ಯಾದಗಿರಿ: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಇತರೆ ದೇಶಗಳಿಂದ ಮಹತ್ವದ ಸ್ಥಾನದಲ್ಲಿದೆ. ಪ್ರಜಾಪ್ರಭುತ್ವದ ಉಳಿವು ಮತ್ತು ರಾಷ್ಟ್ರದ ಭದ್ರತೆಗೆ 18 ವರ್ಷ ತುಂಬಿದ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡು ಕಡ್ಡಾಯವಾಗಿ ಮತದಾನ ಮಾಡುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ ಕಾರದ ಅಧ್ಯಕ್ಷ ಶಿವನಗೌಡ ಹೇಳಿದರು.
ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಕೆಲವು ದೇಶಗಳಲ್ಲಿ ಸರ್ವಾ ಧಿಕಾರ ದೋರಣೆ ಆಡಳಿತ ಇದೆ. ಅಲ್ಲಿ ಜನಿಸಿದ ಯಾರಿಗೂ ಮತದಾನದ ಸ್ವಾತಂತ್ರ್ಯವಿಲ್ಲ. ಆದರೆ ಸ್ವತಂತ್ರ ಭಾರತದಲ್ಲಿ ಮತದಾನ ಮಾಡುವುದು ಎಲ್ಲರ ಕರ್ತವ್ಯ ಮತ್ತು ಹಕ್ಕು. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗ ಈ ಮೂರು ಅಂಗಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಬೇಕು. ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಮತದಾನ ಮಾಡಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ನಾಮದೇವ ಕೆ. ಸಾಲಮಂಟಪಿ ಮಾತನಾಡಿ, ದೇಶವು ಹಲವು ಸಂಸ್ಕೃತಿ, ವರ್ಗ ಹಾಗೂ ವರ್ಣಗಳಿಂದ ಕೂಡಿದ್ದರೂ ಭಾರತದ ಸಂವಿಧಾನವು 18 ವರ್ಷ ತುಂಬಿದ ನಂತರ ಎಲ್ಲರಿಗೂ ಮತದಾನದ ಹಕ್ಕು ನೀಡಿದೆ. ಇದನ್ನು ಯಾವುದೇ ಪ್ರಭಾವ, ಆಸೆ-ಆಮಿಷಗಳಿಗೆ ಒಳಗಾಗದೇ ಮತ ಚಲಾಯಿಸಬೇಕು. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರ ಪ್ರಕಾಶ ಅರ್ಜುನ ಬನಸೊಡೆ ಮಾತನಾಡಿ, ರಾಷ್ಟ್ರೀಯ ಮತದಾರರ ದಿನವು 18 ವರ್ಷ ತುಂಬಿದವರಿಗೆ ಮತದಾನದ ಹಕ್ಕಿನ ಬಗ್ಗೆ ಜಾಗೃತಿ ಮಾಡಲು, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ತಿಳಿವಳಿಕೆ ನೀಡಲು ಆಚರಿಸಲಾಗುತ್ತದೆ. ಭವ್ಯ ಭಾರತದ ನಿರ್ಮಾಣಕ್ಕೆ ಮತದಾನದ ಹಕ್ಕು ಪ್ರಮುಖವಾಗಿದೆ. ಪ್ರತಿಯೊಬ್ಬರೂ ನಿಷ್ಪಕ್ಷಪಾತವಾಗಿ ಮತದಾನ ಮಾಡುವ ಮೂಲಕ ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ನೀಡಿದರು.
ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಬಿಎಲ್ ಒಗಳನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಹೊಸ ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಯಿತು.
ಸಿವಿಲ್ ನ್ಯಾಯಾಧೀಶ ಲೋಕೇಶ್ ಧನಪಾಲ ಹವಲೆ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಸ್ಮೀತಾ ಮಾಲಗಾಂವೆ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಡಿವೈಎಸ್‌ಪಿ ಯು. ಶರಣಪ್ಪ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಉಪಸ್ಥಿತರಿದ್ದರು.
ಸರ್ಕಾರಿ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿನಿ ಅಶ್ವಿನಿ ಪ್ರಾರ್ಥನಾ ಗೀತೆ ಹಾಡಿದರು. ಡಾನ್ ಬೊಸ್ಕೋ ಶಾಲೆ ವಿದ್ಯಾರ್ಥಿನಿ ಡಯಾನಾ ಹಾಗೂ ಸಂಗಡಿಗರು ರಾಷ್ಟ್ರಗೀತೆ ಮತ್ತು ನಾಡಗೀತೆ ಹಾಡಿದರು. ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ಸ್ವಾಗತಿಸಿದರು. ಶಿಕ್ಷಕ ಹಫೀಜ್ ಪಟೇಲ್ ನಿರೂಪಿಸಿದರು. ಸಹಾಯಕ ಆಯುಕ್ತ ಶಂಕರಗೌಡ ಎಸ್. ಸೋಮನಾಳ ವಂದಿಸಿದರು.