ರೈತರಿಂದ ಹೆಚ್ಚಿನ ಬೇಡಿಕೆ ಇದೆ. ಹಾಗಾಗಿ, ಪ್ರಸಕ್ತ ಸಾಲಿನಲ್ಲಿ ಕೆರೆಗಳ ಹೂಳೆತ್ತುವ ಕಾರ್ಯಕ್ಕೆ ಶೀಘ್ರದಲ್ಲಿಯೇ ಚಾಲನೆ ನೀಡಲಾಗುವುದು. ಕೆರೆಗಳ ಹೂಳೆತ್ತುವ ಜೊತೆಗೆ ನಾಲೆಗಳ ಹೂಳು ಕೂಡ ತೆಗೆಯಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿ ಕಾರಿ ಪ್ರಕಾಶ್ ಜಿ. ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್. ಸೋಮನಾಳ, ಜಂಟಿ ಕೃಷಿ ನಿರ್ದೇಶಕರಾದ ಆರ್.ದೇವಿಕಾ, ಭಾರತೀಯ ಜೈನ ಸಂಘಟನೆ ಜಿಲ್ಲಾ ಸಂಯೋಜಕರಾದ ರಾಜೇಶ್ ಜೈನ್, ಸಂಘಟನೆ ಜಿಲ್ಲಾಧ್ಯಕ್ಷ ಅಜೀತ್ ದೋಖಾ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.