Advertisement

ಟ್ಯಾಂಕರ್‌ ಮಾಲೀಕರಿಗೆ ಹಣ ಪಾವತಿಸಿ

11:02 AM Jul 04, 2019 | Team Udayavani |

ಯಾದಗಿರಿ: ಸಾರ್ವಜನಿಕರಿಗೆ ಕುಡಿಯುವ ನೀರಿನ ಅಭಾವ ಇರುವ ಗ್ರಾಮಗಳಲ್ಲಿ ಖಾಸಗಿ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡಿದ ಮಾಲೀಕರಿಗೆ ಬಾಕಿ ಇರುವ ಹಣವನ್ನು ತಕ್ಷಣ ಪಾವತಿಸಬೇಕು ಎಂದು ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ತಹಶೀಲ್ದಾರ್‌ಗೆ ಸೂಚಿಸಿದರು.

Advertisement

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಕುಡಿಯುವ ನೀರನ್ನು ಟ್ಯಾಂಕರ್‌ ಮೂಲಕ ಪೂರೈಕೆ ಮಾಡುವ ಅಧಿಕಾರವನ್ನು ಆಯಾ ತಾಲೂಕಿನ ತಹಶೀಲ್ದಾರ್‌ಗಳಿಗೆ ಸರ್ಕಾರ ನೀಡಿದೆ. ಆದರೆ, ಸಾಕಷ್ಟು ಹಣ ಇದ್ದರೂ ಖಾಸಗಿ ಟ್ಯಾಂಕರ್‌ ಮಾಲೀಕರಿಗೆ ನಿಗದಿತ ಸಮಯಕ್ಕೆ ಏಕೆ ಹಣ ಪಾವತಿಸುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.

ಜಿಲ್ಲಾಧಿಕಾರಿ ಪಿಡಿ ಖಾತೆಯಲ್ಲಿ ಕುಡಿಯುವ ನೀರಿಗಾಗಿ 11 ಕೋಟಿ ರೂ. ಇದೆ. ಕುಡಿಯುವ ನೀರಿಗಾಗಿ ಸರ್ಕಾರ ಹೆಚ್ಚಿನ ಅನುದಾನ ನೀಡಲು ಸಿದ್ಧವಿದೆ. ಆದರೆ, ತಹಶೀಲ್ದಾರ್‌ಗಳು ಖಾಸಗಿ ಟ್ಯಾಂಕರ್‌ ಮಾಲೀಕರಿಗೆ ಸರಿಯಾದ ಸಮಯಕ್ಕೆ ಹಣ ನೀಡಲು ವಿಳಂಬ ಮಾಡಿರುವುದು ಕಂಡು ಬಂದಿದೆ. ಇನ್ನು ಮುಂದೆ ಏಳು ದಿನಗಳೊಳಗಾಗಿ ಅವರಿಗೆ ಹಣ ಪಾವತಿಸಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು. ಈ ಸಂಬಂಧ ಪ್ರತಿ ತಾಲೂಕಿಗೆ 30 ಲಕ್ಷ ರೂ. ನಾಳೆಯೇ ಬಿಡುಗಡೆ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಕುಡಿಯುವ ನೀರು ಮತ್ತು ಮೇವಿನ ಸಂಬಂಧ ತಹಶೀಲ್ದಾರ್‌, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಂಜಿನಿಯರ್‌ಗಳು, ಜೆಸ್ಕಾಂ ಇಂಜಿನಿಯರ್‌ಗಳು, ಪಶುಪಾಲನಾ ಇಲಾಖೆ, ಕೃಷಿ ಇಲಾಖೆ ಅಧಿಕಾರಿಗಳು ಪ್ರತಿ ವಾರ ಸಭೆ ನಡೆಸಿ, ಚರ್ಚಿಸಬೇಕು. ಈ ಕುರಿತು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ವರದಿ ನೀಡಬೇಕು ಎಂದು ಸಚಿವರು ತಾಕೀತು ಮಾಡಿದರು.

ಕಲಬುರಗಿ ಪ್ರಾದೇಶಿಕ ಆಯುಕ್ತ ಸುಬೋಧ್‌ ಯಾದವ್‌ ಮಾತನಾಡಿ, ಮಳೆಗಾಲ ಇದ್ದರೂ ಕುಡಿಯುವ ನೀರಿನ ಅಭಾವ ಇರುವ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಬೇಕು ಎಂದು ಸೂಚಿಸಿದರು.

Advertisement

ಜಾನುವಾರುಗಳಿಗೆ ಮೇವಿನ ಅಭಾವ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಾದ್ಯಂತ 7 ಸ್ಥಳಗಳಲ್ಲಿ ಮೇವು ಬ್ಯಾಂಕ್‌ ತೆರೆಯಲಾಗಿದ್ದು, ಈ ಮೂಲಕ ರೈತರಿಗೆ ಪ್ರತಿ ಕೆ.ಜಿ.ಗೆ 2 ರೂ. ನಂತೆ ವಿತರಿಸಲಾಗುತ್ತಿದೆ. 17 ವಾರಗಳವರೆಗೆ ಮೇವಿನ ಕೊರತೆ ಇಲ್ಲ ಎಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕ ಡಾ| ಶರಣಭೂಪಾಲರೆಡ್ಡಿ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಮಾತನಾಡಿ, ಈ ವರ್ಷ ರೈತರು ಗದ್ದೆಗಳಲ್ಲಿ ಭತ್ತದ ಹುಲ್ಲು ಸುಡದಂತೆ ಮನವಿ ಮಾಡಲಾಗಿತ್ತು. ಅಭಿಯಾನಕ್ಕೆ ರೈತರು ಸ್ಪಂದಿಸಿದ ಕಾರಣ ಹೆಚ್ಚಿನ ಪ್ರಮಾಣದಲ್ಲಿ ಮೇವು ಸಂಗ್ರಹಿಸಲು ಸಾಧ್ಯವಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 7 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಪೈಕಿ 3 ಯೋಜನೆಗಳ ಪೈಪ್‌ಲೈನ್‌ ಉದ್ಘಾಟನೆಗೆ ಮುನ್ನವೇ ಹಾಳಾಗಿದ್ದು, ಈ ಬಗ್ಗೆ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಜೊತೆಗೆ ಇನ್ನು 15 ದಿನಗಳಲ್ಲಿ ಈ ಮೂರು ಬಹುಗ್ರಾಮ ಕುಡಿಯುವ ನೀರು ಯೋಜನೆಗಳಿಗೆ ಹೊಸ ಪೈಪ್‌ಲೈನ್‌ ಅಳವಡಿಸಿ, ವರದಿ ಸಲ್ಲಿಸುವಂತೆ ಸಚಿವರು ಸೂಚಿಸಿದರು.

ಈ ವೇಳೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ಶಾಸಕ ನಾಗನಗೌಡ ಕಂದಕೂರ ಮಾತನಾಡಿ, ಕಳಪೆ ಮಟ್ಟದ ಪೈಪ್‌ಗ್ಳನ್ನು ಅಳವಡಿಸಿರುವುದು ಪೈಪ್‌ಲೈನ್‌ ಹಾಳಾಗಲು ಕಾರಣವಾಗಿದೆ. ಸಭೆಗೆ ತಪ್ಪು ಮಾಹಿತಿ ನೀಡದಂತೆ ಇಂಜಿನಿಯರ್‌ಗಳನ್ನು ತರಾಟೆಗೆ ತೆಗೆದುಕೊಂಡರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಮಾತನಾಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 2019-20ನೇ ಸಾಲಿಗೆ 26.61 ಲಕ್ಷ ಮಾನವ ದಿನಗಳ ಗುರಿ ಹೊಂದಲಾಗಿದೆ. ಏಪ್ರಿಲ್ 1ರಿಂದ ಜೂನ್‌ 30ರ ವರೆಗೆ ಜಿಲ್ಲೆಯ ಮೂರೂ ತಾಲೂಕುಗಳಲ್ಲಿ ನಿಗದಿಪಡಿಸಿರುವ ಗುರಿಯಲ್ಲಿ 5.20 ಲಕ್ಷ ಮಾನವ ದಿನಗಳ ಗುರಿ ತಲುಪಲಾಗಿದೆ. ಇದು ಶೇ. 19.54ರಷ್ಟು ಸಾಧನೆಯಾಗುತ್ತದೆ ಎಂದು ವಿವರಿಸಿದರು.

ಜಂಟಿ ಕೃಷಿ ನಿರ್ದೇಶಕಿ ದೇವಿಕಾ ಆರ್‌. ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಆರಂಭವಾಗಿದ್ದು, ರೈತರು ಬಿತ್ತನೆ ಆರಂಭಿಸಿದ್ದಾರೆ. ಜಿಲ್ಲೆಯಾದ್ಯಂತ ಶೇ. 22ರಷ್ಟು ಮಳೆ ಕೊರತೆ ಇದೆ. 3.53 ಲಕ್ಷ ಹೆಕ್ಟೇರ್‌ ಒಟ್ಟು ಬಿತ್ತನೆ ಕ್ಷೇತ್ರದ ಗುರಿ ಇದ್ದು, ಮಳೆ ಕೊರತೆಯಿಂದಾಗಿ 8,862 ಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. ಬಿತ್ತನೆ ಬೀಜ ಮತ್ತು ರಸಗೊಬ್ಬರದ ಕೊರತೆ ಇಲ್ಲ ಎಂಬುದಾಗಿ ತಿಳಿಸಿದರು.

ಜಿಲ್ಲೆಯಲ್ಲಿ ಜಲಾಮೃತ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಈ ನಿಟ್ಟಿನಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸಬೇಕು. ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡುವುದಕ್ಕೆ ಅಂತ್ಯ ಹಾಡಿ, ಶಾಶ್ವತವಾಗಿ ನೀರು ಸಿಗುವಂತಾಗಲು ಅಂತರ್ಜಲ ಮಟ್ಟ ಹೆಚ್ಚಿಸಬೇಕು ಎಂದು ಸಚಿವರು ನಿರ್ದೇಶಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌, ಜಿಲ್ಲಾ ಪೊಲೀಸ್‌ ವರಿಷ್ಠಾಕಾರಿ ಋಷಿಕೇಶ ಭಗವಾನ್‌ ಸೋನವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next