ಯಾದಗಿರಿ: ಪ್ರತಿಯೊಬ್ಬರು ಪೋಲಿಯೋ ಲಿಸಿಕೆ ಹಾಕಿಸಿ ಮಕ್ಕಳನ್ನು ಮಹಾಮಾರಿ ಪೋಲಿಯೋದಿಂದ ರಕ್ಷಿಸಬೇಕು ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಹೇಳಿದರು.
ನಗರದ ಸ್ಟೇಷ್‌ನ ಏರಿಯಾದ ಅಂಬಾಭವಾನಿ ಮಂದಿರ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವತಿಯಿಂದ ರವಿವಾರ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಆರೋಗ್ಯ ದೃಷ್ಟಿಯಿಂದ ಲಸಿಕೆ ಹಾಕಿಸಿಕೊಳ್ಳುವುದು ಅವಶ್ಯಕವಾಗಿದೆ. ಎಲ್ಲ ತಾಯಂದಿರೂ ತಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು. ಪೋಷಕರು ನಿರ್ಲಕ್ಷಿಸದೆ 5 ವರ್ಷದ ಒಳಗಿನ ಎಲ್ಲ ಮಕ್ಕಳಿಗೆ ಲಸಿಕೆ ಹಾಕಿಸಬೇಕು. ತಮ್ಮ ಹತ್ತಿರದ ಬೂತ್ ಗಳಿಗೆ ತೆರಳಿ ತಪ್ಪದೇ ಮಕ್ಕಳಿಗೆ ಲಸಿಕೆ ಹಾಕಿಸಲೇಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಮಾತನಾಡಿ, ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋಮ ಲಸಿಕೆ ಹಾಕಿಸಬೇಕು. ಜಿಲ್ಲೆಯಿಂದ ಹೊರ ಹೋಗುವ ಹಾಗೂ ಬರುವ ವಲಸೆ ಮಕ್ಕಳು ಸೇರಿದಂತೆ ಕಳೆದ ಬಾರಿ ಪಲ್ಸ್ ಪೋಲಿಯೋದಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಯಾರೊಬ್ಬ ಮಗುವೂ ಲಸಿಕೆಯಿಂದ ವಂಚಿತವಾಗಬಾರದು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಪೋಲಿಯೋ ಲಸಿಕೆ ಹಾಳಾಗದಂತೆ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡಬೇಕು. ಪಲ್ಸ್ ಪೋಲಿಯೋ ಕಾರ್ಯಕ್ರಮ ಜಿಲ್ಲೆಯಲ್ಲಿ ಯಶಸ್ವಿಯಾಗಲು ಸಾರ್ವಜನಿಕ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಮತ್ತು ಸಂಘ ಸಂಸ್ಥೆಗಳ ಪಾತ್ರ ಮಹತ್ತರವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಸಮನ್ವಯತೆ ಸಾಧಿಸಿ ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ನಗರಸಭೆ ಸದಸ್ಯೆ ಜಯಮ್ಮ ಸುರೇಶ ಮಡ್ಡಿ, ಚಂದ್ರಕಲಾ ಚಂದ್ರಕಾಂತ ಮಡ್ಡಿ, ಜಿಲ್ಲಾ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಎಂ.ಎಸ್. ಪಾಟೀಲ, ಆರ್‌ಸಿಎಎಚ್‌ಓ ಡಾ| ಲಕ್ಷ್ಮೀಕಾಂತ, ಜಿಲ್ಲಾ ಕುಷ್ಠರೋಗ ನಿರ್ಮೂಲನೆ ಅಧಿಕಾರಿ ಡಾ| ಭಗವಂತ ಅನವಾರ, ತಾಲೂಕು ಆರೋಗ್ಯ ಅಧಿಕಾರಿ ಡಾ| ಹಣಮಂತರೆಡ್ಡಿ, ನಗರಸಭೆ ಪೌರಾಯುಕ್ತ ರಮೇಶ ಸುಣಗಾರ, ಡಾ| ನೂಮಾನ್, ಶಂಕರ ಬಿರಾದಾರ, ಮಹಿಪಾಲರೆಡ್ಡಿ, ಸಿದ್ದರಾಮರೆಡ್ಡಿ ಸೇರಿದಂತೆ ಅಂಗವಾಡಿ, ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಇದ್ದರು.