Advertisement

ನೀರಿನ ಕಾಮಗಾರಿಗಳಿಗೆ ವೇಗ ನೀಡಿ

06:26 PM Feb 06, 2020 | Naveen |

ಯಾದಗಿರಿ: ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿಗಳಿಗೆ ವೇಗ ನೀಡಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಾರದು ಎಂದು ಪ್ರವಾಸೋದ್ಯಮ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ. ಅನಿಲಕುಮಾರ ಸೂಚಿಸಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಬುಧವಾರ ನಡೆಸಿದ ಪ್ರಮುಖ ವಿಷಯಗಳ ಚರ್ಚಾ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯ 386 ಶುದ್ಧ ಕುಡಿಯುವ ನೀರಿನ ಘಟಕಗಳ ಪೈಕಿ 274 ಮಾತ್ರ ಕಾರ್ಯಾಚರಣೆ ಮಾಡುತ್ತಿವೆ. ಬಾಕಿ 112 ಘಟಕಗಳು ಕಾರ್ಯಾಚರಣೆಯಲ್ಲಿಲ್ಲ. ಇಷ್ಟೊಂದು ಘಟಕಗಳು ಸ್ಥಗಿತಗೊಂಡಿದ್ದರೆ ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆ ಉಂಟಾಗಬಹುದು. ತಕ್ಷಣ ಇವುಗಳನ್ನು ಸರಿಪಡಿಸಬೇಕು. ಅದೇ ರೀತಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗಳ ಚಾಲ್ತಿಗೆ ಕೂಡ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.

ನಗರ ಪ್ರದೇಶದಲ್ಲಿ ಕೈಗೊಂಡಿದ್ದ 500 ಕಾಮಗಾರಿಗಳಲ್ಲಿ 495 ಪೂರ್ಣಗೊಂಡಿವೆ. ಆದರೆ, ಆರ್ಥಿಕ ಪ್ರಗತಿ ಶೇ.61.30ರಷ್ಟಿದೆ. ಕಾಮಗಾರಿಗಳ ಭೌತಿಕ ಪ್ರಗತಿಗೆ ತಕ್ಕಂತೆ ಆರ್ಥಿಕ ಪ್ರಗತಿ ಸಾಧಿಸಬೇಕು. ಇನ್ನು ಜಿಲ್ಲೆಯಲ್ಲಿ ಪ್ರವಾಹ ಸಂದರ್ಭದಲ್ಲಿ ಉಂಟಾದ ರಸ್ತೆ ಮತ್ತು ಸೇತುವೆಗಳ ದುರಸ್ತಿಗೆ ಸಂಬಂಧಿಸಿದ ಕಾಮಗಾರಿಗಳನ್ನು ಪಂಚಾಯತ್‌ ರಾಜ್‌ ಇಂಜಿನೀಯರಿಂಗ್‌ ವಿಭಾಗ ಮತ್ತು ಲೋಕೋಪಯೋಗಿ ಇಲಾಖೆ ಇಂಜಿನಿಯರರು ಮಾರ್ಚ್‌ ಅಂತ್ಯಕ್ಕೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಮಾತನಾಡಿ, ಬೆಳೆ ಸಮೀಕ್ಷೆ ವಿವರ, ವಸತಿ ಯೋಜನೆ, ನಗರೋತ್ಥಾನ ಕಾಮಗಾರಿಗಳ ಪ್ರಗತಿ, ಜಲಾಮೃತ ಹಾಗೂ ಜಲಸಂವರ್ಧನೆ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಗೆ ನಿಗದಿಪಡಿಸಿದ 26.61 ಲಕ್ಷ ಮಾನವ ದಿನಗಳ ಗುರಿಯಲ್ಲಿ ಈಗಾಗಲೇ 20.45 ಲಕ್ಷ ಮಾನವ ದಿನಗಳನ್ನು ಪೂರ್ಣಗೊಳಿಸಿದ್ದು, ಶೇ.76.85ರಷ್ಟು ಸಾಧನೆ ಮಾಡಲಾಗಿದೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಎಸ್‌. ಸೋಮನಾಳ, ಜಿಪಂ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಜಂಟಿ ಕೃಷಿ ನಿರ್ದೇಶಕಿ ಆರ್‌ .ದೇವಿಕಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next