ಯಾದಗಿರಿ: ಜೂನ್ 12ರಂದು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಎಲ್ಲಾ ಇಲಾಖೆಗಳ ಮತ್ತು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕು ಮಟ್ಟದಲ್ಲಿಯೂ ಸಹ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ದಿನಾಂಕವನ್ನು ನಿಗದಿಪಡಿಸಿಕೊಂಡು ಸಮಿತಿ ಸದಸ್ಯರು ಹಾಗೂ ಸಂಬಂಧಿಸಿದ ಎಲ್ಲಾ ಇಲಾಖೆಗಳು ಮತ್ತು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಅರ್ಥಪೂರ್ಣವಾಗಿ ಆಚರಿಸಬೇಕು. ಅಂದು ಬೆಳಗ್ಗೆ 11:00 ಗಂಟೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಿರುವ ಸ್ಥಳದಲ್ಲಿ ಒಟ್ಟಾಗಿ ಸೇರಿ ಪ್ರತಿಜ್ಞಾವಿಧಿ ಸ್ವೀಕರಿಸಬೇಕು ಎಂದು ತಿಳಿಸಿದರು.
ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಬಾಲ ಕಾರ್ಮಿಕ ಪದ್ಧತಿ, ಬಾಲ್ಯವಿವಾಹ ನಿರ್ಮೂಲನೆ ಕುರಿತು ಛಾಯಾಚಿತ್ರಗಳ ಸಮೇತ ಮಕ್ಕಳಲ್ಲಿ ಮತ್ತು ಸಾರ್ವನಿಕರಲ್ಲಿ ಅರಿವು ಮೂಡಿಸಿದಾಗ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಇಟ್ಟಂಗಿ ಭಟ್ಟಿ ನಡೆಸುವ ಪ್ರದೇಶದಲ್ಲಿ, ಕಟ್ಟಡ ನಿರ್ಮಾಣ ಪ್ರದೇಶಗಳಲ್ಲಿ ಬಾಲ ಕಾರ್ಮಿಕರು ಹೆಚ್ಚಾಗಿ ಕೆಲಸ ಮಾಡುತ್ತಾರೆ. ಅಂತಹ ಪ್ರದೇಶಗಳಲ್ಲಿ ಹಾಗೂ ಹೆಚ್ಚು ಪ್ರಕರಣಗಳು ಕಂಡು ಬರುವ ಪ್ರದೇಶಗಳಲ್ಲಿ ಬಾಲ ಕಾರ್ಮಿಕ ಪದ್ಧತಿ ಹಾಗೂ ಬಾಲ್ಯವಿವಾಹ ನಿರ್ಮೂಲನೆಗೆ ಶ್ರಮಿಸುತ್ತಿರುವ ಸಂಘ-ಸಂಸ್ಥೆಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳ ಸಹಯೋಗದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ನಿರ್ದೇಶಿಸಿದರು.
ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ, ಆಟೊ ಪ್ರಚಾರ, ಬೀದಿ ನಾಟಕ, ಕರಪತ್ರ ವಿತರಣೆ, ಜನಸಾಂದ್ರತೆ ಇರುವ ಸ್ಥಳಗಳಾದ ಬಸ್ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಮಳಿಗೆ ಸ್ಥಾಪಿಸಿ ಬಾಲಕಾರ್ಮಿಕ ನಿರ್ಮೂಲನೆ ಕುರಿತು ಜನಜಾಗೃತಿ ಮೂಡಿಸಬೇಕು. ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮಕ್ಕಳು ಬಾಲ ಕಾರ್ಮಿಕರಾಗುತ್ತಿರುವ ಹಾಗೂ ಬಾಲ್ಯ ವಿವಾಹ ನಡೆಯುತ್ತಿರುವ ಬಗ್ಗೆ ಹೆಚ್ಚು ಮಾಹಿತಿ ಹೊಂದಿರುತ್ತಾರೆ. ಅವರಿಂದ ಮಾಹಿತಿ ಪಡೆದು ಸಂಬಂಧಪಟ್ಟ ಅಧಿಕಾರಿಗಳು ಇವುಗಳ ತಡೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
1986ರ ಕಾಯ್ದೆಯಡಿಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಕಾಯ್ದೆ ತಿದ್ದುಪಡಿಯಂತೆ ಜಿಲ್ಲೆಯಾದ್ಯಂತ ಸಮೀಕ್ಷೆಯನ್ನು ಕೈಗೊಂಡು ಪತ್ತೆ ಹಚ್ಚಲಾದ ಬಾಲ ಕಾರ್ಮಿಕ ಮಕ್ಕಳು, ಶಾಲೆಯಿಂದ ಹೊರಗುಳಿದ ಮಕ್ಕಳು, ಚಿಂದಿ ಆಯುವ, ಭಿಕ್ಷೆ ಬೇಡುವ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ಮಕ್ಕಳನ್ನು ದುಡಿಮೆಯಿಂದ ಬಿಡಿಸಿ, ಕಾಯ್ದೆ- 2009ರ ಅನ್ವಯ ಎಲ್ಲಾ ಮಕ್ಕಳನ್ನು ನೇರವಾಗಿ ಸರ್ವ ಶಿಕ್ಷಣ ಅಭಿಯಾನ ವತಿಯಿಂದ ಮಕ್ಕಳನ್ನು ಹತ್ತಿರದ ಶಾಲೆಗಳಿಗೆ ಕಡ್ಡಾಯವಾಗಿ ದಾಖಲಿಸಲು/ ಮುಖ್ಯವಾಹಿನಿಗೆ ಸೇರಿಸಲು/ ಪುನರ್ವಸತಿ ಕಲ್ಪಿಸಿಕೊಡಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.
ಶಾಲಾ ಹಂತದಲ್ಲಿ ಶಿಕ್ಷಕರು ಬಾಲ ಕಾರ್ಮಿಕ ವಿರೋಧಿ ದಿನ, ಬಾಲ್ಯ ವಿವಾಹ ನಿಷೇಧ ದಿನ, ಪರಿಸರ ದಿನವೆಂದು ವಿಶೇಷ ವಿಷಯದ ಕುರಿತು ಪ್ರತಿದಿನ ಒಂದು ಗಂಟೆ ಆಚರಣೆ ಮಾಡಬೇಕು. ಇದರಿಂದ ಮಕ್ಕಳ ಮನಸ್ಸಿನಲ್ಲಿ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ ಸೋನವಣೆ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್. ಸೋಮನಾಳ, ಪೌರಾಯುಕ್ತರಾದ ರಮೇಶ ಸುಣಗಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಭಾಕರ, ತಹಶೀಲ್ದಾರ್ ಸುರೇಶ ಅಂಕಲಗಿ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪೂರ್ಣಿಮಾ ಚೂರಿ, ಜಿಲ್ಲಾ ಬಾಲಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕರಾದ ರಘುವೀರ ಸಿಂಗ್ ಠಾಕೂರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿರಾದಾರ ಶಂಕರ, ಕಾರ್ಮಿಕ ನಿರೀಕ್ಷಕರಾದ ಶಿವಶಂಕರ ಬಿ. ತಳವಾರ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.